ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನಕಲಿ ಸದಸ್ಯತ್ವ ನೋಂದಣಿ ವಿಚಾರ

Update: 2024-11-27 07:58 GMT

ಬೆಂಗಳೂರು : ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡಿರುವ ಬೋಗಸ್ ಸದಸ್ಯರನ್ನು ಪತ್ತೆ ಹಚ್ಚಲು ತನಿಖೆ ನಡೆಸುವಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಎರಡು ವಾರಗಳಲ್ಲಿ ಆಕ್ಷೇಪ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಈ ವಿಚಾರವಾಗಿ ಕರ್ನಾಟಕ ರಾಜ್ಯ ನಿರ್ಮಾಣ ಕಾರ್ಮಿಕರ ಕೇಂದ್ರ ಸಂಘ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು. ಅರ್ಜಿದಾರರ ಪರ ವಕೀಲ ಕೆ.ಬಿ. ನಾರಾಯಣಸ್ವಾಮಿ ವಾದ ಮಂಡಿಸಿದರು.

ಈ ವೇಳೆ ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಮಂಡಳಿಯಲ್ಲಿ ನಿಧಿ ಹೇಗೆ ಸಂಗ್ರಹವಾಗುತ್ತದೆ. ಕಾರ್ಡ್ ಯಾರಿಗೆ ಕೊಡುತ್ತಾರೆ, ನಿಧಿಯ ಹಣವನ್ನು ಕಾರ್ಡ್ ಹೊಂದಿರುವ ಸದಸ್ಯರಿಗೆ ಯಾವ ವಿಧದಲ್ಲಿ ಖರ್ಚು ಮಾಡಲಾಗುತ್ತದೆ ಎಂಬ ವಿವರಣೆಯ ಅವಶ್ಯಕತೆ ಕಂಡು ಬರುತ್ತಿದೆ. ಆದ್ದರಿಂದ ರಾಜ್ಯ ಸರಕಾರ ಹಾಗೂ ಸಂಬಂಧಪಟ್ಟ ಇಲಾಖೆ ಆ ವಿವರಣೆ ಒದಗಿಸಬೇಕು. ಅದೇ ರೀತಿ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದರೆ ಎರಡು ವಾರಗಳಲ್ಲಿ ಸಲ್ಲಿಸಬೇಕು ಎಂದು ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News