ರಾಜ್ಯದ 12 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

Update: 2024-03-18 15:06 GMT

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ 12 ಜಿಲ್ಲೆಗಳಲ್ಲಿ ಮಾ.20ರಿಂದ ನಾಲ್ಕು ದಿನಗಳವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಖ್ಯವಾಗಿ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಅದೇ ರೀತಿ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳದಲ್ಲಿ ಒಣಹವೆ ಮುಂದುವರೆಯಲಿದೆ. ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣವಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.

ಎಪ್ರಿಲ್‍ನಲ್ಲೂ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮುಂಬರುವ ಮುಂಗಾರು ಅವಧಿಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಮುಂದಿನ ಒಂದೆರಡು ದಿನ ಕರಾವಳಿಯ ಪಣಂಬೂರು ಮತ್ತು ಒಳನಾಡಿನ ಬಾಗಲಕೋಟೆ, ಹಾವೇರಿ, ಕೊಪ್ಪಳ, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರಲಿದೆ ಎಂದು ಹವಮಾನ ಇಲಾಖೆ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News