ಕರ್ನಾಟಕ ಬಂದ್‌ಗೆ ಹಲವೆಡೆ ನೀರಸ ಪ್ರತಿಕ್ರಿಯೆ

ಬೆಂಗಳೂರು, ಮಾ.22: ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಮರಾಠಿಗರರು ನಡೆಸುವ ದೌರ್ಜನ್ಯ, ದಬ್ಬಾಳಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಗರದ ಪ್ರಮುಖ ಪ್ರದೇಶಗಳಲ್ಲಿ ಬಸ್, ಆಟೋ ಓಡಾಟ ಎಂದಿನಂತೆಯೇ ಇದೆ.
ಬಂದ್‌ಗೆ ಕಾರಣವಾದ ಪ್ರಮುಖ ಕೇಂದ್ರ ಬೆಳಗಾವಿಯಲ್ಲೇ ಜನಜೀವನ ಸಹಜ ಸ್ಥಿತಿಯಲ್ಲಿ ಸಾಗುತ್ತಿದೆ. ಎಂದಿನಂತೆ ಜನಜೀವನ ಆರಂಭಗೊಂಡಿದೆ. ಅಂಗಡಿ ಮುಂಗಟ್ಟುಗಳು ತೆರೆದಿವೆ. ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದಿಂದ ರಾಜ್ಯದ ವಿವಿಧ ಮಾರ್ಗಗಳಿಗೆ ಬಸ್‌ಗಳು ಕಾರ್ಯಾಚರಣೆ ನಡೆಸುತ್ತಿವೆ. ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಇಲ್ಲಿಂದ ಮಹಾರಾಷ್ಟ್ರಕ್ಕೆ ತೆರಳುವ ಕೆಎಸ್ಸಾರ್ಟಿಸಿ ಬಸ್‌ಗಳ ಹಾಗೂ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುವ ಎಂಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಈ ಮಧ್ಯೆ, ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲು ಕರವೇ ನಿರ್ಧರಿಸಿದೆ.
ಪ್ರತಿಭಟನಾಕಾರರು ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿರುವ ಕಾರಣ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. 1 ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ಮೈಸೂರು ಜಿಲ್ಲೆಯಲ್ಲಿ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್‌ಗೆ ಬೆಂಬಲ ಸೂಚಿಸಿ ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ ಓಡಾಟ ತಡೆಯಲು ಯತ್ನಿಸಿದ ಕನ್ನಡಪರ ಹೋರಾಟಗಾರರ ಸಂಘದ ಮುಖಂಡರನ್ನು ಪೊಲೀಸರು ಬಂಧಿಸಿದರು.
ಬಹುತೇಕ ಸಂಘಟನೆಗಳಿಂದ ನೈತಿಕ ಬೆಂಬಲ ವ್ಯಕ್ತವಾಗಿದೆ. ಹೋಟೆಲ್ ಮಾಲೀಕರ ಸಂಘ, ಖಾಸಗಿ ಬಸ್ ಮಾಲೀಕರ ಸಂಘ, ಮೈಸೂರು ಜಿಲ್ಲಾ ವಕೀಲರ ಸಂಘ ಸೇರಿ ಹಲವರಿಂದ ನೈತಿಕ ಬೆಂಬಲ ವ್ಯಕ್ತವಾಗಿದೆ. ಹೋಟೆಲ್‌ಗಳಲ್ಲಿ ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡಲಾಗುತ್ತಿದೆ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಕನ್ನಡ ಪರ ಸಂಘಟನೆಗಳು ಬೆಳ್ಳಂಬೆಳಗ್ಗೆಯೇ ಪ್ರತಿಭಟನೆ ನಡೆಸಿವೆ.
ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಕಾವು ಹೆಚ್ಚಾಗುವ ಸಾಧ್ಯತೆ ಇದ್ದು, ಭದ್ರತೆಗೆ 100 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಓರ್ವ ಎಸಿಪಿ, ಇಬ್ಬರು ಇನ್ಸ್ಪೆಕ್ಟರ್, 6 ಸಬ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ.
ಮಂಡ್ಯದ ಸಂಜಯ್ ವೃತ್ತದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ, ರಸ್ತೆಯಲ್ಲಿಯೇ ಮಲಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕರವೇ ಶಿವರಾಮೇಗೌಡ ಬಣದಿಂದ ಈ ಪ್ರತಿಭಟನೆ ನಡೆದಿದೆ.
ದಾವಣಗೆರೆಯಲ್ಲಿ ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ ಅಹಿತಕರ ಘಟನೆ ನಡೆಯದಂತೆ ಅಲ್ಲಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.