ಮಂದಿರ ಉದ್ಘಾಟನೆ: ನಾಳೆ(ಜ.22) ಸರಕಾರಿ ರಜೆ ಘೋಷಿಸುವಂತೆ ಸಿಎಂಗೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹ
ಬೆಂಗಳೂರು: ಅಯೋಧ್ಯೆಯಲ್ಲಿ ಜ.22 ರಂದು ವಿಗ್ರಹ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದೆ. ಈ ದಿನದಂದು ಪ್ರತಿ ಮನೆಗಳಲ್ಲಿ, ಧಾರ್ಮಿಕ ಕ್ಷೇತ್ರಗಳಲ್ಲಿ ದೀಪ ಬೆಳಗುವುದು, ಭಜನೆ, ಶ್ರೀರಾಮನ ಆರಾಧನೆ ನಡೆಯಲಿದ್ದು, ಸರಕಾರಿ ಕಚೇರಿ, ಶಾಲಾ ಕಾಲೇಜುಗಳು, ಸಾರ್ವಜನಿಕ ಉದ್ದಿಮೆ ಸೇರಿದಂತೆ ಎಲ್ಲ ಕಡೆಗಳಲ್ಲಿ ರಜೆಯನ್ನು ಘೋಸಬೇಕೆಂದು ವಿಪಕ್ಷ ನಾಯಕ ಆರ್ ಅಶೋಕ್ ಮನವಿ ಮಾಡಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, " 500 ವರ್ಷಗಳ ಹೋರಾಟ, ತ್ಯಾಗದ ಫಲವಾಗಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣವಾಗಿ ಜ.22 ರಂದು ವಿಗ್ರಹ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದೆ. ಇಡೀ ರಾಜ್ಯದಲ್ಲಿ ಸಂಭ್ರಮ, ಸಡಗರದ ಆಚರಣೆ ನಡೆಯಲಿದೆ. ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಕೂಡ ವಿಗ್ರಹ ಪ್ರಾಣ ಪ್ರತಿಷ್ಠಾಪನೆಯಲ್ಲಿಭಾಗವಹಿಸಿದ್ದು, ಈಗಾಗಲೇ ಕೇಂದ್ರ ಸರ್ಕಾರದ ಕಚೇರಿಗಳಿಗೆ ಅರ್ಧ ದಿನದ ರಜೆ ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲೂ ದೊಡ್ಡ ಮಟ್ಟದ ಆಚರಣೆ ನಡೆಯುತ್ತಿದ್ದು, ಆ ದಿನ ಕೆಲಸ ಮಾಡುವುದರಿಂದ ಆಚರಣೆಗೆ ತೊಡಕು ಉಂಟಾಗಬಹುದು. ಆದ್ದರಿಂದ ಸರಕಾರಿ ಕಚೇರಿ, ಶಾಲಾ ಕಾಲೇಜುಗಳು, ಸಾರ್ವಜನಿಕ ಉದ್ದಿಮೆ ಸೇರಿದಂತೆ ಎಲ್ಲ ಕಡೆಗಳಲ್ಲಿ ಅನುಕೂಲವಾಗುವಂತೆ ಜನವರಿ 22 ರಂದು ಒಂದು ದಿನದ ಮಟ್ಟಿಗೆ ಸರ್ಕಾರಿ ರಜೆಯನ್ನುಘೋಸಬೇಕೆಂದು ಒತ್ತಾಯಿಸಿದ್ದಾರೆ.
ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಇಡೀ ದೇಶವೇ ಕಾತುರದಿಂದ ರಾಮಮಂದಿರ ಪ್ರಾಣ ಪ್ರತಿಷ್ಟಾಪನೆಗೆ ಕಾಯುತ್ತಿದೆ. ಹಿಂದೆ ಸೋಮನಾಥ ದೇವಾಲಯ ಪಟೇಲರು ನಿರ್ಮಾಣ ಮಾಡಿದ್ದರು. ಈಗ ಮೋದಿ ಅವರಿಂದ ಅದೇ ರೀತಿ ಅಯೋಧ್ಯೆಯಲ್ಲಿ ರಾಮನ ಪ್ರಾಣ ಪ್ರತಿಷ್ಟಾಪನೆ ಮಾಡುತ್ತಿದ್ದಾರೆ ಹೇಳಿದ್ದಾರೆ.
ದೇವಸ್ಥಾನ ಸ್ವಚ್ಚಮಾಡಿ ಪೂಜೆಗೆ ತಯಾರಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಣೆ ಮಾಡಿದೆ. ಇಲ್ಲಿ ಕೂಡ ಪೂಜೆ ನೋಡಲು ಅರ್ಧ ದಿನ ರಜೆ ಘೋಷಣೆಗೆ ಬೇಡಿಕೆ ಇಟ್ಟಿದ್ದೇವೆ ಎಂದು ತಿಳಿಸಿದ್ದಾರೆ.