ಇಷ್ಟು ಕಳಪೆ ಬಜೆಟ್ ನಾನು ನೋಡಿರಲಿಲ್ಲ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು: ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಇಞ್ಟು ಕಳಪೆ ಬಜೆಟ್ ನಾನು ನೋಡಿರಲಿಲ್ಲ ಎಂದು ಕೇಂದ್ರ ಬಜೆಟ್ ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ವಿಧಾನಸೌಧದಲ್ಲಿ ಕೇಂದ್ರ ಬಜೆಟ್ ಕುರಿತ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಡಿಕೆಶಿ, “ನಾನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡಿ ಈ ಬಾರಿಯ ಬಜೆಟ್ ನಲ್ಲಿ ರಾಜ್ಯದ ಯೋಜನೆಗಳಿಗೆ ಆದ್ಯತೆ ನೀಡಬೇಕು, ನೀರಾವರಿ ಯೋಜನೆಗಳಿಗೆ ಈಗಾಗಲೇ ಘೋಷಣೆ ಮಾಡಿರುವ ಹಣ ಇನ್ನೂ ಬಿಡುಗಡೆಯಾಗಿಲ್ಲ. ಕರ್ನಾಟಕ ರಾಜ್ಯದಿಂದ ನೀವು ಆಯ್ಕೆಯಾಗಿದ್ದು, ರಾಜ್ಯದ ಯೋಜನೆಗಳು ಹಾಗೂ ಬೆಂಗಳೂರಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮನವಿ ಮಾಡಿದ್ದೆ. ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಮಂತ್ರಿಗಳ ಭೇಟಿಗೆ ಕಾಲಾವಕಾಶ ಕೋರಿದ್ದೆ. ಕಳೆದ ಬಜೆಟ್ ಗಳಲ್ಲಿ ಭದ್ರ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5 ಸಾವಿರ ಕೋಟಿಯನ್ನು ಇನ್ನೂ ನೀಡಿಲ್ಲ. ಈ ಬಾರಿಯ ಬಜೆಟ್ ನಲ್ಲೂ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ಅನ್ಯಾಯದ ವಿರುದ್ಧ ಯಾವ ರೀತಿಯ ಹೋರಾಟ ಮಾಡಬೇಕು ಎಂದು ಚರ್ಚೆ ಮಾಡುತ್ತೇವೆ. ಚುನಾವಣಾ ಪೂರ್ವ ಬಜೆಟ್ ನಲ್ಲಿ ಜನರಿಗೆ ಏನು ನೀಡುತ್ತೇವೆ ಎಂಬುದನ್ನು ಸ್ಪಷ್ಟವಾಗಿ ಹೇಳಬಹುದಾಗಿತ್ತು. ಈ ಬಜೆಟ್ ನಲ್ಲಿ ಬಹಳ ನಿರಾಸೆಯಾಗಿದೆ” ಎಂದು ತಿಳಿಸಿದರು.
“ನಮ್ಮ ಗ್ಯಾರಂಟಿ ಯೋಜನೆಗಳು ಐದು ವರ್ಷಗಳ ಕಾಲ ಇರಲಿದೆ. ಇದು ನಮ್ಮ ಬದ್ಧತೆ. ಈ ಐದು ವರ್ಷಗಳ ನಂತರವೂ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಆಗಲೂ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ” ಎಂದು ಅವರು ತಿಳಿಸಿದರು.