ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ: ಬಸವರಾಜ ಬೊಮ್ಮಾಯಿ ಒತ್ತಾಯ
ಬೆಂಗಳೂರು, ಆ. 16: ‘ತಮಿಳುನಾಡು ಕುರುವೈ ಬೆಳೆಗೆ ಎರಡು ಪಟ್ಟು ನೀರು ಬಳಕೆ ಮಾಡಿದೆ. ನಾಲ್ಕು ಪಟ್ಟು ಕುರುವೈ ಬೆಳೆ ಕ್ಷೇತ್ರ ವಿಸ್ತರಣೆ ಮಾಡಿದೆ. ಕರ್ನಾಟಕ ಸರಕಾರ ಇದನ್ನು ಸಿಡಬ್ಲ್ಯೂಎಂಎದಲ್ಲಿ ಪ್ರತಿಭಟಿಸದೇ ಮತ್ತು ಅವರು ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಹಾಕಿದ ತಕ್ಷಣ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ಷೇಪಿಸಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ರಾಜ್ಯದ ರೈತರಿಗೆ ಈ ಮೊದಲು ನೀರು ಬಿಡದೇ ನಮ್ಮ ರಾಜ್ಯದ ರೈತರ ಪಾಲನ್ನು ಡ್ಯಾಂನಲ್ಲಿ ಸ್ಟೋರೇಜ್ ಮಾಡಿ, ರಾಜ್ಯದ ರೈತರಿಗೆ ನೀರು ಕೊಡುವ ತೀರ್ಮಾನ ವಿಳಂಬ ಮಾಡಿ ಈಗ ನಮ್ಮ ರೈತರ ಪಾಲಿನ ನೀರನ್ನು ತಮಿಳುನಾಡಿಗೆ ಹರಿಸುವ ಸ್ಥಿತಿ ನೀವು ತಂದೊಡ್ಡಿದ್ದೀರಿ’ ಎಂದು ದೂರಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾವೇರಿ ನೀರನ್ನು ಬಿಡಲು ಸಾಧ್ಯವಿಲ್ಲ ಎಂಬ ಹೇಳಿಕೆ ಕೊಟ್ಟ ಮರುದಿನವೇ ಉಪಮುಖ್ಯಮಂತ್ರಿ ನೇತೃತ್ವದ ನೀರಾವರಿ ಇಲಾಖೆ ತಮಿಳುನಾಡಿಗೆ ನೀರು ಬಿಟ್ಟಿರುವುದು. ರಾಜ್ಯದಲ್ಲಿ ಕಾವೇರಿ ನೀರು ನಿರ್ವಹಣೆಯಲ್ಲಿ ಒಮ್ಮತ ಇಲ್ಲ ಹಾಗೂ ನಮ್ಮ ರಾಜ್ಯದ ನೀರಿನ ಪಾಲನ್ನು ರಕ್ಷಣೆ ಮಾಡುವಂತ ಛಲವೂ ಕಾಣಿಸುತ್ತಿಲ್ಲ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
‘ರಾಜ್ಯ ಸರಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್‍ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು’ ಎಂದು ಬಸವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.