ನ್ಯಾಯಾಲಯಕ್ಕಿಂತ ಕಾಂಗ್ರೆಸ್ ಪಕ್ಷ ದೊಡ್ಡದೇ?: ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆ
ಬೆಂಗಳೂರು: ನನ್ನನ್ನು ಭೂ ಕಬಳಿಕೆದಾರ ಎಂದು ಕರೆದಿರುವ ಸಚಿವರು ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಆದರೆ ಇದೇ ಕಾಂಗ್ರೆಸ್‍ನ ಕೇಂದ್ರ ಸರಕಾರ ಅಂದು ನೇಮಿಸಿದ್ದ ರಾಜ್ಯಪಾಲರು ಮತ್ತು ನ್ಯಾಯಾಲಯ ನಾನು ತಪ್ಪಿತಸ್ಥ ಅಲ್ಲ ಎಂದು ಅಭಿಪ್ರಾಯಪಟ್ಟಿದೆ. ಆದರೂ ಕಾಂಗ್ರೆಸ್ ಪಕ್ಷ ನ್ಯಾಯಾಲಯಕ್ಕಿಂತ ದೊಡ್ಡದಾಗಲು ಯತ್ನಿಸಿ ತೀರ್ಪು ನೀಡಲು ಮುಂದಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾಲ್ವರು ಸಚಿವರು ನನ್ನ ಹೆಸರಿಗೆ ಕಳಂಕ ತರಲು ಹಳೆ ಪ್ರಕರಣದ ಬಗ್ಗೆ ನಿನ್ನೆ ಮಾತನಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬಕ್ಕೆ ಮುಡಾ ಹಗರಣದಲ್ಲಿ ಅರಿಶಿನ-ಕುಂಕುಮದ ಮೂಲಕ ಭೂಮಿ ಬಂದಿದೆ. ಆದರೆ ನಾನು ಹಣ ಕೊಟ್ಟು ಭೂಮಿ ಖರೀದಿ ಮಾಡಿದ್ದೇನೆ ಎಂದು ಹೇಳಿದರು.
ಈ ಪ್ರಕರಣದ ಬಗ್ಗೆ ಆರೋಪ ಬಂದಾಗ ರಾಜ್ಯಪಾಲ ಹಂಸರಾಜ ಭಾರಧ್ವಾಜ್ ಇದ್ದರು. ಅವರು ಕೂಡ ಈ ಪ್ರಕರಣವನ್ನು ತನಿಖೆಗೆ ವಹಿಸಿಲ್ಲ. ನ್ಯಾಯಾಲಯ ಕೂಡ ಇದರ ವಿರುದ್ಧ ತನಿಖೆ ಮಾಡಿಸಲು ಮುಂದಾಗಲಿಲ್ಲ. ಆದರೆ, ಮುಡಾ ಹಗರಣ ತನಿಖೆಯಾಗಬೇಕಾದ ಪ್ರಕರಣ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತೀರ್ಪು ಬಂದ ಬಳಿಕ ಮುಖ್ಯಮಂತ್ರಿ ಭಯಗೊಂಡು ನಿವೇಶನಗಳನ್ನು ಹಿಂದಿರುಗಿಸಿದ್ದಾರೆ. ಆದರೆ ನಾನು ಆದೇಶ ಬರುವ ಮುನ್ನವೇ ನಿವೇಶನ ಹಿಂದಿರುಗಿಸಿದ್ದೆ ಎಂದು ಅವರು ತಿಳಿಸಿದರು.
ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನನ್ನನ್ನು ಆರೋಪ ಮುಕ್ತ ಮಾಡಲಾಗಿದೆ. ಆದರೆ ಸಿದ್ದರಾಮಯ್ಯ ಇನ್ನೂ ಆರೋಪ ಮುಕ್ತವಾಗಿಲ್ಲ. ಸಚಿವ ಕೃಷ್ಣ ಭೈರೇಗೌಡರ ಕೋಲಾರದ ಆಸ್ತಿಗಳೆಲ್ಲವೂ ಕುಟುಂಬದಿಂದ ಅವರಿಗೆ ಬಂದಿದೆ. ಅದೇ ರೀತಿ ಮುನಿವೆಂಕಟಪ್ಪ ವಿಲ್ ತಯಾರಿಸಿ ಅವರ ಮಕ್ಕಳಿಗೆ ಆಸ್ತಿ ಕೊಟ್ಟಿದ್ದಾರೆ. ಆ ಕುಟುಂಬದಲ್ಲಿ ಸುಮಾರು 20 ಜನರಿದ್ದು, ನನ್ನ ಹೆಸರಿಗೆ ನೋಂದಣಿಯಾದಾಗ ಅವರೆಲ್ಲರೂ ಸಹಿ ಹಾಕಿದ್ದಾರೆ. ಇದು ಹೇಗೆ ಬೇನಾಮಿಯಾಗುತ್ತದೆ? ಎಂದು ಅಶೋಕ್ ಪ್ರಶ್ನಿಸಿದರು.
1995 ರಲ್ಲಿ ಆಗಿರುವ ಪಹಣಿಯಲ್ಲಿ ಇಡೀ ಕುಟುಂಬದವರ ಹೆಸರಿದೆ. ಆದರೆ ಇದು ಬಿಡಿಎ ಭೂಮಿ ಎಂದು ಸಚಿವರು ಸುಳ್ಳು ಹೇಳಿದ್ದಾರೆ. ಯಡಿಯೂರಪ್ಪ ಅಕ್ರಮವಾಗಿ ಡಿ ನೋಟಿಫೈ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದಾರೆ. ಸುಮಾರು 1 ಎಕರೆ ವ್ಯಾಪ್ತಿಯ ಈ ಜಾಗ, ಹೊರವರ್ತುಲ ರಸ್ತೆಯ ಪಕ್ಕವಿದೆ. ರಸ್ತೆಗೆ ಅಗತ್ಯವಿರುವ ಭೂಮಿ ಪಡೆದು, ಉಳಿದಿದ್ದನ್ನು ಡಿನೋಟಿಫೈ ಮಾಡಲು ತೀರ್ಮಾನಿಸಲಾಗಿತ್ತು ಎಂದು ಆಗ ಮುಖ್ಯಮಂತ್ರಿ ಆಗಿದ್ದ ಎಸ್.ಎಂ.ಕೃಷ್ಣ ಹೇಳಿದ್ದರು ಎಂದು ಅವರು ತಿಳಿಸಿದರು.
ನಾನು 24 ಗಂಟೆ ಗಡುವು ನೀಡುತ್ತೇನೆ. ನೈತಿಕತೆಯ ಆಧಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ. ಸಚಿವ ಸಂಪುಟದ ಎಲ್ಲ ಸಚಿವರು ಮುಖ್ಯಮಂತ್ರಿಗಾಗಿ ಪ್ರಾಣಕ್ಕೆ ಪ್ರಾಣ ಕೊಡುತ್ತೇವೆ, ಬಂಡೆಯಂತೆ ನಿಂತಿದ್ದೇವೆ ಎಂದು ಹೇಳಿದ್ದಾರೆ. ಈಗ ಎಲ್ಲ ಸಚಿವರಿಗೆ ರಾಜೀನಾಮೆ ಕೊಡುವ ಅವಕಾಶವಿದೆ. ಮೊದಲು ಕೃಷ್ಣ ಬೈರೇಗೌಡ, ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್ ಹಾಗೂ ಸತೀಶ್ ಜಾರಕಿಹೊಳಿ ಈ ನಾಲ್ಕು ಸಚಿವರು ರಾಜೀನಾಮೆ ನೀಡಿದರೆ, ನಾನು ರಾಜೀನಾಮೆ ನೀಡುತ್ತೇನೆ ಎಂದು ಅಶೋಕ್ ಸವಾಲು ಹಾಕಿದರು.