‘ಕೆಕೆಆರ್‍ಡಿಬಿಗೆ ಪ್ರತಿವರ್ಷ 5 ಸಾವಿರ ಕೋಟಿ ರೂ.’ ಕೇಂದ್ರಕ್ಕೆ ಮನವಿ ಸಲ್ಲಿಸಲು ನಿರ್ಣಯ ಅಂಗೀಕಾರ : ಸಿಎಂ ಸಿದ್ದರಾಮಯ್ಯ

Update: 2024-09-17 15:11 GMT

ಕಲಬುರಗಿ : ರಾಜ್ಯ ಸರಕಾರದ ಮಾದರಿಯಲ್ಲಿ ಕೇಂದ್ರ ಸರಕಾರವು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಕೆ.ಕೆ.ಆರ್.ಡಿ.ಬಿ)ಗೆ ಪ್ರತಿ ವರ್ಷ 5 ಸಾವಿರ ಕೋಟಿ ರೂ.ಗಳನ್ನು ನೀಡಬೇಕು ಎಂದು ಮನವಿ ಸಲ್ಲಿಸಲು ನಿರ್ಣಯ ಅಂಗೀಕರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಂಗಳವಾರ ಕಲಬುರಗಿಯ ಮಿನಿ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾವು ಕೊಟ್ಟ ಮಾತಿನಂತೆ ಕೆ.ಕೆ.ಆರ್.ಡಿ.ಬಿ.ಗೆ ಪ್ರತಿ ವರ್ಷ 5 ಸಾವಿರ ಕೋಟಿ ರೂ.ನೀಡುತ್ತಿದ್ದೇವೆ. ಸಂವಿಧಾನಕ್ಕೆ ತಿದ್ದುಪಡಿಯಾಗಿ 371ಜೆ ಸೇರ್ಪಡೆಯಾಗಿ 10 ವರ್ಷವಾದರೂ ಕೇಂದ್ರ ಸರಕಾರ ಈವರೆಗೆ ಒಂದು ರೂಪಾಯಿ ಕೊಟ್ಟಿಲ್ಲ ಎಂದು ಹೇಳಿದರು.

ಎಲ್ಲ ಹಳ್ಳಿಗಳಿಗೆ ಕುಡಿಯುವ ನೀರು: ಬೀದರ್ ಹಾಗೂ ಕಲಬುರಗಿ ಜಿಲ್ಲೆಯ ಎಲ್ಲ ಹಳ್ಳಿಗಳಿಗೆ ನಾರಾಯಣಪುರ ಜಲಾಶಯದಿಂದ ಶುದ್ಧ ಕುಡಿಯುವ ನೀರು ಒದಗಿಸುವ 7200 ಕೋಟಿ ರೂ.ಅಂದಾಜು ಮೊತ್ತದ ಯೋಜನೆಗೆ ಅನುಮೋದನೆ ನೀಡಲಾಗಿದೆ. ಈ 7200 ಕೋಟಿ ರೂ.ಗಳಲ್ಲಿ 3600 ಕೋಟಿ ರೂ.ಗಳನ್ನು ಭರಿಸುವಂತೆ ಕೇಂದ್ರ ಸರಕಾರಕ್ಕೆ ಯೋಜನೆಯ ವಿವರಗಳನ್ನು ಕಳುಹಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ.ಶರಣಪ್ರಕಾಶ್ ಪಾಟೀಲ್, ಎಚ್.ಕೆ.ಪಾಟೀಲ್, ಈಶ್ವರ್ ಖಂಡ್ರೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಚಿವ ಸಂಪುಟ ಸಭೆಯಲ್ಲಿ ಸುಮಾರು 56 ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. 10 ವಿಷಯಗಳನ್ನು ಹೊರತುಪಡಿಸಿ 46 ವಿಷಯಗಳು ಕಲ್ಯಾಣ ಕರ್ನಾಟಕಕ್ಕೆ ಸಂಬಂಧಪಟ್ಟವು. ಒಟ್ಟು 12,692 ಕೋಟಿ ರೂ.ಗಳ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಸೇರಿದ 46 ವಿಷಯಗಳಿಗೆ 11,770 ಕೋಟಿ ರೂ. ವ್ಯವವಾಗಲಿದೆ. ಬೀದರ್ ಹಾಗೂ ರಾಯಚೂರು ನಗರಸಭೆಗಳನ್ನು ಮಹಾನಗರ ಪಾಲಿಕೆಗಳನ್ನಾಗಿ ಮೇಲ್ದರ್ಜೇಗೇರಿಸಲು ನಿರ್ಣಯ ಮಾಡಿದ್ದೇವೆ.

-ಸಿದ್ದರಾಮಯ್ಯ, ಮುಖ್ಯಮಂತ್ರಿ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News