ಆ.12ಕ್ಕೆ ‘ಮಾನವ-ಆನೆ ಸಂಘರ್ಷ’ ತಡೆಗೆ ಅಂತಾರಾಷ್ಟ್ರೀಯ ಸಮ್ಮೇಳನ : ಈಶ್ವರ್ ಖಂಡ್ರೆ
ಬೆಂಗಳೂರು: ವಿಶ್ವ ಆನೆಯ ದಿನಾಚರಣೆ ಹಿನ್ನೆಲೆ ಮಾನವ-ಆನೆ ಸಂಘರ್ಷ ತಡೆಗಟ್ಟುವ ಕುರಿತಂತೆ ಬೆಂಗಳೂರಿನ ಕೃಷಿ ವಿಶ್ವ ವಿದ್ಯಾನಿಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕೆ) ಆವರಣದಲ್ಲಿ ಆ.12ಕ್ಕೆ ಅಂತಾರಾಷ್ಟ್ರೀಯ ಸಮ್ಮೇಳನ ಏರ್ಪಡಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಮ್ಮೇಳನದಲ್ಲಿ ಅಮೆರಿಕಾ, ಜರ್ಮನಿ, ಜಪಾನ್, ಯುಕೆ ಸೇರಿದಂತೆ 11 ರಾಷ್ಟ್ರಗಳ ಸುಮಾರು 17ಕ್ಕೂ ಹೆಚ್ಚು ಪ್ರತಿನಿಧಿಗಳು ಹಾಗೂ ಭಾರತದ ವಿವಿಧ ರಾಜ್ಯಗಳ 660 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಆನೆಗಳು ಮತ್ತು ಇತರ ವನ್ಯಜೀವಿಗಳು ನಾಡಿಗೆ ಬಾರದಂತೆ ಬೇರೆ ಬೇರೆ ರಾಜ್ಯಗಳಲ್ಲಿ, ವಿದೇಶಗಳಲ್ಲಿ ಯಾವ ತಂತ್ರಗಾರಿಕೆ, ಪದ್ಧತಿ ಅನುಸರಿಸಲಾಗುತ್ತಿದೆ. ಯಾವ ಕಾರ್ಯತಂತ್ರ ಅಳವಡಿಸಿಕೊಳ್ಳಲಾಗಿದೆ ಎಂಬುದರ ಬಗ್ಗೆ ಈ ಸಮ್ಮೇಳನದಲ್ಲಿ ಚಿಂತನ ಮಂಥನ ನಡೆಯಲಿದ್ದು, ಅತ್ಯುತ್ತಮ ರೂಢಿಗಳನ್ನು ನಮ್ಮಲ್ಲಿಯೂ ಅಳವಡಿಸಿಕೊಳ್ಳಲು ಈ ಸಮ್ಮೇಳನ ಸಹಕಾರಿ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ 6395 ಆನೆಗಳಿದ್ದು, ರಾಜ್ಯ ದೇಶದಲ್ಲೇ ಗಜ ಸಂಖ್ಯೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಅದೇ ರೀತಿ 563 ಹುಲಿ ಹೊಂದಿರುವ ಕರ್ನಾಟಕ ವ್ಯಾಘ್ರಗಳ ಸಂಖ್ಯೆಯಲ್ಲಿ 2ನೆ ಸ್ಥಾನದಲ್ಲಿದೆ. ಆದರೆ ಇದಕ್ಕೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳ ಆಗದ ಹಿನ್ನೆಲೆಯಲ್ಲಿ ಆನೆಗಳು ನಾಡಿಗೆ ಬರುತ್ತಿದ್ದು, ಬೆಳೆ ಹಾನಿ, ಜೀವಹಾನಿ ಸಂಭವಿಸುತ್ತಿದೆ. ಈ ನಿಟ್ಟಿನಲ್ಲಿ ಆನೆ ಮತ್ತು ಮಾನವ ಸಂಘರ್ಷ ತಗ್ಗಿಸಲು ಈ ಸಮ್ಮೇಳನ ಬೆಳಕು ಚೆಲ್ಲಲಿ ಎಂಬ ಉದ್ದೇಶದಿಂದ ಆಯೋಜನೆ ಮಾಡಲಾಗಿದೆ ಎಂದರು.
ದೇಶದಲ್ಲಿ ಆನೆಗಳಿಂದ ಅತಿ ಹೆಚ್ಚು ಸಾವು ಒಡಿಶಾದಲ್ಲಿ ಸಂಭವಿಸುತ್ತದೆ. 2023-24ರಲ್ಲಿ 149 ಜನರು ಒಡಿಶಾದಲ್ಲಿ ಆನೆ ದಾಳಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯ ಆನೆಗಳ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದ್ದರೂ, ಇಲಾಖೆ ಕೈಗೊಂಡಿರುವ ಕ್ರಮಗಳಿಂದ ಆನೆ ದಾಳಿಯಿಂದ ಹೆಚ್ಚಿನ ದಾಳಿ ಆಗದಂತೆ ನಿಯಂತ್ರಿಸಲಾಗುತ್ತಿದೆ. ಆದಾಗ್ಯೂ ಪ್ರತಿಯೊಂದು ಜೀವವೂ ಅಮೂಲ್ಯ ಈ ನಿಟ್ಟಿನಲ್ಲಿ ಈ ಸಮ್ಮೇಳನದಲ್ಲಿ ಚಿಂತನ ಮಂಥನ ನಡೆಯಲಿದ್ದು, ಅತ್ಯುತ್ತಮ ರೂಢಿಗಳನ್ನು ಅಳವಡಿಸಿಕೊಳ್ಳಲು ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.
ಕಾರ್ಯಪಡೆ: ಆನೆಗಳು ನಾಡಿಗೆ ಬಂದಾಗ ಅವುಗಳನ್ನು ಮರಳಿ ಕಾಡಿಗೆ ಕಳುಹಿಸಲು ರಾಪಿಡ್ ರೆಸ್ಪಾನ್ಸ್ ಟೀಮ್, ಎಲಿಫೆಂಟ್ ಟಾಸ್ಕ್ :ಫೋರ್ಸ್ ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ಕೊಡಗು, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಮೈಸೂರು, ರಾಮನಗರ, ಬನ್ನೇರುಘಟ್ಟ, ಬಂಡೀಪುರ ಸೇರಿ 8 ಜಿಲ್ಲೆಗಳಲ್ಲಿ ಕಾರ್ಯಪಡೆಗಳಿದ್ದು, ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ, ಆನೆಗಳ ಚಲನ ವಲನದ ಬಗ್ಗೆ ಜನರಿಗೆ ಸಂದೇಶದ ಮೂಲಕ ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬ್ರಿಜೇಶ್ ದೀಕ್ಷಿತ್, ಸುಭಾಷ್ ಮಾಲ್ಖಡೆ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕುಮಾರ್ ಪುಷ್ಕರ್, ಮನೋಜ್ ರಾಜನ್ ಮತ್ತಿತರಿದ್ದರು.