ಕಾವೇರಿ, ಮಹಾದಾಯಿ ವಿವಾದ; ಆ. 23ರಂದು ಸರ್ವಪಕ್ಷಗಳ ಸಭೆ ಕರೆದ ರಾಜ್ಯ ಸರಕಾರ

Update: 2023-08-20 12:46 GMT

ಬೆಂಗಳೂರು, ಆ. 20: ‘ಕಾವೇರಿ, ಮಹದಾಯಿ, ಕೃಷ್ಣಾ ಮತ್ತಿತರ ಜಲವಿವಾದ ಹಾಗೂ ರಾಜ್ಯದ ಅಣೆಕಟ್ಟೆಗಳಲ್ಲಿ ನೀರು ಪರಿಸ್ಥಿತಿ, ಕುರಿತು ಚರ್ಚಿಸಲು ಆ.23ರ ಬುಧವಾರ ಸರ್ವಪಕ್ಷಗಳ ಸಭೆ ಕರೆದಿದ್ದೇವೆ. ಈ ಸಭೆಗೆ ಕೆಲವು ಸಂಸದರಿಗೂ ಆಹ್ವಾನ ನೀಡಲಾಗಿದೆ’ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ರವಿವಾರ ಕೆಪಿಸಿಸಿ ಕಚೇರಿಯ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ಹೇಗೆ ಮಾಡಬೇಕೆಂಬುದರ ಬಗ್ಗೆ ಅಡ್ವೋಕೇಟ್ ಜನರಲ್ ಅವರಿಗೆ ಬಿಟ್ಟಿದ್ದೇವೆ. ಈ ವರ್ಷ ಸರಿಯಾಗಿ ಮಳೆ ಬಿದ್ದಿಲ್ಲ. ಹೀಗಾಗಿ ರೈತರ ಹಿತ ಕಾಯುವುದು ನಮ್ಮ ಕರ್ತವ್ಯ. ರಾಜ್ಯದಲ್ಲಿನ ಆಣೆಕಟ್ಟುಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು, ಈ ವಿಚಾರವಾಗಿ ಸರ್ವಪಕ್ಷ ಸಭೆ ಕರೆದಿದ್ದೇವೆ’ ಎಂದರು.

‘ನಾಳೆ ಸುಪ್ರೀಂ ಕೋರ್ಟ್‍ನಲ್ಲಿ ಮನವಿ ಸಲ್ಲಿಸುತ್ತಿದ್ದೇವೆ. ಈಗಾಗಲೇ ನೀರು ಹರಿಸುವ ನಿರ್ಧಾರ ಮರು ಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ ಮಾಡಿದ್ದೇವೆ. ನಾವು ರೈತರ ಹಿತವನ್ನು ಕಾಯಬೇಕು. ಕೋರ್ಟ್ ನಿರ್ಧಾರಕ್ಕೂ ಆದ್ಯತೆ ನೀಡಬೇಕು. ಬಿಜೆಪಿ ಹಾಗೂ ದಳದ ಸ್ನೇಹಿತರು ಈ ವಿಚಾರದಲ್ಲಿ ರಾಜಕೀಯ ಮಾಡಲು ಮುಂದಾಗಿದ್ದಾರೆ. ಅವರಿಗೆ ತಮ್ಮ ಕಾಲದಲ್ಲಿ ಏನಾಗಿತ್ತು ಎಂಬ ಅರಿವಿಲ್ಲವಾಗಿದೆ. ಈ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದೇ ಸರ್ವಪಕ್ಷ ಸಭೆ ಕರೆದಿದ್ದೇವೆ’ ಎಂದು ಸ್ಪಷ್ಟಪಡಿಸಿದರು.

‘ಕಾವೇರಿ ನೀರು ಬಿಡುಗಡೆ ವಿರೋಧಿಸಿ ನಾಳೆ(ಆ.21) ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ತಡೆದು ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ. ಅದು ಅವರದೇ ರಸ್ತೆ. ಅಲ್ಲಿ ಅನೇಕ ಜೀವಗಳು ಬಲಿಯಾಗಿವೆ. ಅವರು ಹೋರಾಟ ಮಾಡಲಿ’ ಎಂದು ಡಿ.ಕೆ.ಶಿವಕುಮಾರ್ ಇದೇ ವೇಳೆ ಲೇವಡಿ ಮಾಡಿದರು.

ʼʼಸುಪ್ರೀಂಕೋರ್ಟ್ ಗೆ ಅರ್ಜಿʼʼ

ಕಾವೇರಿ ನದಿ ನೀರು ಕುರಿತು ಉಂಟಾಗಿರುವ ವಿವಾದವನ್ನು ಬಗೆಹರಿಸಲು ಸೋಮವಾರ ಸುಪ್ರೀಂಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.  

ʼಶನಿವಾರ ನಡೆದ ಸಂಪುಟ ಸಭೆಗೆ ಅಡ್ವೊಕೇಟ್ ಜನರಲ್ ಅವರನ್ನು ಕರೆಸಿ ಚರ್ಚಿಸಲಾಯಿತು. ರಾಜ್ಯದ ವಾಸ್ತವ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿವರವಾದ ಮಾಹಿತಿ ನೀಡಿ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗುವುದುʼ ಎಂದು ಅವರು ತಿಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News