ಅ.1ರಿಂದ ನೂತನ ನೋಂದಣಿ ಮಾರ್ಗಸೂಚಿ ದರ ಜಾರಿ: ಕಂದಾಯ ಸಚಿವ ಕೃಷ್ಣ ಬೈರೇಗೌಡ

Update: 2023-09-19 15:24 GMT

ಕಂದಾಯ ಸಚಿವ ಕೃಷ್ಣ ಬೈರೇಗೌಡ 

ಬೆಂಗಳೂರು: ರಾಜ್ಯಾದ್ಯಂತ ನೋಂದಣಿ ಸಂಬಂಧ ಪರಿಷ್ಕೃತ ನೂತನ “ಮಾರ್ಗಸೂಚಿ ದರ” ಸರಾಸರಿ ಶೇ.25 ರಿಂದ ಶೇ.30 ರಷ್ಟು ಹೆಚ್ಚಿಸಿ ಅ.1ರಿಂದ ಜಾರಿಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಮಂಗಳವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ನೋಂದಣಿ ಇಲಾಖೆ ಕಾನೂನಿನ ಪ್ರಕಾರ ಪ್ರತಿ ವರ್ಷ ಮಾರ್ಗಸೂಚಿ ದರ ಪರಿಷ್ಕರಣೆಯಾಗಬೇಕು. ಆದರೆ, ಕಳೆದ ಐದು ವರ್ಷದಿಂದ ಮಾರ್ಗಸೂಚಿ ದರ ಪರಿಷ್ಕರಣೆಯಾಗಿಲ್ಲ. ಇದರಿಂದ ಹಲವು ಕಡೆಗಳಲ್ಲಿ ಭೂಮಿ ಮಾರಾಟಗಾರರು ಮತ್ತು ರೈತರಿಗೆ ಅನ್ವಯವಾಗಿದ್ದರೆ, ಕಪ್ಪು ಹಣ ವಹಿವಾಟಿಗೂ ಕಾರಣವಾಗಿದೆ. ಮಾರ್ಗಸೂಚಿ ದರ ಪರಿಷ್ಕರಣೆಯಾಗದಿರುವುದು ಪರೋಕ್ಷವಾಗಿ ಕಪ್ಪು ಹಣ ವಹಿವಾಟಿಗೂ ಅವಕಾಶ ನೀಡಿದಂತಾಗಿದೆ. ಹೀಗಾಗಿ ಅ.1 ರಿಂದ ನೂತನ ಮಾರ್ಗಸೂಚಿ ದರ ಜಾರಿಯಾಗಲಿದೆ ಎಂದು ತಿಳಿಸಿದರು.

ದರ ಹೆಚ್ಚಳ: “ಮಾರುಕಟ್ಟೆ ದರಕ್ಕೂ ಮಾರ್ಗಸೂಚಿ ದರಕ್ಕೂ ಸಾಮ್ಯತೆ ಇರುವ ಪ್ರದೇಶಗಳಲ್ಲಿ ಮಾರ್ಗಸೂಚಿ ದರವನ್ನು ಶೇ.10 ರಷ್ಟು ಏರಿಕೆ ಮಾಡಲಾಗಿದೆ. ಮಾರ್ಗಸೂಚಿ ದರಕ್ಕಿಂತ ಮಾರುಕಟ್ಟೆ ದರ 200 ಪಟ್ಟು ಹೆಚ್ಚಿರುವ ಪ್ರದೇಶಗಳಲ್ಲಿ ಪರಿಷ್ಕೃತ ದರವನ್ನು ಶೇ.20 ರಿಂದ ಶೇ.25 ರಷ್ಟು ಹೆಚ್ಚಿಸಲಾಗಿದೆ. ಇನ್ನೂ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಮಾರುಕಟ್ಟೆ ದರ ಮಾರ್ಗಸೂಚಿ ದರಕ್ಕಿಂತ 500 ಪಟ್ಟು ಹೆಚ್ಚಿದೆ ಎಂದರು.

ಅದೇ ರೀತಿ, ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಭೂಮಿಗಳಿಗೆ ಮಾರ್ಗಸೂಚಿ ದರ 5 ರಿಂದ 10 ಲಕ್ಷ ಇದ್ದರೆ, ಮಾರುಕಟ್ಟೆ ದರ 10 ಕೋಟಿಗೂ ಅಧಿಕವಿದೆ. ಇಂತಹ ಪ್ರದೇಶಗಳಲ್ಲಿ ನೂತನ ಮಾರ್ಗಸೂಚಿ ದರವನ್ನು ಶೇ. 50ರಷ್ಟು ಹೆಚ್ಚಿಸಲಾಗಿದೆ. ಅಲ್ಲದೆ, ಮಾರುಕಟ್ಟೆ ದರಕ್ಕಿಂತ ಮಾರ್ಗಸೂಚಿ ದರ ಹೆಚ್ಚಾಗಿದ್ದರೆ, ಅಂತಹ ಭಾಗದಲ್ಲಿ ಮಾರ್ಗಸೂಚಿ ದರವನ್ನು ಮತ್ತಷ್ಟು ಕಡಿಮೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಾರ್ಗಸೂಚಿ ದರ ಶೇ.0 ಯಿಂದ ಶೇ.50ರ ವರೆಗೆ ಪ್ರತಿಯೊಂದು ಪ್ರದೇಶಕ್ಕೂ ಸಂಬಂಧಿಸಿದಂತೆ “ಕೇಸ್ ಬೈ ಕೇಸ್” ಹೆಚ್ಚಾಗಲಿದೆ ಎಂದು ವಿವರಿಸಿದರು.

ಅಕ್ಟೋಬರ್ 1 ರಂದು ಮೊದಲ ಹಂತವಾಗಿ ಬೆಂಗಳೂರಿನ ಪರಿಷ್ಕೃತ ದರ ಜಾರಿಯಾಗಲಿದೆ. ಉಳಿದಂತೆ ಪ್ರತಿ ಜಿಲ್ಲೆಯಲ್ಲಿ ಅಲ್ಲಿನ ಉಪ ಸಮಿತಿ (ಸಬ್ ಕಮಿಟಿ) ಚರ್ಚಿಸಿ ನೂತನ ಮಾರ್ಗಸೂಚಿ ದರವನ್ನು ಹಂತಹಂತವಾಗಿ ಜಾರಿಗೊಳಿಸಲಿದೆ. ಒಟ್ಟಾರೆಯಾಗಿ ಪರಿಷ್ಕೃತ ಮಾರ್ಗಸೂಚಿ ದರ ಸರಾಸರಿ ಶೇ.25 ರಿಂದ ಶೇ.30 ರಷ್ಟು ಹೆಚ್ಚಾಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು,

ಇನ್ನೂ, ಮಾರ್ಗಸೂಚಿ ದರಕ್ಕೂ ಮಾರುಕಟ್ಟೆ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರಬಾರದು ಎಂಬ ಕಾನೂನಿದೆ. ಹೀಗಾಗಿ ಈ ಅಲ್ಪ ನ್ಯೂನ್ಯತೆಯನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಆ ನಿಟ್ಟಿನಲ್ಲಿ ಈ ಕ್ರಮವನ್ನು ಮಾರ್ಗಸೂಚಿ ದರ ಪರಿಷ್ಕರಣೆ ಎಂಬುದಕ್ಕಿಂತ ನ್ಯೂನ್ಯತೆಯನ್ನು ಸರಿಪಡಿಸಲಾಗಿದೆ ಎಂಬುದು ಸೂಕ್ತ.ಮಾರ್ಗಸೂಚಿ ದರ ಪರಿಷ್ಕರಣೆಯಲ್ಲಿ ಯಾರಿಗಾದರೂ ತಕರಾರು ಇದ್ದರೆ, ಅದನ್ನೂ ಸಲ್ಲಿಸಬಹುದು. ಅಧಿಕಾರಿಗಳು ತಕರಾರುಗಳನ್ನೂ ಗಮನಿಸಿ ಹೊಸ ಮಾರ್ಗಸೂಚಿ ದರವನ್ನು ಜಾರಿಗೊಳಿಸುವರು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ವಿ.ರಶ್ಮಿ ಮಹೇಶ್, ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತ ಡಾ.ಮಮತಾ ಬಿ.ಆರ್. ಉಪಸ್ಥಿತರಿದ್ದರು.


Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News