ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ-ವರ್ಗಾವಣೆ
ಬೆಂಗಳೂರು : ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಹಾಗೂ ಓರ್ವ ಐಎಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.
ಹೆಚ್ಚುವರಿ ಹೊಣೆಗಾರಿಕೆ: ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ಸರಕಾರದ ಕಾರ್ಯದರ್ಶಿ ಡಾ.ಏಕ್‍ರೂಪ್ ಕೌರ್ ಅವರನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ರಾಜ್ಯ ಲೋಕಸೇವಾ ಆಯೋಗದ ಕಾರ್ಯದರ್ಶಿ ರಮಣ್‍ದೀಪ್ ಚೌಧರಿ ಅವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ. ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ(ಕ್ರೈಸ್)ಯ ಕಾರ್ಯಕಾರಿ ನಿರ್ದೇಶಕ ಕಾಂತರಾಜು ಪಿ. ಅವರಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್ ಪಿ.ಬಾಗೇವಾಡಿ ಅವರನ್ನು ಕೋಲಾರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.