ವಾಲ್ಮೀಕಿ ನಿಗಮದಲ್ಲಿ ಅಕ್ರಮ | ಸಚಿವರ ಜೊತೆಗೆ ಮುಖ್ಯಮಂತ್ರಿಯೂ ರಾಜೀನಾಮೆ ನೀಡಲಿ : ಆರ್‌.ಅಶೋಕ್

Update: 2024-06-06 11:31 GMT

Photo : x/@RAshokaBJP

ಬೆಂಗಳೂರು : ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನೇರವಾಗಿ ಶಾಮೀಲಾಗಿದ್ದಾರೆ. ಸಚಿವ ಬಿ.ನಾಗೇಂದ್ರ ಜೊತೆ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ಅವರ ತಕ್ಷಣದ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ನಾಯಕರು, ವಿಧಾನಸೌಧದಿಂದ ರಾಜಭವನವರೆಗೆ ತೆರಳಿ, ರಾಜ್ಯಪಾಲರಿಗೆ ದೂರು ಸಲ್ಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌.ಅಶೋಕ್, "ಸಚಿವ ಬಿ.ನಾಗೇಂದ್ರ ಅವರು ಈ ಪ್ರಕರಣದಲ್ಲಿ ಸಣ್ಣ ಆರೋಪಿ. ಇದಕ್ಕೂ ದೊಡ್ಡ ಆರೋಪಿಗಳು ಇದರ ಹಿಂದೆ ಇದ್ದಾರೆ. ಈ ಎಲ್ಲ ಸತ್ಯ ಹೊರಬರಲು ಪ್ರಕರಣವನ್ನು ಸಿಬಿಐಗೆ ನೀಡಬೇಕು. ಸಿಎಂ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ನೀಡಬೇಕು. ಅಕ್ರಮದ ಹಣವನ್ನು ಸಚಿವರೊಬ್ಬರೇ ನುಂಗಿಲ್ಲ. ಇದರಲ್ಲಿ ಇಡೀ ಸಚಿವ ಸಂಪುಟ ಶಾಮೀಲಾಗಿದ್ದು, ಹಣ ಹೈದರಾಬಾದ್‌ಗೆ ಹೋಗಿ ನಂತರ ದಿಲ್ಲಿಗೆ ತಲುಪಿದೆ. ತನ್ನ ಬುಡಕ್ಕೆ ಬಂದು ಬಿಡುತ್ತದೆ ಎಂಬ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಸಿಬಿಐ ತನಿಖೆ ಮಾಡಿಸಲು ಒಪ್ಪುತ್ತಿಲ್ಲ. ರಾಹುಲ್‌ ಗಾಂಧಿ ಹಾಗೂ ರಣದೀಪ್‌ ಸಿಂಗ್‌ ಸುರ್ಜೇವಾಲ ಕೂಡ ಇದಕ್ಕೆ ಉತ್ತರ ನೀಡಬೇಕು" ಎಂದು ಆಗ್ರಹಿಸಿದರು.

ʼಬಡವರಿಗೆ ಸೇರಬೇಕಾಗಿದ್ದ ಹಣ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೇಬಿಗೆ ಹೋಗಿದೆ. ಪರಿಶಿಷ್ಟ ಜಾತಿ, ಪಂಗಡದ ಹಣವನ್ನೂ ನುಂಗುತ್ತಾರೆ ಎನ್ನುವುದು ರಾಜ್ಯ ರಾಜಕೀಯದ ದುರಂತ. 14 ಬಾರಿ ಬಜೆಟ್‌ ಮಂಡಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ಈಗ ಅವರ ಕಣ್ಣಿನಡಿಯಲ್ಲೇ ಹಗರಣ ನಡೆದಿದೆ. ಒಂದು ವರ್ಷ ಕಾಂಗ್ರೆಸ್‌ ಸರ್ಕಾರ ಲೂಟಿ ಗ್ಯಾರಂಟಿಯನ್ನು ನೀಡಿದೆʼ ಎಂದು ದೂರಿದರು.

 ನಾಲ್ಕು ಹಂತದ ಹೋರಾಟ:

ರಾಜ್ಯಪಾಲರಿಗೆ ಈ ಕುರಿತು ವಿವರ ನೀಡಿದ್ದೇವೆ. ಬಿಜೆಪಿ ನಾಲ್ಕು ಹಂತಗಳಲ್ಲಿ ಇದರ ವಿರುದ್ಧ ಹೋರಾಟ ಮಾಡಲಿದೆ. ಸಚಿವರು ಹಾಗೂ ಮುಖ್ಯಮಂತ್ರಿಯವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ಕೂಡ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News