ರಾಜ್ಯ ಸರಕಾರದ ವಿರುದ್ಧ ಎ.7ರಿಂದ ಜನಾಕ್ರೋಶ ಯಾತ್ರೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬಿ.ವೈ. ವಿಜಯೇಂದ್ರ
ಬೆಂಗಳೂರು: ಬಡವರಿಗೆ ಬರೆ ಎಳೆಯುವ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ- ಪ್ರತಿಭಟನೆ ನಡೆಸಲಿದೆ. ರಾಜ್ಯ ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವ ಕೆಲಸವನ್ನು ಹೋರಾಟದ ಮುಖೇನ ಮಾಡಲು ನಿರ್ಧರಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಏರ್ಪಡಿಸಿದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಎಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ. ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ರಾಜ್ಯದ ಎಲ್ಲ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಕಾರ್ಯಕರ್ತರು ಈ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು. ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದ್ದನ್ನು ಆಕ್ಷೇಪಿಸಿ ಅದೇದಿನ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.
ಈ ಧರಣಿ ತುದಿ ಮುಟ್ಟಿಸುವ ಕುರಿತು ಎ.2ರಂದು ನಿರ್ಧರಿಸಲಿದ್ದೇವೆ ಎಂದು ಹೇಳಿದರು. ಎ.5ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ, ತಾಲ್ಲೂಕುಗಳಲ್ಲಿ, ಮಂಡಲದಲ್ಲಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಾರೆ ಎಂದರು.
7ರಿಂದ ರಾಜ್ಯದಾದ್ಯಂತ ಜನಜಾಗೃತಿಗೆ ‘ಜನಾಕ್ರೋಶ ಯಾತ್ರೆ’:
ಎಪ್ರಿಲ್ 7ರಂದು ಮಧ್ಯಾಹ್ನ 3ಕ್ಕೆ ಮೈಸೂರಿನಿಂದ ಜನಜಾಗೃತಿ ಹೋರಾಟ ಆರಂಭವಾಗಲಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೋರಾಟಕ್ಕೆ ಚಾಲನೆ ನೀಡಲಿದ್ದಾರೆ. ಕೇಂದ್ರ ಸಚಿವರಾದ ಸೋಮಣ್ಣ, ಶೋಭಾ ಕರಂದ್ಲಾಜೆ ಅವರ ಜೊತೆ ಚರ್ಚಿಸಿದ್ದೇನೆ. 7ರಂದು ಮೈಸೂರು, ಚಾಮರಾಜನಗರ ಜಿಲ್ಲೆ, 8ರಂದು ಬೆಳಿಗ್ಗೆ ಮಂಡ್ಯ, ಮಧ್ಯಾಹ್ನ ಹಾಸನದಲ್ಲಿ ಹೋರಾಟ ಇದೆ. 9ರಂದು ಕೊಡಗು- ಮಂಗಳೂರಿನಲ್ಲಿ ಹೋರಾಟ, 10ರಂದು ಉಡುಪಿ, ಚಿಕ್ಕಮಗಳೂರಿನಲ್ಲಿ ಮೊದಲ ಹಂತದ ಹೋರಾಟ ಇದೆ ಎಂದರು.
13ರಿಂದ ಶಿವಮೊಗ್ಗ, ಉತ್ತರ ಕನ್ನಡದಲ್ಲಿ ಎರಡನೇ ಹಂತದ ಹೋರಾಟ ಇರುತ್ತದೆ. ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಇದು ಸಂಚರಿಸಲಿದೆ ಎಂದು ವಿವರಿಸಿದರು. ಪ್ರತಿ ಜಿಲ್ಲೆಯಲ್ಲಿ ನಗರದಲ್ಲಿ 2-3 ಕಿಮೀ ಪಾದಯಾತ್ರೆ, ಬಳಿಕ ಸಭೆ ನಡೆಯಲಿದೆ. ಮುಖಂಡರು ಭಾಗವಹಿಸುತ್ತಾರೆ ಎಂದರು.
ರಾಜ್ಯ ಬಜೆಟ್‍ನಲ್ಲಿ ಅಲ್ಪಸಂಖ್ಯಾತರಿಗೆ, ಮುಸಲ್ಮಾನರಿಗೆ ಓಲೈಕೆ ಮಾತ್ರವಲ್ಲದೆ ಹಿಂದೂಗಳಿಗೆ ಅಪಮಾನ ಮಾಡಲಾಗಿದೆ. ಸರಕಾರಿ ಕಾಮಗಾರಿಗಳಲ್ಲಿ ಮುಸಲ್ಮಾನರಿಗೆ ಶೇ 4 ಮೀಸಲಾತಿ ನೀಡಿದ್ದು, ಕಾನೂನಿನ ವಿರುದ್ಧವಾಗಿದೆ. ಉನ್ನತ ಶಿಕ್ಷಣಕ್ಕೆ ಹೊರದೇಶಕ್ಕೆ ಹೋಗುವ ಮುಸಲ್ಮಾನ ವಿದ್ಯಾರ್ಥಿಗಳಿಗೆ 20 ಲಕ್ಷ ಇದ್ದುದನ್ನು 30 ಲಕ್ಷಕ್ಕೆ ಏರಿಸಿದ್ದಾರೆ. ಹಿಂದೆ ಮುಸಲ್ಮಾನ ಹೆಣ್ಮಕ್ಕಳಿಗೆ ಶಾದಿ ಭಾಗ್ಯ ನೀಡಿದ್ದರು. ಇದೀಗ ಮುಸ್ಲಿಂ ಹೆಣ್ಮಕ್ಕಳ ಆತ್ಮರಕ್ಷಣೆಗೆ ನೂರಾರು ಕೋಟಿಯನ್ನು ರಾಜ್ಯ ಸರಕಾರ ವೆಚ್ಚ ಮಾಡುತ್ತಿದೆ; ಇಮಾಮರ ವೇತನ ಹೆಚ್ಚಿಸಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು.
ಕೇವಲ ಮುಸ್ಲಿಮರಿಗೆ ಮಾತ್ರ ಇಂಥ ಯೋಜನೆಗಳು ಏಕೆ? ಮೋದಿಜೀ ಅವರು ಜನಧನ ಸೇರಿ ಹಲವು ಯೋಜನೆ ಜಾರಿಗೊಳಿಸಿದ್ದು, ಎಲ್ಲರಿಗೂ ಅವಕಾಶ ನೀಡಿದ್ದಾರೆ. ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮಿ ಯೋಜನೆಯನ್ನು ಹಿಂದೂಗಳಿಗೆ ಮಾತ್ರ ಕೊಟ್ಟಿಲ್ಲ; ಮುಸ್ಲಿಮರು ಸೇರಿ ಎಲ್ಲರಿಗೂ ಕೊಟ್ಟಿದ್ದಾರೆ ಎಂದು ವಿವರಿಸಿದರು. ಹಿಂದೂಗಳ ಅವಮಾನವನ್ನು ನಾವು ಖಂಡಿಸುತ್ತೇವೆ. ಸಿದ್ದರಾಮಯ್ಯನವರು ಹಾಲುಮತ ಸಮುದಾಯ, ಕಾಯಕ ಸಮುದಾಯಗಳ ನಿರ್ಲಕ್ಷಿಸಿದ್ದಾರೆ ಎಂದು ಟೀಕಿಸಿದರು.
ಶೋಷಿತರ ಅಭಿವೃದ್ಧಿಗೆ ಮೀಸಲಿಟ್ಟ 38,860 ಕೋಟಿ ದುರುಪಯೋಗ:
ಶೋಷಿತರು, ಪೀಡಿತರ ಅಭಿವೃದ್ಧಿಗೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಅನುದಾನದಲ್ಲಿ ಕಾಂಗ್ರೆಸ್ ಸರಕಾರವು 2023-24ರಲ್ಲಿ 11,144 ಕೋಟಿಯನ್ನು ಬೇರೆಡೆಗೆ ವರ್ಗಾಯಿಸಿದ್ದಾರೆ. 2024-25ರಲ್ಲಿ 14,282 ಕೋಟಿ ಹಣ ಬೇರೆ ಕಡೆಗೆ ವರ್ಗಾಯಿಸಿದ್ದಾರೆ. 2025-26ರಲ್ಲಿ ಇದು 13,433 ಕೋಟಿ. ಒಟ್ಟಾರೆಯಾಗಿ ಕಾಂಗ್ರೆಸ್ ಸರಕಾರವು 38,860 ಕೋಟಿಯಷ್ಟು ಹಣವನ್ನು ಬೇರೆ ಕಡೆ ವರ್ಗಾಯಿಸಿ, ದುರುಪಯೋಗ ಮಾಡಿಕೊಂಡಿದೆ ಎಂದು ವಿಜಯೇಂದ್ರ ಅವರು ಟೀಕಿಸಿದರು. ಅಲ್ಲದೆ, ಇದನ್ನು ಖಂಡಿಸಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಬಿ. ಶ್ರೀರಾಮುಲು, ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ್, ಸಂಸದ ಬೃಜೇಶ್ ಚೌಟ, ಶಾಸಕರಾದ ಮುನಿರತ್ನ, ಎಸ್.ಆರ್. ವಿಶ್ವನಾಥ್, ಕೃಷ್ಣಪ್ಪ, ಬಸವರಾಜ ಮತ್ತಿಮೋಡ, ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ನಡಹಳ್ಳಿ, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಭಾಗವಹಿಸಿದ್ದರು.