ಪ್ರಧಾನಿ ಮೋದಿ ಭೇಟಿಯಾದ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ, ಕುಮಾರಸ್ವಾಮಿ
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಜೆಡಿಎಸ್ ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಗುರುವಾರ ದಿಲ್ಲಿಯಲ್ಲಿ ಪ್ರಧಾನಿಯವರ ಕಾರ್ಯಾಲಯಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಯೂ ಆಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಸಿ.ಎನ್.ಬಾಲಕೃಷ್ಣ ಅವರೊಂದಿಗೆ ತೆರಳಿ, ಮೋದಿಯವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ರಾಜ್ಯದ ಪ್ರಸಕ್ತ ರಾಜಕೀಯ ಪರಿಸ್ಥಿತಿಯ ಜತೆಗೆ ಕೊಬ್ಬರಿ ಖರೀದಿ, ಕಾಡುಗೊಲ್ಲ ಜಾತಿಗೆ ಮೀಸಲಾತಿ ಸೌಲಭ್ಯ ಹಾಗೂ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡ ಅವರು, ಮೋದಿ ಅವರ ಜತೆ ಚರ್ಚೆ ನಡೆಸಿದರು.
ಇದೇ ವೇಳೆ ಕೊಬ್ಬರಿಗೆ ಬೆಂಬಲ ಬೆಲೆ ನೀಡುವುದು ಹಾಗೂ ನಾಫೆಡ್ ಮೂಲಕ ಖರೀದಿ ಮಾಡಬೇಕು ಎಂಬ ಬಗ್ಗೆ ಪ್ರಧಾನಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.
ನಿಖಿಲ್ ಪ್ರಚಾರ: ನಿಖಿಲ್ ಕುಮಾರಸ್ವಾಮಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಪ್ರಚಾರ ಮಾಡುತ್ತಾರೆ. ಯಾವುದೇ ಕಾರಣಕ್ಕೂ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಜನರು ಚುನಾವಣೆಗೆ ನಿಲ್ಲಿ ಎಂದು ಹೇಳುತ್ತಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ಕಣಕ್ಕೆ ಇಳಿಯಲಿ ಎಂದು ಬಯಸುತ್ತಿದ್ದಾರೆ. ಎರಡು ಬಾರಿ ಅವರು ಸೋತಿದ್ದಾರೆ. ಹೀಗಾಗಿ ಜನರ ಅನುಕಂಪವೂ ಇದೆ. ಆದರೆ ಅವರಿಗೆ ಸ್ಪರ್ಧೆ ಮಾಡುವ ಉದ್ದೇಶವಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಜನವರಿ ಹೊತ್ತಿಗೆ ಕ್ಷೇತ್ರ ಹಂಚಿಕೆ: ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ, ಗೊಂದಲ ಇಲ್ಲ. ಯಾವ ಯಾವ ಕ್ಷೇತ್ರದಲ್ಲಿ ಯಾರು ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ನಾವೇ ಪರಸ್ಪರ ಕೂತು ಅಂತಿಮಗೊಳಿಸುತ್ತೇವೆ. ಆ ಬಗ್ಗೆ ಯಾವುದೇ ಸಮಸ್ಯೆ ಇಲ್ಲ ಎಂದು ಕುಮಾರಸ್ವಾಮಿ ತಿಳಿಸಿದರು.
ಒಂದು ಕ್ಷೇತ್ರ ಹೆಚ್ಚೂ ಕಡಿಮೆ ಆಗಬಹುದು ಅಷ್ಟೇ. ಅದರಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ. ಮುಖ್ಯವಾಗಿ ಪರಸ್ಪರ ವಿಶ್ವಾಸ ಬೇಕು ಅದನ್ನು ನಾವು ಉಳಿಸಿಕೊಳ್ಳಬೇಕು. ಅದಕ್ಕೆ ಏನೆಲ್ಲಾ ಮಾಡಬೇಕೋ ಅದನ್ನು ಮಾಡುತ್ತೇನೆ. ಜನವರಿ ಅಂತ್ಯದ ಒಳಗೆ ನಾವು ಎಲ್ಲ ನಿರ್ಧಾರ ಮಾಡುತ್ತೇವೆ ಎಂದು ಕುಮಾರಸ್ವಾಮಿ ಉತ್ತರ ನೀಡಿದರು.
ನಾನು ಸ್ಪರ್ಧಿಸುವುದಿಲ್ಲ: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಉದ್ದೇಶ ನನ್ನ ಮುಂದೆ ಇಲ್ಲ. ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿ ಬರುತ್ತಿದೆ. ಅದು ನಮ್ಮ ಜನರು, ಕಾರ್ಯಕರ್ತರು ಭಾವನೆ . ನಾನೇನಿದ್ದರೂ ರಾಜ್ಯ ರಾಜಕಾರಣಕ್ಕೆ ಸೀಮಿತ. ನಾನು ಇಲ್ಲಿಯೇ ಇದ್ದರೆ ರಾಜ್ಯಕ್ಕೆ ಒಳ್ಳೆಯದು ಎನ್ನುವುದು ಅನೇಕ ಜನರ ಅಭಿಪ್ರಾಯ, ನನ್ನ ಅಭಿಪ್ರಾಯವೂ ಅದೇ ಆಗಿದೆ. ನಾನು ಕರ್ನಾಟಕದಲ್ಲೇ ಇರಲು ತೀರ್ಮಾನ ಮಾಡಿದ್ದೇನೆ ಎಂದು ಕುಮಾರಸ್ವಾಮಿ ವಿವರಣೆ ನೀಡಿದರು.