ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ಗೌರವಿಸುತ್ತೇನೆ : ಸಿಎಂ ಸಿದ್ದರಾಮಯ್ಯ

Update: 2024-10-01 05:57 GMT

ಬೆಂಗಳೂರು : "ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ. ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ " ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಡಾದಿಂದ ಪಡೆದಿರುವ 14 ನಿವೇಶನಗಳನ್ನು ಹಿಂದಿರುಗಿಸುತ್ತಿರುವುದಾಗಿ ತಮ್ಮ ಪತ್ನಿ ಪಾರ್ವತಿಯವರು ಮುಡಾ ಆಯುಕ್ತರಿಗೆ ಬರೆದಿರುವ ಪತ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ, "ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ. ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು. ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ" ಎಂದಿದ್ದಾರೆ.

"ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ. ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ" ಎಂದು ಟ್ವೀಟ್‌ ನಲ್ಲಿ ತಿಳಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News