ನ್ಯಾಯವಾದಿಗಳ ಮೇಲಿನ ‘ಹಿಂಸಾಚಾರ ನಿಷೇಧ ವಿಧೇಯಕ’ ಜಾರಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನ್ಯಾಯವಾದಿಗಳ ಮೇಲಿನ ಹಿಂಸೆಯನ್ನು ತಡೆಯಲು ಮತ್ತು ನಿರ್ಭೀತರಾಗಿ ಕರ್ತವ್ಯ ನಿರ್ವಹಿಸಲು ಅನುವಾಗುವಂತೆ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ, 2023 ಅನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‍ನಲ್ಲಿ ಪ್ರಕಟಿಸಿದ್ದಾರೆ.
► ರಾಜ್ಯದಲ್ಲಿನ ಕಾನೂನು ನ್ಯಾಯಾಲಯಗಳು ಮತ್ತು ಶಾಸನಬದ್ಧ ನ್ಯಾಯಮಂಡಳಿಗಳ ಮುಂದೆ ಸರಕಾರಿ ವ್ಯಾಜ್ಯಗಳನ್ನು ನಿರ್ವಹಿಸುವ ವಿಷಯದಲ್ಲಿ ಸಮರ್ಥ ಮತ್ತು ಜವಾಬ್ದಾರಿಯುತ ನಡವಳಿಕೆಯನ್ನು ಕಾನೂನಿನ ಮೂಲಕ ಖಚಿತಪಡಿಸಿಕೊಳ್ಳಲು ಕರ್ನಾಟಕ ಸರಕಾರಿ ವ್ಯಾಜ್ಯ ನಿರ್ವಹಣೆ ಅಧಿನಿಯಮ, 2023 ಜಾರಿ.
► ರೈತರು ಮತ್ತು ಆರ್ಥಿಕವಾಗಿ ದುರ್ಬಲ ವ್ಯಕ್ತಿಗಳಿಗೆ ತ್ವರಿತ ನ್ಯಾಯ ಒದಗಿಸಲು ಸಿವಿಲ್ ಪ್ರಕ್ರಿಯೆ ಸಂಹಿತೆ (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2023 ಜಾರಿಗೆ ತರಲು ಕ್ರಮ.
► ರಾಜ್ಯದ ಉಚ್ಛ ನ್ಯಾಯಾಲಯಗಳಲ್ಲಿ ಮತ್ತು ಸಿವಿಲ್ ನ್ಯಾಯಾಲಯಗಳಲ್ಲಿ ಬಾಕಿ ಪ್ರಕರಣಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ಕರ್ನಾಟಕ ಉಚ್ಚ ನ್ಯಾಯಾಲಯ ಕಾಯ್ದೆ ಮತ್ತು ಕರ್ನಾಟಕ ಸಿವಿಲ್ ನ್ಯಾಯಾಲಯಗಳ ಕಾಯ್ದೆಗೆ ತಿದ್ದುಪಡಿ.
► 2023-24ನೆ ಸಾಲಿನಲ್ಲಿ 175 ಕೋಟಿ ರೂ.ವೆಚ್ಚದಲ್ಲಿ ರಾಜ್ಯದ ವಿವಿಧ ನ್ಯಾಯಾಲಯ ಕಟ್ಟಡಗಳ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, 2024-25ನೇ ಸಾಲಿನಲ್ಲಿಯೂ ಈ ಉದ್ದೇಶಕ್ಕಾಗಿ 175 ಕೋಟಿ ರೂ. ಅನುದಾನ.
► ರಾಜ್ಯದ ಎಲ್ಲ ನ್ಯಾಯಾಲಯಗಳ ಕಲಾಪಗಳ ನೇರ ಪ್ರಸಾರ ಮಾಡಲು ಮತ್ತು ನ್ಯಾಯಾಲಯಗಳ ಆಡಳಿತ ವ್ಯವಸ್ಥೆಯನ್ನು ಆಧುನೀಕರಿಸಲು 94 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಈ ಉದ್ದೇಶಕ್ಕೆ 180 ಕೋಟಿ ರೂ.ಗಳನ್ನು ಒದಗಿಸಲಾಗುವುದು.
► ವಿರಾಜಪೇಟೆಯಲ್ಲಿ 12 ಕೋಟಿ ರೂ.ವೆಚ್ಚದಲ್ಲಿ ಹೊಸ ನ್ಯಾಯಾಲಯ ಸಂಕೀರ್ಣ ನಿರ್ಮಾಣ. ಅಪೂರ್ಣವಾಗಿರುವ ಮೈಸೂರಿನ ವಕೀಲರ ಭವನ ಈ ಸಾಲಿನಲ್ಲಿ ಪೂರ್ಣ.