ಬಿಜೆಪಿ ಸೋಲಿಸಿದಕ್ಕಾಗಿ ಕೇಂದ್ರ ಸರಕಾರ ಕನ್ನಡಿಗರ ತಲೆಮೇಲೆ ಕಲ್ಲು ಹಾಕುತ್ತಿದೆಯೇ?: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರ ಬೆದರಿಕೆಗೆ ಬಗ್ಗದೆ ನಿಮ್ಮ ಪಕ್ಷಕ್ಕೆ ಕನ್ನಡಿಗರು ನೀಡಿದ ಶಿಕ್ಷೆಗಾಗಿ ಕೇಂದ್ರ ಸರಕಾರ ಕನ್ನಡಿಗರ ತಲೆಮೇಲೆ ಕಲ್ಲು ಹಾಕುತ್ತಿದೆಯೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅಡಿಗಲ್ಲು ಹಾಕುವುದನ್ನು ಮರೆತು, ಹಿಂದೂ ಮುಸ್ಲಿಮರ ಮಧ್ಯೆ ದ್ವೇಷ ಬಿತ್ತುವ ಮೂಲಕ ಕನ್ನಡಿಗರ ತಲೆ ಮೇಲೆಯೆ ಕಲ್ಲು ಹಾಕುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಮಾಡಿರುವ ಆರೋಪಕ್ಕೆ ಸರಣಿ ಟ್ವೀಟ್‍ಗಳ ಮೂಲಕ ಅವರು ತಿರುಗೇಟು ನೀಡಿದ್ದಾರೆ.
ಯಾರೋ ಬಿಜೆಪಿ ವಿರೋಧಿಗಳು ಅಶೋಕ್ ಅವರ ಬಾಯಲ್ಲಿ ಈ ರೀತಿಯ ಹೇಳಿಕೆಯನ್ನು ಹೇಳಿಸಿದಂತೆ ಕಾಣುತ್ತಿದೆ. ಅಶೋಕ್ ಅವರೇ, ಯಾಕೆ ನಮ್ಮ ಕೈಗೆ ಬಡಿಗೆ ಕೊಟ್ಟು ಬಡಿಸಿಕೊಳ್ತೀರಿ? ನರೇಂದ್ರ ಮೋದಿ ನೇತೃತ್ವದ ಸರಕಾರ ಕಳೆದ ಒಂಭತ್ತು ವರ್ಷಗಳ ಆಡಳಿತದ ಜಾತಕ ಬಿಡಿಸಿಟ್ಟರೆ ಯಾರು ಕನ್ನಡಿಗರ ತಲೆ ಮೇಲೆ ಕಲ್ಲು ಹಾಕುತ್ತಿದ್ದಾರೆ ಎಂದು ನಿಮಗೂ ಅರಿವಾಗಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಾಡಿಗೆ ಬರಗಾಲ ಬಿದ್ದು ಆರು ತಿಂಗಳುಗಳಾಗಿವೆ. ಬರಪರಿಹಾರದ ಕೆಲಸಗಳಿಗಾಗಿ 18,177 ಕೋಟಿ ರೂ. ನೀಡಲು ಮೂರು ತಿಂಗಳುಗಳಿಂದ ಒತ್ತಾಯಿಸುತ್ತಾ ಬಂದಿದ್ದೇವೆ. ಪತ್ರ ಬರೆದಿದ್ದೇವೆ, ನಾನೇ ಖುದ್ದಾಗಿ ಹೋಗಿ ಪ್ರಧಾನಿ ಮತ್ತು ಗೃಹಸಚಿವರನ್ನು ಭೇಟಿಯಾಗಿ ರೈತರ ಕಷ್ಟಗಳನ್ನು ವಿವರಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ಕಂದಾಯ ಮತ್ತು ಕೃಷಿ ಸಚಿವರು ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿ ಬಂದಿದ್ದಾರೆ. ಉಪಮುಖ್ಯಮಂತ್ರಿ, ಗೃಹ ಸಚಿವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಇಲ್ಲಿಯವರೆಗೆ ಒಂದು ಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ. ನಮಗೆ ಅನ್ನ ನೀಡುವ ರೈತರು ಕನ್ನಡಿಗರಲ್ಲವೇ? ಅವರ ತಲೆ ಮೇಲೆ ಕಲ್ಲು ಹಾಕುತ್ತಿರುವವರು ಯಾರು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ತೆರಿಗೆ ಪಾವತಿಯಲ್ಲಿ ಕನ್ನಡಿಗರು ದೇಶದಲ್ಲಿಯೆ ಎರಡನೆ ಸ್ಥಾನದಲ್ಲಿದ್ದಾರೆ. ಆದರೆ ಕೇಂದ್ರದ ಬಿಜೆಪಿ ಸರಕಾರ ಕರ್ನಾಟಕದ ನ್ಯಾಯಯುತ ಪಾಲನ್ನೂ ಕೊಡದೆ ವಂಚಿಸುತ್ತಿದೆ. ಕೇಂದ್ರ ಸರಕಾರದ ಸಹಭಾಗಿತ್ವದ ಯೋಜನೆಗಳಿಗೆ ನೀಡುತ್ತಿರುವ ಅನುದಾನ ವರ್ಷದಿಂದ ವರ್ಷಕ್ಕೆ ಇಳಿಕೆಯ ಹಾದಿಯಲ್ಲಿದೆ. 2021-22ರ ಅವಧಿಯಲ್ಲಿ 20 ಸಾವಿರ ಕೋಟಿ ರೂ.ಇದ್ದ ಅನುದಾನ, 2022-23ರಲ್ಲಿ 13 ಸಾವಿರ ಕೋಟಿ ರೂ.ಗೆ ಇಳಿಕೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಯುಪಿಎ ಸರಕಾರದ 14ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ನಿಗದಿಪಡಿಸಿದ್ದ ಶೇ.4.72 ತೆರಿಗೆ ಪಾಲನ್ನು ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೆ ಬಂದ 15ನೇ ಹಣಕಾಸು ಆಯೋಗವು ಶೇ.3.64ಕ್ಕೆ ಇಳಿಕೆ ಮಾಡಿ ಕನ್ನಡಿಗರನ್ನು ವಂಚಿಸಿದೆ. ಇದರಿಂದ ಕನ್ನಡಿಗರು ಕಳೆದ 4 ವರ್ಷಗಳಲ್ಲಿ ಸುಮಾರು 45 ಸಾವಿರ ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ. ಈಗ ಹೇಳಿ ಕನ್ನಡಿಗರ ತಲೆ ಮೇಲೆ ಕಲ್ಲು ಹಾಕುತ್ತಿರುವವರು ಯಾರು? ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕಕ್ಕೆ 5,495 ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವಂತೆ 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿತ್ತು. ಆದರೆ ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿ ವಿತ್ತ ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಈ ಶಿಫಾರಸ್ಸನ್ನು ತಿರಸ್ಕರಿಸಿ ಕನ್ನಡಿಗರಿಗೆ ದ್ರೋಹ ಎಸಗಿದರು. ಕನ್ನಡಿಗರ ತಲೆ ಮೇಲೆ ಕಲ್ಲು ಹಾಕಿದವರು ನಿಮ್ಮದೇ ಪಕ್ಷಕ್ಕೆ ಸೇರಿರುವ ನಿರ್ಮಲಾ ಸೀತಾರಾಮನ್ ಅವರಾ? ನಾವಾ? ಎಂದು ಅವರು ಪ್ರಶ್ನಿಸಿದ್ದಾರೆ.
ಕನ್ನಡಿಗರು ಕೇಂದ್ರ ಸರಕಾರಕ್ಕೆ ಒಂದು ರೂಪಾಯಿ ತೆರಿಗೆ ಪಾವತಿಸಿದರೆ ಕರ್ನಾಟಕದ ಅಭಿವೃದ್ಧಿಗಾಗಿ ವಾಪಾಸ್ ಸಿಗುತ್ತಿರುವುದು ಕೇವಲ 15 ಪೈಸೆ. ಕನ್ನಡಿಗರು ಬೆವರು ಸುರಿಸಿ ದುಡಿದ ದುಡ್ಡನ್ನು ಉತ್ತರದ ರಾಜ್ಯಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಆರ್ಥಿಕ ವರ್ಷ ಆರಂಭವಾಗಿ 6 ತಿಂಗಳು ಕಳೆದರೂ ಕೇಂದ್ರ ಸರಕಾರದ ಸಹಯೋಗದ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ. ಕನ್ನಡಿಗರ ತಲೆ ಮೇಲೆ ಕಲ್ಲು ಹಾಕುತ್ತಲೇ ಇರುವವರು ಯಾರು ಅಶೋಕ್ ಅವರೇ? ಎಂದು ಸಿದ್ದರಾಮಯ್ಯ ಕೇಳಿದ್ದಾರೆ.
ಏಮ್ಸ್ ಸಂಸ್ಥೆ ಬೇಕೆಂಬ ಕನ್ನಡಿಗರ ಬಹುಕಾಲದ ಕನಸು ಇನ್ನೂ ಕನಸಾಗಿಯೇ ಉಳಿದಿದೆ. ಕನ್ನಡಿಗರು ಶ್ರಮದಿಂದ ಕಟ್ಟಿದ ಬ್ಯಾಂಕುಗಳು ವಿಲೀನದ ಹೆಸರಲ್ಲಿ ಯಾರದೋ ಪಾಲಾದವು. 18 ಸಾವಿರ ಕೋಟಿ ರೂಪಾಯಿ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಅನುದಾನ ಇಲ್ಲದೆ ಸೊರಗಿ ಹೋಗಿದೆ. ಇನ್ನು ರಾಜ್ಯದ ಇತರೆ ರೈಲ್ವೆ ಯೋಜನೆಗಳ ಅಭಿವೃದ್ಧಿಗೆ ಸಿಕ್ಕಿದ್ದು ಬಿಡಿಗಾಸು ಹಣ. ಇದೇನು ಪ್ರಧಾನಿ ಮೋದಿ ಕನ್ನಡಿಗರ ತಲೆಮೇಲೆ ಸುರಿಯತ್ತಿರುವ ಹೂಮಳೆಯೇ? ಇಲ್ಲವೇ ಕಲ್ಲುಗಳ ರಾಶಿಯೇ? ಎಂದು ಅವರು ಕಿಡಿಗಾರಿದ್ದಾರೆ.
ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಮತ ಹಾಕದಿದ್ದರೆ ಪ್ರಧಾನಿ ಮೋದಿ ಅವರ ಆಶೀರ್ವಾದ ಕರ್ನಾಟಕದ ಜನರಿಗೆ ಸಿಗುವುದಿಲ್ಲ, ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದಿಂದ ಹಣ ಬರುವುದಿಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆಗಳಾಗುತ್ತವೆ ಎಂದೆಲ್ಲ ಅಮಿತ್ ಶಾ, ಜೆ.ಪಿ.ನಡ್ಡಾ ಅವರಂತಹ ರಾಷ್ಟ್ರ ನಾಯಕರೇ ಕನ್ನಡಿಗರಿಗೆ ಬೆದರಿಕೆ ಹಾಕಿದ್ದರು ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ವಾಭಿಮಾನಿ ಕನ್ನಡಿಗರು ಈ ಬೆದರಿಕೆಗೆ ಬಗ್ಗದೆ, ಜಗ್ಗದೆ ಬಿಜೆಪಿಯನ್ನು ಧೂಳೀಪಟ ಮಾಡಿದರು. ನಿಮ್ಮ ಪಕ್ಷಕ್ಕೆ ಕನ್ನಡಿಗರು ನೀಡಿದ ಈ ಶಿಕ್ಷೆಗಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಕನ್ನಡಿಗರ ತಲೆಮೇಲೆ ಕಲ್ಲು ಹಾಕುತ್ತಿದೆಯೇ? ಎಂದು ಮುಖ್ಯಮಂತ್ರಿ ಕೇಳಿದ್ದಾರೆ.