ʼಕ್ಷೀರ ಭಾಗ್ಯʼ 54 ಲಕ್ಷಕ್ಕೂ ಅಧಿಕ ಮಕ್ಕಳಿಗೆ ನೆರವು; ಅಂತರ್‌ ರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ವುಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2023-09-06 12:13 GMT

ತುಮಕೂರು.ಸೆ.6:ನಾಡಿನ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತಂದು 54 ಲಕ್ಷಕ್ಕೂ ಅಧಿಕ ಮಕ್ಕಳು ಪೌಷ್ಠಿಕ ಆಹಾರವನ್ನು ಪ್ರತಿ ದಿನ ಸೇವಿಸುವಂತಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮಧುಗಿರಿಯಲ್ಲಿ ಆಯೋಜಿಸಿದ್ದ ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಮಕ್ಕಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿದ್ದರೆ ಮಾತ್ರ ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆಯಲು ಸಾಧ್ಯ.ಎಲ್ಲಾ ಜಾತಿಯ ಎಲ್ಲಾ ಧರ್ಮದ ಬಡವರು ಮತ್ತು ಮಧ್ಯಮ ವರ್ಗದವರ ಮಕ್ಕಳ ಹಿತವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆವು. ಹತ್ತು ವರ್ಷಗಳಿಂದ ಪ್ರತೀ ದಿನ ಲಕ್ಷಾಂತರ ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗುವಂತೆ ಮಾಡಿದ್ದೇವೆ.ಹೀಗಾಗಿ ನಮ್ಮ ಹೆಮ್ಮೆಯ ಈ ಯೋಜನೆ ಅಂತರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಗಳಿಸಿದೆ ಎಂದು ವಿವರಿಸಿದರು.

ಬಡವರು, ಮಧ್ಯಮ ವರ್ಗದವರ ಬದುಕಿಗೆ ಅನುಕೂಲ ಆಗುವ ಕಾರ್ಯಕ್ರಮವನ್ನು ನಾವು ರೂಪಿಸಿದರೆ ಬಿಜೆಪಿ ಯವರು ಅಡ್ಡಗಾಲು ಹಾಕಿ ಕಾರ್ಯಕ್ರಮ ವಿಫಲಗೊಳಿಸಲು ಯತ್ನಿಸಿದರು.ಸ್ವತಃ ಪ್ರಧಾನಿ ಮೋದಿಯವರು ಬಡವರ ಪರ ಕಾರ್ಯಕ್ರಮ ನೀಡಿದ್ದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಅಪ್ಪಟ ಸುಳ್ಳು ಹೇಳಿದರು.ಅಂಬಾನಿ, ಅದಾನಿಗೆ ಕೊಟ್ಟರೆ ದೇಶದ ಆರ್ಥಿಕತೆಗೆ ನಷ್ಟ ಆಗುವುದಿಲ್ಲವೇ ಪ್ರಧಾನಿ ಮೋದಿಯವರೇ ಎಂದು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿಗಳು,ಬಡವರು ಮಧ್ಯಮ ವರ್ಗದವರು ಸಮಾಧಾನದಿಂದ ಎರಡು ಹೊತ್ತು ಊಟ ಮಾಡಿದರೆ ವಿರೋಧಿಸಬೇಡಿ ಎಂದು ಕಿವಿ ಮಾತು ಹೇಳಿದರು.

 

ಮಧುಗಿರಿಯನ್ನು ಜಿಲ್ಲೆಯನ್ನಾಗಿ ಮಾಡಬೇಕೆಂಬ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರ ಮನವಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಮಧುಗಿರಿ ತಾಲೂಕನ್ನು ಜಿಲ್ಲಾ ಕೇಂದ್ರ ಮಾಡಬೇಕೆಂಬುದು ಕೆ.ಎನ್.ರಾಜಣ್ಣ ಅವರ ಕೋರಿಕೆ, ಇದಕ್ಕೆ ಕೆ.ಷಡಕ್ಷರಿ ಅವರ ವಿರೋಧವಿದೆ. ಅವರು ತಿಪಟೂರನ್ನು ಪ್ರತ್ಯೇಕ ಜಿಲ್ಲೆಯಾಗಿಸಲು ಮನವಿ ಮಾಡಿದ್ದಾರೆ. ಮಧುಗಿರಿಯನ್ನು ಜಿಲ್ಲೆಯಾಗಿಸಲು ಕ್ರಮ ವಹಿಸುವುದಾಗಿ ಭರವಸೆ ನೀಡಿದರು.

ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಹಾಲು ಕುಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್,ಶಾಸಕರುಗಳಾದ ರಂಗನಾಥ್,ಷಡಾಕ್ಷರಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News