ರಾಜ್ಯದಲ್ಲಿ ಪದೇ ಪದೇ ನೈತಿಕ ಪೋಲಿಸ್ ಗಿರಿ ನಡೆಯುತ್ತಿರುವುದು ಖೇದಕರ: ಲಕ್ಷ್ಮೀ ಹೆಬ್ಬಾಳ್ಕರ್

Update: 2024-01-13 08:59 GMT

ಹುಬ್ಬಳ್ಳಿ: ರಾಜ್ಯದಲ್ಲಿ ಪದೇ ಪದೇ ನೈತಿಕ ಪೋಲಿಸ್ ಗಿರಿ ನಡೆಯುತ್ತಿರುವುದು ಖೇದಕರ ಸಂಗತಿಯಾಗಿದೆ. ಹಾನಗಲ್ ತಾಲೂಕಿನ ನಾಲ್ಕರ ಕ್ರಾಸ್‌ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೋಲಿಸ್ ಇಲಾಖೆ ಕ್ರಮ ಕೈಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಶನಿವಾರ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾರು ಕೂಡಾ ನೈತಿಕ ಪೋಲಿಸ್ ಗಿರಿ ಮಾಡಬಾರದು. ಈಗಾಗಲೇ ಘಟನಾ ಸ್ಥಳಕ್ಕೆ ಹಾವೇರಿ ಎಸ್ಪಿ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ. ಈ ಬಗ್ಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಮಹಿಳೆಯರು ಯಾರೂ ಆತಂಕ ಪಡುವ ಅಗತ್ಯವಿಲ್ಲ. ಇಂತಹ ಕೃತ್ಯ ಮಾಡಿದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗುತ್ತದೆ ಎಂದರು.

ಲೋಕಸಭಾ ಚುನಾವಣೆ ವಿಚಾರವಾಗಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ನಿಟ್ಟಿನಲ್ಲಿ ಕೆಲಸಗಳು ನಡೆಯುತ್ತಿವೆ. ದೆಹಲಿ ಭೇಟಿಯಲ್ಲಿ ಲೋಕಸಭಾ ಚುನಾವಣೆ ಪೂರ್ವ ತಯಾರಿ ಚರ್ಚೆ ನಡೆದಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದೆ. ಅಳೆದು ತೂಗಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ನಡೆಯುತ್ತದೆ ಎಂದು ಹೇಳಿದರು.

ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನ ನೀಡಿದ್ದಾರೆ. ಐದು ಗ್ಯಾರಂಟಿ ಭರವಸೆಯನ್ನು ಆರು ತಿಂಗಳಲ್ಲಿ ಈಡೇರಿಸಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಆರ್ಶೀವಾದ ಮಾಡುವ ವಿಶ್ವಾಸವಿದೆ. ಹೆಚ್ಚಾಗಿ ಬಿಜೆಪಿಗಿಂತ ಕಾಂಗ್ರೆಸ್ ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನ ಗೆಲುವು ಸಾಧಿಸಲಿದೆ ಎಂದರು.

ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಸ್ಲೀಪಿಂಗ್ ಅಭಿಯಾನ ವಿಚಾರವಾಗಿ ಮಾತನಾಡಿದ ಸಚಿವೆ, ಬಿಜೆಪಿಯವರಿಗೆ ಇದೀಗ ಎಚ್ಚರ ಆಗಿದೆ ಎಂದು ಲೇವಡಿ ಮಾಡಿದರು.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ವಿಚಾರದಲ್ಲಿ ಪಕ್ಷದ ನಿಲುವಿಗೆ ನಾನು ಬದ್ದ, ನಾನು ರಾಮನ ಭಕ್ತೆ, ಅದರ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News