ಕೆಇಎ ಪರೀಕ್ಷೆಯಲ್ಲಿನ ಅಕ್ರಮ: ಆರ್.ಡಿ.ಪಾಟೀಲ್‌ ಗೆ ಮತ್ತೆ ನ್ಯಾಯಾಂಗ ಬಂಧನ

Update: 2023-11-24 15:55 GMT

ಕಲಬುರಗಿ: ಕಳೆದ ಅ.28ರಂದು ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಪ್ರಮುಖ ಆರೋಪಿ ಅಫಜಲಪುರದ ಆರ್.ಡಿ.ಪಾಟೀಲ್ ಪೊಲೀಸ್ ಕಸ್ಟಡಿಯ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಕಲಬುರಗಿ ಪ್ರಧಾನ ಜೆಎಂಎಫ್‍ಸಿ ಕೋರ್ಟ್ ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿಗೆ ಹಸ್ತಾಂತರಿಸಿತ್ತು. ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ ತನಿಖೆಗಾಗಿ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಮಾಹಿತಿ ಸಂಗ್ರಹಿಸಿದ ಬಳಿಕ ಆರ್.ಡಿ. ಪಾಟೀಲ್ ನನ್ನು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಧೀಶ ಸಂತೋಷ ಶ್ರೀವಾಸ್ತವ ಅವರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಇದುವರೆಗೆ ಕಲಬುರಗಿಯ ಅಶೋಕ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದರು. ವಿಶ್ವವಿದ್ಯಾಲಯ ಠಾಣೆಯಲ್ಲಿ ದಾಖಲಾದ ಎಫ್‍ಐಆರ್ ಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಮತ್ತೆ ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಪರ ವಕೀಲರು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News