ಹೊರಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ಜಾರಿಗೆ ಚಿಂತನೆ: ಸಿಎಂ ಸಿದ್ದರಾಮಯ್ಯ

Update: 2023-07-08 15:09 GMT

ಬೆಂಗಳೂರು, ಜು.8: ರಾಜ್ಯ ಸರಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲಾಗುತ್ತದೆ. ಅಲ್ಲಿಯವರೆಗೂ ಹೊರಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಶನಿವಾರ ವಸಂತನಗರದ ದೇವರಾಜ ಅರಸು ಭವನದಲ್ಲಿ ನಡೆದ ‘ಪ್ರಬುದ್ಧ ಕರ್ನಾಟಕ’ ಜನಮನ ಸಮಾವೇಶದ ಸಂವಾದದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಸುಮಾರು 2.50ಲಕ್ಷಕ್ಕೂ ಹೆಚ್ಚು ಸರಕಾರಿ ಉದ್ಯೋಗಗಳು ಖಾಲಿಯಿವೆ. ಸರಕಾರದ ಶೇ.33ರಷ್ಟು ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲಾಗಿದ್ದು, ನಮ್ಮ ಅವಧಿಯಲ್ಲಿ ಇದಕ್ಕೆ ಕಡಿವಾಣ ಬೀಳಲಿದೆ ಎಂದರು.

ಹೊರಗುತ್ತಿಗೆ ಆಧಾರಿತ ಹುದ್ದೆಗಳ ನೇಮಕಾತಿಯಲ್ಲಿ ಯಾವುದೇ ಮೀಸಲಾತಿ ಇಲ್ಲ, ಇದರಿಂದ ನಾವು ಸಾಮಾಜಿಕ ನ್ಯಾಯವನ್ನು ಕಾಣಲು ಸಾಧ್ಯವಿಲ್ಲ. ಈ ರೀತಿಯ ನೇಮಕಾತಿ ರಾಜ್ಯದ ಬಡವರಿಗೆ ಅನ್ಯಾಯವಾಗಲಿದ್ದು, ನಾವು ಹೊರಗುತ್ತಿಗೆ ನೇಮಕಾತಿಗೂ ಮೀಸಲಾತಿಯನ್ನು ತರುವ ಚಿಂತನೆ ನಡೆಸಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಬಗರ್‍ಹುಕ್ಕುಂ ಸಾಗುವಳಿದಾರರ ಜಮೀನುಗಳ ಮಂಜೂರು ಹಾಗೂ ಸರಕಾರಿ ಭೂಮಿ ಒತ್ತುವರಿ ಕುರಿತು ಸಮೀಕ್ಷೆ ಮಾಡಲಾಗುವುದು. ಸಮೀಕ್ಷೆಯ ನಂತರ ಭೂ ಹೀನರಿಗೆ ಭೂಮಿ ಕೊಡುವ ಬಗ್ಗೆ ಪರಿಶೀಲಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ವೈಚಾರಿಕತೆ ಅಗತ್ಯ: ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ. ಆದರೆ, ಇಂದು ವಿದ್ಯಾವಂತರೇ ಹೆಚ್ಚು ಮೌಢ್ಯವಂತರು, ಜಾತಿವಾದಿಗಳಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ಜಾಗತಿಕ ಮಟ್ಟದ ಬಂಡವಾಳವನ್ನು ಆಕರ್ಷಿಕಸಲು ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಉದ್ಯಮ ಸ್ನೇಹಿ ವಾತಾವರಣ ಇರಬೇಕು. ಬಂಡವಾಳ ಹೂಡಿಕೆಯಿಂದ ಉದ್ಯೋಗ ಸೃಷ್ಟಿಯಾಗಿ ಜಿಡಿಪಿ ಹೆಚ್ಚುತ್ತದೆ. ಹೀಗಾಗಿ ಜಾತಿ-ಧರ್ಮದ ಸಂಘರ್ಷ ಇಲ್ಲದ ಶಾಂತಿಯುತ ಸಮಾಜ ನಿರ್ಮಿಸಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಯುವ ಸಮೂಹದ ಶಕ್ತಿ ಮತ್ತು ಚೈತನ್ಯ ದುರುಪಯೋಗವಾಗಬಾರದು, ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ಸರಕಾರ ನೀತಿ ರೂಪಿಸಿದೆ. ಇದಕ್ಕಾಗಿ ಕೌಶಲ್ಯ ತರಬೇತಿ ಜತೆಗೆ ನಿರುದ್ಯೋಗಿ ಯುವ ಸಮೂಹಕ್ಕೆ 24 ತಿಂಗಳ ಕಾಲ ಯುವನಿಧಿ ನೀಡಲು ನಿರ್ಧರಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಹಿಂದಿನ ಸರಕಾರದ ಅನೈತಿಕ ಪೊಲೀಸ್‍ಗಿರಿಗೆ ಬರೆ ಎಳೆದಿದ್ದೇವೆ. ಸಮ ಸಮಾಜ ನಿರ್ಮಾಣ ಆಗದ ಹೊರತು ದಲಿತರ, ಅಲ್ಪ ಸಂಖ್ಯಾತರ, ಹಿಂದುಳಿದವರ ಮೇಲೆ ದೌರ್ಜನ್ಯ ಹೋಗುವುದಿಲ್ಲ. ಹೀಗಾಗಿ ಕುವೆಂಪು ಅವರ ಮಾತಿನಂತೆ ರಾಜ್ಯವನ್ನು ಶಾಂತಿಯ ತೋಟ ಮಾಡುವ ನಿಟ್ಟಿನಲ್ಲಿ ನಮ್ಮ ಸರಕಾರ ಪ್ರಯತ್ನಿಸುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಅಕಾಡೆಮಿ, ಪ್ರಾಧಿಕಾರಗಳಿಗೆ ನೇಮಕ ಮಾಡಲು ಒಂದು ಆಯ್ಕೆ ಸಮಿತಿ ಮಾಡುತ್ತೇವೆ. ಈ ಆಯ್ಕೆ ಸಮಿತಿ ಮತಾಂಧ ಮತ್ತು ಸಮಾಜ ವಿಭಜಿಸುವ ಮನಸ್ಥಿತಿಯವರು ಒಳಗೆ ಪ್ರವೇಶಿಸದಂತೆ ನೇಮಕ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು. ಸಂವಾದದಲ್ಲಿ ಪ್ರಗತಿಪರ ಚಿಂತಕ ಜಿ.ರಾಮಕೃಷ್ಣ ಉಪಸ್ಥಿತರಿದ್ದರು.

ಶರಾವತಿ ಸಂತ್ರಸ್ತರಿಗೆ ಶಾಶ್ವತ ಪರಿಹಾರ: ಮಲೆನಾಡಿನ ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ಇರುವ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಮುಟ್ಟಿನ ರಜೆ ನೀಡಲು ಪರಿಶೀಲನೆ:

‘ಮಹಿಳಾ ಉದ್ಯೋಗಿ ಹಾಗೂ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಘೋಷಿಸಬೇಕು ಎಂದು ಕವಯಿತ್ರಿ ನಳಿನ ಚಿಕ್ಕಮಗಳೂರು ಅವರ ಬೇಡಿಕೆಯೊಂದಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ಮುಟ್ಟಿನ ರಜೆಯ ಬಗ್ಗೆ ಪರಿಶೀಲಿಸಿ ಯೋಗ್ಯ ನಿರ್ಧಾರ ತೆಗೆದುಕೊಳ್ಳಲಾಗುವುದು’

-ಸಿದ್ದರಾಮಯ್ಯ ಮುಖ್ಯಮಂತ್ರಿ

 

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News