ಸಮಸ್ಯೆಗಳಿದ್ದರೆ ನನ್ನನ್ನೆ ಸಂಪರ್ಕಿಸಿ, ಸರಕಾರಕ್ಕೆ ಧಕ್ಕೆ ಬರುವಂತೆ ವರ್ತಿಸಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಆ. 8: ‘ಶಾಸಕರು ಯಾವುದೆ ಸಮಸ್ಯೆಗಳು ಇದ್ದರೆ ನೇರವಾಗಿ ನನ್ನನ್ನು ಸಂಪರ್ಕಿಸಬಹುದು. ಆದರೆ, ಸರಕಾರಕ್ಕೆ ಧಕ್ಕೆ ಬರುವ ರೀತಿಯಲ್ಲಿ ವರ್ತಿಸಬೇಡಿ’ ಎಂದು ಶಾಸಕರು ಹಾಗೂ ಸಚಿವರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ರಾಯಚೂರು, ವಿಜಯಪುರ, ಕೊಪ್ಪಳ, ಬೆಳಗಾವಿ, ಹಾವೇರಿ ಹಾಗೂ ಕಲಬುರಗಿ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರೊಂದಿಗೆ ಪ್ರತ್ಯೇಕವಾಗಿ ಜಿಲ್ಲಾವರು ಸಭೆ ನಡೆಸಿದ ಅವರು, ಶಾಸಕರ ಅಹವಾಲುಗಳನ್ನು ಆಲಿಸಿದರು.
ಶಾಸಕರು ಹಾಗೂ ಪಕ್ಷದ ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸುವ ಕೆಲಸವನ್ನು ಸಚಿವರು ಮಾಡಬೇಕು. ಯಾವುದೆ ಕಾರಣಕ್ಕೂ ಶಾಸಕರು ಹಾಗೂ ಕಾರ್ಯಕರ್ತರ ಮನಸ್ಸಿಗೆ ನೋವಾಗುವಂತೆ ನಡೆದುಕೊಳ್ಳಬಾರದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯಬೇಕು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ ಎನ್ನಲಾಗಿದೆ.
ವಿಧಾನಸಭೆಯ ಫಲಿತಾಂಶದಿಂದ ಮೈಮರೆಯಬೇಡಿ, ಲೋಕಸಭಾ ಚುನಾವಣೆ ನಮ್ಮ ಪಾಲಿಗೆ ಅತ್ಯಂತ ಪ್ರಮುಖವಾಗಿದೆ. ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಮೇಲೆ ಹೆಚ್ಚು ನಂಬಿಕೆ ಇರಿಸಿಕೊಂಡಿದೆ. ಅದಕ್ಕೆ ಪೂರಕವಾಗುವಂಥೆ ನಾವು ಈಗಿನಿಂದಲೆ ಲೋಕಸಭಾ ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಶಾಸಕರ ಕ್ಷೇತ್ರಗಳಿಗೆ ಅನುದಾನವನ್ನು ಹಣಕಾಸಿನ ಲಭ್ಯತೆಗೆ ಅನುಗುಣವಾಗಿ ಹಂಚಿಕೆ ಮಾಡಲಾಗುವುದು. ಈ ಬಗ್ಗೆ ಯಾವುದೆ ಆತಂಕ ಬೇಡ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ರಾಜ್ಯ ಸರಕಾರದ ವಿರುದ್ಧ ವಿಪಕ್ಷಗಳು ಟೀಕಾಪ್ರಹಾರಗಳನ್ನು ನಡೆಸಲು ಆಡಳಿತ ಪಕ್ಷದ ಶಾಸಕರು, ಸಚಿವರು ಯಾವುದೆ ಕಾರಣಕ್ಕೂ ಅವಕಾಶಗಳನ್ನು ನೀಡಬಾರದು. ಶಾಸಕಾಂಗ ಪಕ್ಷದ ಸಭೆಯಲ್ಲಿ ಕೊಟ್ಟ ಮಾತಿನಂತೆ ಪ್ರತಿಯೊಬ್ಬ ಶಾಸಕರನ್ನು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲೆ ಪ್ರತ್ಯೇಕವಾಗಿ ಸಭೆಗಳನ್ನು ನಡೆಸಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ ಎನ್ನಲಾಗಿದೆ.