ಅಪಹರಣ ಪ್ರಕರಣ | ರೇವಣ್ಣ ಜಾಮೀನು ರದ್ದು ಕೋರಿ ಎಸ್‌ಐಟಿ ಅರ್ಜಿ : ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು : ಮೈಸೂರು ಜಿಲ್ಲೆಯ ಕೆ.ಆರ್.ನಗರದ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಅಧೀನ ನ್ಯಾಯಾಲಯ ನೀಡಿದ್ದ ಜಾಮೀನನ್ನು ರದ್ದು ಕೋರಿ ವಿಶೇಷ ತನಿಖಾ ತಂಡ(ಎಸ್‌ಐಟಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಪುನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಎಸ್‌ಐಟಿ ಮತ್ತು ಅರ್ಜಿದಾರರ ಪರ ವಾದ ಆಲಿಸಿ ತೀರ್ಪು ಕಾಯ್ದಿರಿಸಿತು.
ವಿಚಾರಣೆ ವೇಳೆ ಎಸ್‌ಐಟಿ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, "ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಈ ಸಂಬಂಧ ತನಿಖೆಯ ಸಂದರ್ಭದಲ್ಲಿ ರೇವಣ್ಣ ಭಾಗಿಯಾಗಿರುವುದು ಸಾಭೀತಾಗಿದೆ. ಅಲ್ಲದೆ, ಸಂತ್ರಸ್ತೆಯು ತನಿಖಾಧಿಕಾರಿಗಳು ಮತ್ತು ನ್ಯಾಯಾಲಯದಲ್ಲಿ ನೀಡಿರುವ ಹೇಳಿಕೆಯಲ್ಲಿ ರೇವಣ್ಣ ವಿರುದ್ಧ ಆರೋಪ ಮಾಡಿದ್ದಾರೆ. ಈ ಆರೋಪವನ್ನು ದಾಖಲಿಸಿಕೊಂಡ ನ್ಯಾಯಾಲಯ ಜಾಮೀನನ್ನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಜಾಮೀನು ರದ್ದುಪಡಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಆಕ್ಷೇಪಿಸಿದ ರೇವಣ್ಣ ಪರ ವಕೀಲ ಸಿ.ವಿ.ನಾಗೇಶ್, ಜಾಮೀನು ಮಂಜೂರು ಮಾಡುವುದು ಮತ್ತು ರದ್ದುಪಡಿಸುವ ಪ್ರಕ್ರಿಯೆ ಸಂಪೂರ್ಣವಾಗಿ ವಿಭಿನ್ನವಾಗಿರಲಿದೆ. ಅಲ್ಲದೆ, ಇಡೀ ಪ್ರಕರಣದಲ್ಲಿ ರೇವಣ್ಣ ಅವರ ಯಾವುದೇ ಪಾತ್ರವಿಲ್ಲ. ಆದರೆ, ಸಂತ್ರಸ್ತೆಯನ್ನು ಅಪಹರಣ ಮಾಡಿದ್ದ ಸತೀಶ್ ಬಾಬಣ್ಣ ಎಂಬುವರು ರೇವಣ್ಣ ನಿಮ್ಮನ್ನು ಕರೆದುಕೊಂಡು ಬರುವುದಕ್ಕೆ ಹೇಳಿದ್ದಾರೆ ಎಂದು ತಿಳಿಸಿದ್ದಾರೆ ಎಂಬ ಆರೋಪವಿದೆ. ಇದು ಶಿಕ್ಷಾರ್ಹ ಅಪರಾಧವಲ್ಲ ಎಂದು ತಿಳಿಸಿದರು. ವಾದ ಪ್ರತಿವಾದ ಆಲಿಸಿದ ಪೀಠ ತೀರ್ಪು ಕಾಯ್ದಿರಿಸಿದೆ.