ಟ್ವಿಟರ್: ಮೇಲ್ಮನವಿ ವಿಚಾರಣೆಗೆ ಅಂಗೀಕರಿಸಿದ ಹೈಕೋರ್ಟ್
ಬೆಂಗಳೂರು: ಆಕ್ಷೇಪಾರ್ಹ ಪೋಸ್ಟ್ ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ವೈಯಕ್ತಿಕ ಟ್ವಿಟರ್ ಖಾತೆಗಳನ್ನು ನಿಬರ್ಂಧಿಸಲು ಎಕ್ಸ್ ಕಾರ್ಪ್(ಹಿಂದಿನ ಟ್ವಿಟರ್) ಕಂಪೆನಿಗೆ ಸೂಚಿಸಿರುವ ಆದೇಶವನ್ನು ಮರು ಪರಿಶೀಲನೆ ನಡೆಸಲು ಕಾರಣಗಳಿಲ್ಲ ಎಂಬುದಾಗಿ ಕೇಂದ್ರ ಸರಕಾರ ಹೈಕೋರ್ಟ್‍ಗೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಎಕ್ಸ್ ಕಾರ್ಪ್ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಗೆ ಹೈಕೋರ್ಟ್ ಅಂಗೀಕರಿಸಿದೆ.
ಖಾತೆಗಳನ್ನು ನಿರ್ಬಂಧಿಸಲು ಸೂಚಿಸಿ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶ ಆಕ್ಷೇಪಿಸಿ ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಎಕ್ಸ್ ಕಾರ್ಪ್(ಟ್ವಿಟರ್) ಸಂಸ್ಥೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.
ಈ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್ ಅವರ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಿಚಾರಣೆಗೆ ಅಂಗೀಕರಿಸಿದ್ದು, ನ.9ಕ್ಕೆ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ.
ವಿಚಾರಣೆ ವೇಳೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ಪರ ವಕೀಲರು ಹಾಜರಾಗಿ, ನಿರ್ಬಂಧ ಆದೇಶವನ್ನು ಪರಿಶೀಲನೆ ನಡೆಸುವ ಕುರಿತು ನಿಲುವು ತಿಳಿಸುವಂತೆ ಕೇಂದ್ರ ಸರಕಾರಕ್ಕೆ ಸೆ.20ರಂದು ನ್ಯಾಯಾಲಯ ಸೂಚಿಸಿತ್ತು. ಆದರೆ, ನಿಬರ್ಂಧ ಆದೇಶವನ್ನು ಮರು ಪರಿಶೀಲನೆ ನಡೆಸಲು ಸಾಧ್ಯವಾಗುವುದಿಲ್ಲ. ಆದೇಶ ಮರುಪರಿಶೀಲಿಸಲು ಯಾವುದೇ ಸಕಾರಣಗಳು ಇಲ್ಲವಾಗಿವೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.