ಉಪ ಚುನಾವಣೆಯಲ್ಲಿ ಯಾರಿಗೆ ಒಲಿಯಲಿದೆ ವಿಜಯಮಾಲೆ?: ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು
ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಪಾಲಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಲಿದ್ದು, ವಿಜಯಮಾಲೆ ಯಾರಿಗೆ ಒಲಿಯಲಿದೆ ಎಂಬ ಕುತೂಹಲ ಮನೆ ಮಾಡಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತೀವ್ರ ಪೈಪೋಟಿಗೆ ಕಾರಣವಾಗಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮತದಾರ ಯಾರ ಕೈ ಹಿಡಿಯಲಿದ್ದಾನೆ ಎಂಬುದು ನೋಡಬೇಕಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪಾಲಿಗೆ ಪ್ರತಿಷ್ಠೆಯಾಗಿದೆ.
ಚನ್ನಪಟ್ಟಣದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಈ ಬಾರಿ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಅದೇ ಮತ್ತೊಂದೆಡೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅಂತರ ಕಡಿಮೆಯಾದರೂ ನನ್ನದೇ ಗೆಲುವು ಎಂದು ತಿಳಿಸಿದ್ದಾರೆ.
ಹ್ಯಾಟ್ರಿಕ್ ಸೋಲು:
ಚನ್ನಪಟ್ಟಣದಲ್ಲಿ ಯಾರೇ ಸೋತರೂ ಅದು ಅವರ ಪಾಲಿಗೆ ಹ್ಯಾಟ್ರಿಕ್ ಸೋಲಾಗಲಿದೆ. ನಿಖಿಲ್ ಕುಮಾರಸ್ವಾಮಿ ಈಗಾಗಲೆ ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಒಂದು ವೇಳೆ ಚನ್ನಪಟ್ಟಣದಲ್ಲಿ ಸೋತರೇ ಇದು ಅವರ ಸತತ ಮೂರನೆ ಸೋಲಾಗಲಿದೆ. ಗೆಲುವು ದಾಖಲಿಸಿದರೆ ಮೊದಲ ಬಾರಿ ವಿಧಾನಸಭೆ ಪ್ರವೇಶ ಮಾಡಲಿದ್ದಾರೆ.
ಅದೇ ರೀತಿ, ಸಿ.ಪಿ.ಯೋಗೇಶ್ವರ್ 2018 ಹಾಗೂ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಚನ್ನಪಟ್ಟಣದಲ್ಲಿ ಸೋಲು ಅನುಭವಿಸಿದ್ದರು. ಇದೀಗ, ಈ ಉಪ ಚುನಾವಣೆಯಲ್ಲಿ ಅವರ ಪರಾಭವಗೊಂಡರೆ ಯೋಗೇಶ್ವರ್ ಪಾಲಿಗೂ ಇದು ಸತತ ಮೂರನೆ ಸೋಲಾಗಲಿದೆ.
ಶಿಗ್ಗಾಂವಿಯಲ್ಲಿ ಯಾರೇ ಗೆದ್ದರೂ ಮೊದಲ ಬಾರಿ ಶಾಸಕ:
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಕಾಂಗ್ರೆಸ್ ಪಕ್ಷದಿಂದ ಯಾಸೀರ್ ಅಹ್ಮದ್ ಖಾನ್ ಪಠಾಣ್ ಸ್ಪರ್ಧೆ ಮಾಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಯಾಸೀರ್ ಅಹ್ಮದ್, ಬಸವರಾಜ ಬೊಮ್ಮಾಯಿ ವಿರುದ್ಧ ಪರಾಭವಗೊಂಡಿದ್ದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚು ಮತಗಳು ಬಂದಿರುವುದು ಕಾಂಗ್ರೆಸ್ ಪಾಳಯದಲ್ಲಿ ವಿಶ್ವಾಸವನ್ನು ಹೆಚ್ಚಿಸಿದೆ. ಈ ಬಾರಿ ಶಿಗ್ಗಾಂವಿಯಲ್ಲಿ ಯಾರೇ ಗೆಲುವು ಸಾಧಿಸಿದರೂ ಮೊದಲ ಬಾರಿ ಶಾಸನ ಸಭೆ ಪ್ರವೇಶಿಸಲಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ಈ.ತುಕಾರಾಂ ಅವರ ಪತ್ನಿ ಅನ್ನಪೂರ್ಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅವರ ಗೆಲುವಿಗೆ ತುಕಾರಾಂ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಟೊಂಕ ಕಟ್ಟಿ ನಿಂತಿದ್ದರು. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಪರವಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅಬ್ಬರದ ಪ್ರಚಾರ ಕೈಗೊಂಡಿದ್ದರು.
ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಸ್ಪರ್ಧೆಗಿಂತ ಹೆಚ್ಚಾಗಿ, ಬಳ್ಳಾರಿ ಜಿಲ್ಲಾ ರಾಜಕಾರಣದ ಮೇಲಿನ ಹಿಡಿತ ಸಾಧಿಸಲು ರೆಡ್ಡಿ ಹಾಗೂ ಲಾಡ್ ನಡುವಿನ ಪೈಪೋಟಿ ಇದೆ. ಇದೇ ಕಾರಣಕ್ಕೆ ಸಂಡೂರು ಕ್ಷೇತ್ರದಿಂದ ತಮ್ಮ ಆಪ್ತನನ್ನು ಅಭ್ಯರ್ಥಿಯನ್ನಾಗಿಸುವಲ್ಲಿ ಜನಾರ್ದನ ರೆಡ್ಡಿ ಯಶಸ್ವಿಯಾಗಿದ್ದರು. ಅದೇ ಮತ್ತೊಂದೆ ತುಕಾರಾಂ ಹಾಗೂ ಸಂತೋಷ್ ಲಾಡ್ ಸಂಡೂರಿನ ಮೇಲೆ ತಮ್ಮದೇ ಆದ ಹಿಡಿತವನ್ನು ಹೊಂದಿದ್ದಾರೆ. ಈ ಕ್ಷೇತ್ರದಲ್ಲಿಯೂ ಯಾರೇ ಚುನಾವಣೆಯಲ್ಲಿ ಗೆಲುವು ಸಾಧಿಸಿದರೂ ಮೊದಲ ಬಾರಿ ವಿಧಾನಸಭೆ ಪ್ರವೇಶ ಮಾಡಲಿದ್ದಾರೆ.
‘ರಾಜಕೀಯ ವಿಶ್ಲೇಷಕರ ಪ್ರಕಾರ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಶಿಗ್ಗಾಂವಿಯಲ್ಲಿ ಬಿಜೆಪಿ ಹಾಗೂ ಚನ್ನಪಟ್ಟಣದಲ್ಲಿ ಎನ್‍ಡಿಎ ಅಭ್ಯರ್ಥಿ ಗೆಲುವಿನ ನಗೆ ಬೀರಬಹುದು’ ಎಂದು ಹೇಳಲಾಗುತ್ತಿದೆ. ಶನಿವಾರ ಪ್ರಕಟವಾಗಲಿರುವ ಫಲಿತಾಂಶ ಎಲ್ಲ ಪ್ರಶ್ನೆಗಳಿಗೂ ಉತ್ತರ ಕೊಡಲಿದೆ.