ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ | ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ : ಸಚಿವ ನಾಗೇಂದ್ರ

Update: 2024-05-29 12:32 GMT

ಬೆಂಗಳೂರು : ನಮ್ಮ ಸರಕಾರದ ಹಣ ನಾವು ದುರುಪಯೋಗ ಆಗಲು ಬಿಡುವುದಿಲ್ಲ. ದುರುಪಯೋಗವಾಗಿರುವ ಅಂದಾಜು 89 ಕೋಟಿ ರೂ.ಗಳನ್ನು ಈಗಾಗಲೆ ಮುಖ್ಯ ಖಾತೆಗೆ ವಾಪಸ್ ಪಡೆಯಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಇಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ವಹಿಸಲಾಗಿದೆ. ಪ್ರಕರಣವನ್ನು ಸಿಐಡಿ ಅಧಿಕಾರಿಗಳು ಸೂಕ್ಷ್ಮವಾಗಿ ತನಿಖೆ ಮಾಡುತ್ತಿದ್ದಾರೆ. ಸರಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ನಮ್ಮ ಅಧಿಕಾರಿಗಳು ಎಫ್‍ಐಆರ್ ದಾಖಲು ಮಾಡಿದ್ದಾರೆ ಎಂದು ಅವರು ತಿಳಿಸಿದರು.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಹಾಗೂ ನಿರ್ದೇಶಕರು ಸೇರಿದಂತೆ ಒಟ್ಟು 6 ಮಂದಿ ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‍ಐಆರ್ ದಾಖಲು ಮಾಡಲಾಗಿದೆ. ಎಫ್‍ಎಸ್‍ಎಲ್ ಹಾಗೂ ಸಿಐಡಿ ತನಿಖಾ ವರದಿ ಬಂದ ತಕ್ಷಣ ಕಾನೂನು ರೀತಿಯಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಾಗೇಂದ್ರ ಹೇಳಿದರು.

ಇಬ್ಬರು ಅಧಿಕಾರಿಗಳು ಅಮಾನತು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಅಂದಾಜು 89.63 ಕೋಟಿ ರೂ.ಗಳಷ್ಟು ಅನುದಾನ ದುರುಪಯೋಗ ವಾಗಿರುವುದಕ್ಕೆ ಸಂಬಂಧಿಸಿದಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಜಿ.ದುರ್ಗಣ್ಣನವರ್ ಅವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ತಕ್ಷಣದಿಂದಲೆ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಕೆ.ಆರ್.ರಾಜ್‍ಕುಮಾರ್ ಅವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ಹೆಚ್ಚುವರಿ ಪ್ರಭಾರದಲ್ಲಿರಿಸಿ ಸರಕಾರ ಆದೇಶ ಹೊರಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News