ಪತ್ರಕರ್ತ ಸಚ್ಚಿದಾನಂದ ಮೂರ್ತಿ ನಿಧನ
ಬೆಂಗಳೂರು, ಅ. 13: ಹಿರಿಯ ಪತ್ರಕರ್ತ ಕೆ.ಎಸ್.ಸಚ್ಚಿದಾನಂದ ಮೂರ್ತಿ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ.
ಸಚ್ಚಿದಾನಂದ ಮೂರ್ತಿ ಅವರಿಗೆ 75 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಶ್ರೀಯುತರು ಕೆಲವು ದಿನಗಳ ಹಿಂದೆ ಶ್ವಾಸಕೋಶ ಕಸಿಗೆ ಒಳಗಾಗಿದ್ದರು. ಎರಡೂ ಶ್ವಾಸಕೋಶ ಕಸಿ ಮಾಡಲಾಗಿತ್ತು. ನಂತರ ಚೇತರಿಸಿಕೊಂಡಿದ್ದರು. ಇತ್ತೀಚೆಗೆ ಮತ್ತೆ ಶ್ವಾಸಕೋಶ ಸೋಂಕು ಉಲ್ಬಣಿಸಿದೆ. ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕೋಲಾರ ಮೂಲದ ಸಚ್ಚಿದಾನಂದ ಮೂರ್ತಿ 1982ರಲ್ಲಿ ದಿ ವೀಕ್ ಪತ್ರಿಕೆ ಸೇರಿದ್ದು, ಬಳಿಕ ಸ್ಥಾನಿಕ ಸಂಪಾದಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಮಲಯಾಳ ಮನೋರಮಾ ಪತ್ರಿಕೆಗಳ ಮಾಜಿ ಸ್ಥಾನೀಯ ಸಂಪಾದಕರಾಗಿಯೂ ಕೆಲಸ ಮಾಡಿದ್ದರು. ದಿಲ್ಲಿಯಲ್ಲಿ 4 ದಶಕಗಳ ಕಾಲ ಕಾರ್ಯನಿರ್ವಹಿಸಿದ್ದರು ಎಂದು ತಿಳಿದು ಬಂದಿದೆ.
ಜಯನಗರ ಟಿ.ಬ್ಲಾಕ್‍ನ ಅವರ ಸ್ವಗೃಹದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಜೆ 6 ಗಂಟೆಯ ಸುಮಾರಿಗೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಗಣ್ಯರ ಕಂಬನಿ: ಸಚ್ಚಿದಾನಂದ ಮೂರ್ತಿ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದ್ದಿದ್ದಾರೆ.
‘ಹಿರಿಯ ಪತ್ರಕರ್ತ, ‘ಮಲಯಾಳ ಮನೋರಮಾ' ಮತ್ತು ‘ದಿ ವೀಕ್' ಪತ್ರಿಕೆಗಳ ಮಾಜಿ ಸ್ಥಾನೀಯ ಸಂಪಾದಕರಾಗಿದ್ದ ಕೆ.ಎಸ್.ಸಚ್ಚಿದಾನಂದಮೂರ್ತಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನಗೆ ಆತ್ಮೀಯರು ಮತ್ತು ಹಿತೈಷಿಗಳಾಗಿದ್ದ ಸಚ್ಚಿದಾನಂದಮೂರ್ತಿಯವರು ದಿಲ್ಲಿಯ ಮಾಧ್ಯಮರಂಗದಲ್ಲಿ ಸಕ್ರಿಯರಾಗಿದ್ದ ಕೆಲವೇ ಕೆಲವು ಹಿರಿಯ ಕನ್ನಡಿಗ ಪತ್ರಕರ್ತರಲ್ಲಿ ಒಬ್ಬರಾಗಿದ್ದರು. ರಾಜ್ಯ-ರಾಷ್ಟ್ರಗಳ ವಿದ್ಯಮಾನಗಳ ಜ್ಞಾನಕೋಶದಂತಿದ್ದ ಸಚ್ಚಿದಾನಂದ ಮೂರ್ತಿಯವರ ಸಾವು ಮಾಧ್ಯಮರಂಗಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬ ಮತ್ತು ಸ್ನೇಹಿತರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ’
-ಸಿದ್ದರಾಮಯ್ಯ ಮುಖ್ಯಮಂತ್ರಿ