ಚನ್ನಪಟ್ಟಣದಲ್ಲಿ ಗೆದ್ದರೂ, ಸೋತರೂ ನಾನೇ ಹೊಣೆ: ಡಿ.ಕೆ. ಶಿವಕುಮಾರ್

Update: 2024-11-22 16:20 GMT

ಡಿ.ಕೆ. ಶಿವಕುಮಾರ್ (Photo: X)

ಬೆಂಗಳೂರು: ಚನ್ನಪಟ್ಟಣದಲ್ಲಿ ಗೆದ್ದರೂ ನಾನು ಗೆದ್ದಂತೆ, ಸೋತರೂ ನಾನು ಸೋತಂತೆ. ಯೋಗೇಶ್ವರ್ ಗೆ ಟಿಕೆಟ್ ಕೊಟ್ಟಿದ್ದೇ ನಾನು. ನನ್ನ ಮುಖ ಇಟ್ಟುಕೊಂಡೆ ಚುನಾವಣೆ ಮಾಡಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಶುಕ್ರವಾರ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಾನು ಅಭ್ಯರ್ಥಿ ಎಂದು ಹೇಳಿಕೊಂಡ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ಕೂಡ ನಾನು ಅಭ್ಯರ್ಥಿ ಎಂದು ಹೇಳಿಕೊಂಡಿದ್ದರು. ಚನ್ನಪಟ್ಟಣದಲ್ಲಿ ಗೆಲ್ಲುವ ವಿಶ್ವಾಸದಲ್ಲಿ ನಾವಿದ್ದೇವೆ ಎಂದರು.

ಚುನಾವಣೋತ್ತರವಾಗಿ ನಡೆದಿರುವ ಮೂರು ಕ್ಷೇತ್ರದ ಸಮೀಕ್ಷೆಗಳ ಫಲಿತಾಂಶ ಸುಳ್ಳಾಗಲಿದೆ. ರಾಜ್ಯ ವಿಧಾನಸಭೆ ಚುನಾವಣೆ, ಹರ್ಯಾಣ ವಿಧಾನಸಭೆ ಚುನಾವಣೆಗಳಲ್ಲಿ ಸಮೀಕ್ಷೆ ಸುಳ್ಳಾಗಿವೆ. ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.

ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆಯಾದರೆ ಶಾಸಕರನ್ನು ಕರೆತರುವ ವಿಚಾರವಾಗಿ ಎಐಸಿಸಿಯ ಯಾವುದೇ ನಾಯಕರು ನನ್ನನ್ನು ಸಂಪರ್ಕ ಮಾಡಿಲ್ಲ. ಅವರು ಈ ವಿಚಾರವಾಗಿ ನನ್ನನ್ನು ಸಂಪರ್ಕಿಸಿದರೆ ಬೇರೆ ವಿಚಾರ. ಈಗಿನವರೆಗೂ ನಮ್ಮಲ್ಲಿ ಅಂತಹ ಯಾವುದೇ ಆಲೋಚನೆಗಳಿಲ್ಲ ಎಂದು ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.

ವಯನಾಡಿನಲ್ಲಿ ಕಾಂಗ್ರೆಸ್ ಭಾರಿ ಮತಗಳ ಅಂತರದಲ್ಲಿ ಗೆಲ್ಲಲಿದೆ. ಅಲ್ಲಿನ ಶೇ.20ರಷ್ಟು ಮತದಾರರು ಬೇರೆ ದೇಶಗಳಲ್ಲಿದ್ದು, ಮತ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಬಿಜೆಪಿ ವಿರುದ್ಧ ಮಾನಹಾನಿ ಪ್ರಕರಣ: ‘ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಹಾರಾಷ್ಟ್ರದಲ್ಲಿ ಬಿಜೆಪಿ ಸುಳ್ಳು ಪ್ರಚಾರ ಮಾಡಿರುವ ಬಗ್ಗೆ ದೂರು ದಾಖಲಿಸುತ್ತೇವೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಚಾರವಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ನಾವು ಅವರ ಮೇಲೆ ಮಾನಹಾನಿ ಪ್ರಕರಣ ದಾಖಲಿಸುತ್ತೇವೆ. ಬಿಜೆಪಿ ನಾಯಕರಿಗೆ ಕನಿಷ್ಠ ಪರಿಜ್ಞಾನವೂ ಇಲ್ಲ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News