ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ: ಸಿಎಂ ಸಿದ್ದರಾಮಯ್ಯ

Update: 2024-01-20 14:53 GMT

ಬೆಂಗಳೂರು: ‘ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಪರಿಶೀಲನೆ ನಡೆಸಲು ಕೇಂದ್ರ ಸರಕಾರ ಸಂಪುಟ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿರುವುದು ‘ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ ಆಗಿದ್ದು, ಇದರ ಹಿಂದೆ ಯಾವುದೇ ಪ್ರಾಮಾಣಿಕ ಕಾಳಜಿ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶನಿವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ‘ಇದೇ ಉದ್ದೇಶಕ್ಕಾಗಿ ಕೇಂದ್ರ ಸರಕಾರ ರಚಿಸಿದ್ದ ನ್ಯಾ.ಉಷಾ ಮೆಹ್ರಾ ಆಯೋಗವು ಅಂತಿಮವಾಗಿ ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡಿ ಒಳಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿಯೊಂದೇ ಪರಿಹಾರ ಎಂದು ವರದಿ ನೀಡಿತ್ತು. ಆಂಧ್ರದಲ್ಲಿ ಪರಿಶಿಷ್ಟ ಜಾತಿಗಳ ಉಪವರ್ಗೀಕರಣದ ಬಗ್ಗೆ ಅಧ್ಯಯನ ನಡೆಸಿದ್ದ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗವು ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿತ್ತು. ಹೀಗಿರುವಾಗ ಇದಕ್ಕೆ ಇನ್ನೊಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸುವ ಅಗತ್ಯವಾದರೂ ಏನಿದೆ? ಇದು ಕೇವಲ ‘ಸಮಯ ಕೊಲ್ಲುವ’ ತಂತ್ರ ಅಷ್ಟೇ ಆಗಿದೆ’ ಎಂದು ಟೀಕಿಸಿದ್ದಾರೆ.

‘ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆಯನ್ನು ಈಡೇರಿಸಬೇಕೆಂಬ ಪ್ರಾಮಾಣಿಕ ಉದ್ದೇಶ ಕೇಂದ್ರ ಸರಕಾರಕ್ಕೆ ಇದ್ದರೆ ಸಂವಿಧಾನ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಮಾಡುವ ಮಸೂದೆಯನ್ನು ಸಂಸತ್‍ನಲ್ಲಿ ಮಂಡಿಸಿ ಅಂಗೀಕಾರ ಪಡೆಯಬೇಕು ಮತ್ತು ಶೀಘ್ರವಾಗಿ ಒಳಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

‘ರಾಜ್ಯದ ಬಿಜೆಪಿ ನಾಯಕರು ಎಂದಿನಂತೆ ಎರಡೆರಡು ನಾಲಿಗೆಗಳಲ್ಲಿ ಮಾತನಾಡುತ್ತಿದ್ದಾರೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆಯ ಈಡೇರಿಕೆಯ ಹೊಣೆ ತಮ್ಮ ಹೆಗಲ ಮೇಲೆ ಬಿದ್ದ ನಂತರ ತಳಮಳಕ್ಕೀಡಾಗಿರುವ ಬಿಜೆಪಿ ನಾಯಕರು ತಲೆಗೊಬ್ಬರಂತೆ ತಲೆಬುಡವಿಲ್ಲದ ಹೇಳಿಕೆಗಳನ್ನು ನೀಡಿ ತಮ್ಮ ಅಜ್ಞಾನ ಪ್ರದರ್ಶಿಸುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ಬಿಜೆಪಿ ನಾಯಕರು ನಮ್ಮ ವಿರುದ್ದ ರಾಜಕೀಯ ದುರುದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡುತ್ತಾ ವೃಥಾ ಕಾಲಹರಣ ಮಾಡದೆ ಸಂವಿಧಾನದ 341ನೆ ಪರಿಚ್ಚೇದಕ್ಕೆ ತಿದ್ದುಪಡಿ ಮಾಡಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ದಶಕಗಳ ಬೇಡಿಕೆಯನ್ನು ಈಡೇರಿಸುವಂತೆ ಪ್ರಧಾನಿ ಮೋದಿಯವರ ಮೇಲೆ ಒತ್ತಡ ಹೇರಬೇಕು’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News