ಕೆಲವೊಂದು ವಿಚಾರದಲ್ಲಿ ಸೋಮಣ್ಣ ಅವರಿಗೆ ಅನ್ಯಾಯ ಆಗಿರುವುದು ನಿಜ: ಮುನಿರತ್ನ
ಬೆಂಗಳೂರು: ವಿಧಾನಸಭಾ ಚುನಾವಣೆಯ ಬಳಿಕ ಸ್ವಪಕ್ಷೀಯರ ವಿರುದ್ಧ ಪದೇ ಪದೇ ಅಸಮಾಧಾನ ವ್ಯಕ್ತಪಡಿಸುತ್ತಿರುವ ಮಾಜಿ ಸಚಿವ ವಿ.ಸೋಮಣ್ಣ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಮುನಿರತ್ನ, ಕೆಲವೊಂದು ವಿಚಾರದಲ್ಲಿ ಸೋಮಣ್ಣ ಅವರಿಗೆ ಅನ್ಯಾಯ ಆಗಿರುವುದು ನಿಜ ಎಂದು ಹೇಳಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಅದರಲ್ಲೂ ವಿಶೇಷವಾಗಿ ಗೋವಿಂದರಾಜ ನಗರದಲ್ಲಿ ಸೋಮಣ್ಣ ಒಳ್ಳೆಯ ಹೆಸರು ಇರುವಂತಹ ವ್ಯಕ್ತಿ. ಅವರಿಗೆ ಹಿಂದಿನ ಚುನಾವಣೆಯಲ್ಲಿ ಚಾಮರಾಜನಗರ, ವರುಣಾ ಎರಡು ಕ್ಷೇತ್ರಗಳ ಬದಲಾಗಿ ಒಂದೇ ಕ್ಷೇತ್ರದಿಂದ ಕಣಕ್ಕಿಳಿಯಲು ಅವಕಾಶ ಕೊಡಬೇಕಿತ್ತು ಎಂದರು.
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರವಾಗಿ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದಾಗ, ಹೈಕಮಾಂಡ್ ನಮ್ಮ ಅಭಿಪ್ರಾಯ ಕೇಳಬೇಕಿತ್ತು ಎಂದು ಹೇಳದವರು? ಈಗ ಯಾಕೆ ಮೈತ್ರಿ ಬಗ್ಗೆ ಅಪಸ್ವರ ಎತ್ತುತ್ತಿದ್ದಾರೆ. ಪಕ್ಷದ ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ಸರಿಯಾದ ನಿರ್ಧಾರ ಕೈಗೊಂಡಿದೆ ಎಂದರು.