ಮಲ್ಲಿಕಾರ್ಜುನ ಖರ್ಗೆ, ಈಶ್ವರ್ ಖಂಡ್ರೆ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಆರಗ ಜ್ಞಾನೇಂದ್ರ

Update: 2023-08-02 14:05 GMT

ಬೆಂಗಳೂರು: ಅರಣ್ಯ ಸಚಿವ ಈಶ್ವರ ಖಂಡ್ರೆ  ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಅವರ ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆಗಾಗಿ ಮಾಜಿ ಗೃಹ ಸಚಿವ, ಹಾಲಿ ಶಾಸಕ ಆರಗ ಜ್ಞಾನೇಂದ್ರ  ವಿಷಾದ ವ್ಯಕ್ತಪಡಿಸಿದ್ದಾರೆ. 

ತಮ್ಮ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಮಲ್ಲಿಕಾರ್ಜುನ ಖರ್ಗೆ, ಈಶ್ವರ್ ಖಂಡ್ರೆ ಮನ ನೋಯಿಸುವ ಉದ್ದೇಶವಿರಲಿಲ್ಲ. ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಎಲ್ಲೂ ಉಲ್ಲೇಖಿಸಿಲ್ಲ. ಖಂಡ್ರೆ ಅವರನ್ನು ನೋಯಿಸಬೇಕು ಎಂಬ ಉದ್ದೇಶದಿಂದಲೂ ಮಾತನಾಡಿಲ್ಲ. ನನ್ನ ಮಾತಿನಿಂದ ಅವರ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

ಖರ್ಗೆ ಟೀಕೆ ಮಾಡುವಷ್ಟು ದೊಡ್ಡವನು ನಾನಲ್ಲ

ʼʼಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನ ಎಲ್ಲೂ ನಾನು ಉಲ್ಲೇಖಿಸಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಅನುಭವಿ ರಾಜಕಾರಣಿ, ಹಿರಿಯ ಮುತ್ಸದ್ದಿ. ಅವರನ್ನು ಟೀಕೆ ಮಾಡುವಷ್ಟು ದೊಡ್ಡವನು ನಾನಲ್ಲʼʼ ಎಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ.

ತೀರ್ಥಹಳ್ಳಿಯಲ್ಲಿ ಆರಗ ಜ್ಞಾನೇಂದ್ರ ಹೇಳಿದ್ದೇನು? 

ʼʼನಮ್ಮ ದುರಾದೃಷ್ಟ ಎಂದ್ರೇ ಆ ಭಾಗದವರು ಫಾರೆಸ್ಟ್ ಮಿನಿಸ್ಟರ್ ಅಗಿದ್ದಾರೆ. ಫಾರೆಸ್ಟ್ ಇಲ್ಲದವರು ಮಿನಿಸ್ಟರ್ ಅಗಿದ್ದಾರೆ. ಅವರಿಗೆ ಮರ- ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ, ಮರದ ನೆರಳು ಗೊತ್ತಿಲ್ಲ..ಸುಟ್ಟು ಕರಕಲಾಗಿರ್ತಾರೆ..., ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ, ಪಾಪ.., ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆʼʼ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News