ಬಿಜೆಪಿ ಸರ್ಕಾರದ ವಿರುದ್ಧದ ಶೇ.40ರಷ್ಟು ಕಮಿಷನ್ ಆರೋಪ ಕುರಿತು ತನಿಖೆಗೆ ಎಸ್‌ಐಟಿ ರಚಿಸಲು ಸಚಿವ ಸಂಪುಟ ನಿರ್ಧಾರ
ಸಚಿವ ಎಚ್.ಕೆ. ಪಾಟೀಲ್
ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮಾಡಿದ್ದ 40 ಪರ್ಸೆಂಟ್ ಲಂಚದ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾ.ಎಚ್.ಎನ್. ನಾಗಮೋಹನ್ ದಾಸ್ ವಿಚಾರಣಾ ಆಯೋಗವು ಸಲ್ಲಿಸಿರುವ ವರದಿಯಲ್ಲಿನ ಅಂಶಗಳ ಕುರಿತು ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ವಿಶೇಷ ತನಿಖಾ ತಂಡ(ಎಸ್‍ಐಟಿ) ರಚಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಆರೋಪ ಬಗ್ಗೆ ನಾಗಮೋಹನ್ ದಾಸ್ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಲಾಗಿತ್ತು. ನಾಗಮೋಹನ್ ದಾಸ್ ಅವರು ವಿಚಾರಣಾ ವರದಿ ಸಲ್ಲಿಸಿದ್ದು, ರಾಜ್ಯ ಸಚಿವ ಸಂಪುಟದಲ್ಲಿ ವಿಚಾರಣಾ ಆಯೋಗದ ವರದಿಯನ್ನು ಪರಿಶೀಲಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ದೂರುಗಳ ಮಾಹಿತಿ ಕಲೆ ಹಾಕಿ ವರದಿಯನ್ನು ನೀಡಲಾಗಿದ್ದು, 3 ಲಕ್ಷ ಕಾಮಗಾರಿಗಳ ಪೈಕಿ 1,729 ಕಾಮಗಾರಿಗಳ ಬಗ್ಗೆ ಆಪಾದನೆಗಳಿವೆ. ಯೋಜನೆ, ಹಣ ಬಿಡುಗಡೆ, ಎಲ್ಒಸಿ ಬಿಡುಗಡೆಯ ಸರಿಯಾದ ರೀತಿಯ ಮಾಹಿತಿ ಇಲ್ಲ. ಯಾವ ಪ್ರಮಾಣದಲ್ಲಿ ವ್ಯತ್ಯಾಸಗಳಾಗಿವೆ ಎಂಬುದನ್ನು ಚರ್ಚೆ ನಡೆಸಿದ್ದೇವೆ. ಅನುದಾನಕ್ಕಿಂತ ಹೆಚ್ಚು ಬಿಲ್ ಆಗಿದೆ, ಕಾಮಗಾರಿಗಳ ಬಗ್ಗೆ ಸಂಶಯಗಳಿವೆ. ಕೆಲವು ಕಡೆ ಟೆಂಡರ್ ಹಂಚಿಕೆ ವೇಳೆಯೇ ಮಧ್ಯವರ್ತಿಗಳ ಕೆಲಸ ಆಗಿದೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ವಿಚಾರಣಾ ಆಯೋಗದ ವರದಿಯ ಆಧಾರದ ಮೇಲೆ ಎಸ್‍ಐಟಿ ರಚನೆ ಮಾಡಲು ನಿರ್ಧರಿಸಲಾಗಿದೆ. ಇದರಲ್ಲಿ ತಾಂತ್ರಿಕ ತಜ್ಞರು, ಪರಿಣಿತರು ಇರಲಿದ್ದಾರೆ. ಎರಡು ತಿಂಗಳಲ್ಲಿ ವರದಿ ಕೊಡುವಂತೆ ಎಸ್‍ಐಟಿಗೆ ಸೂಚನೆ ನೀಡಲು ನಿರ್ಧರಿಸಲಾಗಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.
ಕೆಲವು ಇಲಾಖೆಗಳ ಬಗ್ಗೆ ನಾಗಮೋಹನ್ ದಾಸ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಯಾ ಇಲಾಖಾವಾರು ವರದಿ ನೀಡಿ, ಎಸ್‍ಐಟಿಗೆ ಅಗತ್ಯವಿರುವ ಮಾಹಿತಿ, ವಿವರಗಳನ್ನು ನೀಡುವಂತೆ ಸೂಚಿಸಲಾಗುವುದು ಎಂದು ಅವರು ತಿಳಿಸಿದರು.
ಹಿಂದಿನ ಬಿಜೆಪಿ ಸರಕಾರದ ವಿರುದ್ಧ ಕೇಳಿ ಬಂದಿದ್ದ 40 ಪರ್ಸೆಂಟ್ ಲಂಚದ ಆರೋಪದ ಕುರಿತು ನಿರ್ದಿಷ್ಟವಾಗಿ ಯಾವುದಾದರೂ ಇಲಾಖೆ ಅಥವಾ ಸಚಿವರ ವಿರುದ್ಧ ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ ಉಲ್ಲೇಖಿಸಲಾಗಿದೆಯೇ ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡದ ಕಾನೂನು ಸಚಿವ ಎಚ್.ಕೆ.ಪಾಟೀಲ್, ಈ ಸಂಬಂಧ ಎಸ್‍ಐಟಿ ತನಿಖೆ ನಡೆದ ಬಳಿಕ ಎಲ್ಲವೂ ತಿಳಿಯಲಿದೆ ಎಂದು ಉತ್ತರಿಸಿದರು.