ಮನೆಗೆ ಅಕ್ರಮ ವಿದ್ಯುತ್ ಸಂಪರ್ಕ ವಿಚಾರ: ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ, ದಂಡ ಕಟ್ಟುತ್ತೇನೆ ಎಂದ ಕುಮಾರಸ್ವಾಮಿ

Update: 2023-11-14 07:23 GMT

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಅವರ ನಿವಾಸದ ದೀಪಾಲಂಕಾರಕ್ಕೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಬಗ್ಗೆ ಕಾಂಗ್ರೆಸ್  ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ಸಮೇತ ಆರೋಪ ಮಾಡಿದ್ದು, ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ. 

''ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ'' ಎಂದು ಅವರು ಟ್ವೀಟ್ ಮಾಡಿದ್ದಾರೆ. 

''ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ಕಾಂಗ್ರೆಸ್ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ'' ಎಂದೂ ಅವರು ಹೇಳಿದ್ದಾರೆ. 

''ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ''

''ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ'' ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. 

ಕಾಂಗ್ರೆಸ್ ಹಂಚಿಕೊಂಡಿರುವ ವೀಡಿಯೊ ಇಲ್ಲಿದೆ... 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News