ಪಿಎಸ್ಐ ನೇಮಕಾತಿ ಅಕ್ರಮ: ಸಿಎಂ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದ ನ್ಯಾ. ಬಿ. ವೀರಪ್ಪ ಆಯೋಗ
ಬೆಂಗಳೂರು: ಬಿಜೆಪಿ ಸರಕಾರದ ಅವಧಿಯಲ್ಲಿ 545 ಪೊಲೀಸ್ ಸಬ್‍ಇನ್ ಸ್ಪೆಕ್ಟರ್(ಪಿಎಸ್‌ಐ )ಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ವಿಚಾರಣೆ ನಡೆಸಿರುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ಆಯೋಗವು ತನ್ನ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತು.
ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಗದ ಅಧ್ಯಕ್ಷರೂ ಆಗಿರುವ ನ್ಯಾಯಮೂರ್ತಿ ಬಿ.ವೀರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವರದಿಯನ್ನು ಸಲ್ಲಿಕೆ ಮಾಡಿದರು. 2023ರ ಅಕ್ಟೋಬರ್ ನಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ತನಿಖೆ ನಡೆಸಿದ್ದ ಸಿಐಡಿ ಪೊಲೀಸರು, ಹಿರಿಯ ಪೊಲೀಸ್ ಅಧಿಕಾರಿಯು ಸೇರಿದಂತೆ ನೂರಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದರು.
ಈ ಮಧ್ಯೆ 2023ರ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಈ ಹಗರಣದ ವಿಚಾರಣೆಗೆ ನ್ಯಾ.ಬಿ.ವೀರಪ್ಪ ನೇತೃತ್ವದ ಆಯೋಗವನ್ನು ನೇಮಿಸಿತ್ತು. ಆಯೋಗವು ಈ ಅಕ್ರಮ ಸಂಬಂಧ ವಿಚಾರಣೆ ನಡೆಸಿ, ಅಗತ್ಯ ಮಾಹಿತಿ ಸಂಗ್ರಹಿಸಿದ ಆಯೋಗವು ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಕೆ ಮಾಡಿದೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಚ್ಚವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜ್ ಮತ್ತು ನಸೀರ್ ಅಹಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.