ಅನಂತಕುಮಾರ್ ಇದ್ದಿದ್ದರೆ ಕಾವೇರಿ ವಿವಾದ ಇಷ್ಟರ ಮಟ್ಟಿಗೆ ಆಗುತ್ತಿರಲಿಲ್ಲ: ಡಿ.ಕೆ.ಶಿವಕುಮಾರ್

Update: 2023-09-23 15:29 GMT

ಬೆಂಗಳೂರು, ಸೆ.23: ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಅವರು ಇದ್ದಿದ್ದರೆ ಯಾವುದೇ ಕಾರಣಕ್ಕೂ ಕಾವೇರಿ ವಿವಾದ ಇಷ್ಟರಮಟ್ಟಿಗೆ ಹೋಗಲು ಬಿಡುತ್ತಿರಲಿಲ್ಲ. ಅವರು ಅಜಾತಶತ್ರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಶನಿವಾರ ನಗರದಲ್ಲಿ ಆಯೋಜಿಸಲಾಗಿದ್ದ ‘ಅನಂತ ನಮನ-64’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅನಂತಕುಮಾರ್ ಕೇಂದ್ರ ಸಚಿವರಾಗಿದ್ದಾಗ ಕಾವೇರಿ ನೀರಿನ ಬಗ್ಗೆ ರಾತ್ರೋರಾತ್ರಿ ಅಫೀಡವಿಟ್ ಬದಲಾಯಿಸಿ ಕರ್ನಾಟಕದ ಪರವಾಗಿ ನಿಂತಿದ್ದರು. ರಾಜ್ಯದ ಹಿತಾಸಕ್ತಿಗೆ ಯಾವುದೆ ತೊಂದರೆ ತೆಗೆದುಕೊಳ್ಳಲು ಅವರು ಸದಾ ತಯಾರಿರುತ್ತಿದ್ದರು ಎಂದರು.

1985ರಲ್ಲಿ ನನಗೆ ಮೊದಲ ಬಾರಿಗೆ ವಿಧಾನಸಭೆ ಟಿಕೆಟ್ ಸಿಕ್ಕಿದಾಗ, ಅನಂತ್‍ಕುಮಾರ್ ರಹಸ್ಯವಾಗಿ 5 ಸಾವಿರ ಹಣ ನೀಡಿದ್ದರು. ರಾಜ್ಯದ ಪರವಾಗಿ ನಿಲ್ಲುತ್ತಿದ್ದ ಅವರನ್ನು ಸರ್ವಪಕ್ಷ ಸಭೆಯಲ್ಲಿ ಎಲ್ಲರೂ ನೆನಪಿಸಿಕೊಂಡರು. ನನ್ನ ಸಹೋದರಿ ತೇಜಸ್ವಿನಿ ಧೈರ್ಯ ಮಾಡಿ ರಾಜಕೀಯದಲ್ಲಿ ಮುನ್ನುಗ್ಗಬೇಕು. ಅನಂತಕುಮಾರ್ ಅವರ ಜೊತೆ ಸಂಸಾರ ಮಾಡಿ ನಿಮ್ಮದೇ ಆದ ರಾಜಕೀಯ ಜ್ಞಾನವಿದೆ, ನೀವು ರಾಜಕೀಯಕ್ಕೆ ಬರಬೇಕು ಎಂದು ಅವರು ಆಹ್ವಾನ ನೀಡಿದರು.

ನಿಮ್ಮ ಇತಿಹಾಸವನ್ನು ಯಾರೂ ಬದಲಾವಣೆ ಮಾಡಲು, ಮುಚ್ಚಿಹಾಕಲು ಆಗುವುದಿಲ್ಲ. ಒಳ್ಳೆ ಕೆಲಸ ಮಾಡಿ ನಿಮ್ಮದೇ ಆದ ಛಾಪನ್ನು ಮೂಡಿಸಿಕೊಂಡಿದ್ದೀರಿ. ನಿಮ್ಮ ಜೊತೆ ರಾಜಕೀಯ ಭಿನ್ನಾಭಿಪ್ರಾಯ ಇರಬಹುದು. ಆದರೆ ನಿಮ್ಮ ಬಳಿ ಮೃದು ಹೃದಯವಿದೆ. ಅನಂತಕುಮಾರ್ ಅವರು ಹೆಜ್ಜೆ ಗುರುತುಗಳನ್ನು ಬಿಟ್ಟು ಹೋಗಿದ್ದಾರೆ, ನೀವು ಹೆಜ್ಜೆ ಗುರುತು ಮೂಡಿಸಿ ಎಂದು ಶಿವಕುಮಾರ್ ಹಾರೈಸಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News