ಸದನದಲ್ಲಿ ಜೈ ಭೀಮ್ VS ಜೈ ಶ್ರೀರಾಮ್...!
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ಭಾಷಣ ಮುಗಿಸುತ್ತಿದ್ದಂತೆ ಬಿಜೆಪಿ ಸದಸ್ಯರು ಜೈ ಶ್ರೀರಾಮ್ ಘೋಷಣೆ ಕೂಗಿದರೆ, ಆಡಳಿತ ಪಕ್ಷದ ಸದಸ್ಯರು ಜೈ ಭೀಮ್, ಜೈ ಸಂವಿಧಾನ್ ಘೋಷಣೆ ಮೊಳಗಿಸಿದ್ದು ಗಮನ ಸೆಳೆಯಿತು.
ಸೋಮವಾರ ಬೆಳಗ್ಗೆ ನಿಗದಿತ ಸಮಯಕ್ಕೆ ರಾಜ್ಯಪಾಲರು ರಾಜಭವನದಲ್ಲಿ ವಿಧಾನಸೌಧಕ್ಕೆ ಆಗಮಿಸಿದರು. ಅವರಿಗೆ ಸ್ಪೀಕರ್, ಸಭಾಪತಿ, ಮುಖ್ಯಮಂತ್ರಿ ಹಾಗೂ ಕಾನೂನು ಸಚಿವರು ಸೇರಿ ಉಭಯ ಸದನಗಳ ಕಾರ್ಯದರ್ಶಿಗಳು ಅದ್ದೂರಿ ಸ್ವಾಗತ ಕೋರಿದರು.
ಇದೇ ಮೊದಲ ಬಾರಿಗೆ ಪ್ರತಿಪಕ್ಷ ಬಿಜೆಪಿ ಸದಸ್ಯರು ಕೇಸರಿ ಶಾಲು ಧರಿಸಿ ಕಲಾಪದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಸದನ ಆರಂಭಕ್ಕೂ ಮೊದಲೇ ಸದನದ ಒಳಗೆ ಕೇಸರಿ ಶಾಲು ಹಾಕಿಕೊಂಡು ಬಂದ ಬಿಜೆಪಿ ಸದಸ್ಯರು ಜೈ ಶ್ರೀರಾಮ್ ಘೋಷಣೆ ಕೂಗಿದರು.
ವರ್ಷದ ಮೊದಲ ಅಧಿವೇಶನದಲ್ಲಿ ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಹಿಂದಿಯಲ್ಲಿ ಭಾಷಣ ಮಾಡಿದರು. ಭಾಷಣ ಮುಗಿಸಿ ರಾಜ್ಯಪಾಲರು ‘ಜೈ ಹಿಂದ್, ಜೈ ಕರ್ನಾಟಕ, ಧನ್ಯವಾದಗಳು’ ಎಂದು ಹೇಳುತ್ತಿದ್ದಂತೆ ಬಿಜೆಪಿ ಸದಸ್ಯರು ಜೈ ಶ್ರೀರಾಮ್ ಎಂದು ಏರಿದ ಧ್ವನಿಯಲ್ಲಿ ಘೋಷಣೆ ಕೂಗಿದರು.
ಅಷ್ಟರಲ್ಲಿ ಸದನದಲ್ಲಿ ರಾಷ್ಟ್ರಗೀತೆ ಮೊಳಗಿತು. ರಾಷ್ಟ್ರಗೀತೆ ಮುಗಿಯುತ್ತಿದ್ದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವ ಎಚ್.ಕೆ. ಪಾಟೀಲ್ ಸಭೆಯಿಂದ ನಿರ್ಗಮಿಸಿದರು.
ರಾಜ್ಯಪಾಲರು ತೆರಳುವವರೆಗೂ ಬಿಜೆಪಿ ಸದಸ್ಯರು ಜೈಶ್ರೀರಾಮ್ ಘೋಷಣೆ ಕೂಗುತ್ತಿದ್ದರೆ, ಇದಕ್ಕೆ ಪ್ರತಿಯಾಗಿ ಸಚಿವರಾದ ಸಂತೋಷ್ ಲಾಡ್, ಬೈರತಿ ಸುರೇಶ್, ಲಕ್ಷ್ಮಿ ಹೆಬ್ಬಾಳ್ಕರ್, ಕಾಂಗ್ರೆಸ್ ಸದಸ್ಯ ಪ್ರದೀಪ್ ಈಶ್ವರ್ ಸೇರಿದಂತೆ ಇನ್ನಿತರ ಸದಸ್ಯರು ‘ಜೈ ಭೀಮ್, ಜೈ ಸಂವಿಧಾನ' ಎಂದು ಘೋಷಣೆ ಕೂಗಿದರು.
ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಧ್ವಜ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ಉದ್ದೇಶದಿಂದ ಬಿಜೆಪಿಯ ಬಹುತೇಕ ಸದಸ್ಯರು ಕೇಸರಿ ಶಾಲು ಧರಿಸಿ ಸದನದಲ್ಲಿ ಪಾಲ್ಗೊಳ್ಳುವ ಮೂಲಕ ಸದನದ ಗಮನ ಸೆಳೆದರು.