‘ಮೈಸೂರು ರಾಜಮನೆತನ’ಕ್ಕೆ ಸರಕಾರದಿಂದ ಕಿರುಕುಳ : ಕುಮಾರಸ್ವಾಮಿ ಆರೋಪ

Update: 2024-10-28 13:18 GMT

ಎಚ್‌.ಡಿ.ಕುಮಾರಸ್ವಾಮಿ(PC:x/@hd_kumaraswamy)

ಬೆಂಗಳೂರು : ‘ಮೈಸೂರು ರಾಜಮನೆತನದ ಬಗ್ಗೆ ಈ ಸರಕಾರ ದ್ವೇಷ ಸಾಧನೆ ಮಾಡುತ್ತಿದೆ. ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ ನೀಡಿರುವ ಆ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ಸೋಮವಾರ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ಕೂಡ್ಲೂರು ಗ್ರಾಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ʼಚಾಮುಂಡೇಶ್ವರಿ ತಾಯಿ ಅರಸು ಮನೆತನದ ದೇವತೆ. ಅವರ ಕುಟುಂಬದ ಆರಾಧ್ಯದೈವ. ಅವರ ಮನೆತನದಿಂದ ದೇವರನ್ನು ದೂರ ಮಾಡುವ ಕೇಡಿನ ಕೆಲಸ ಮಾಡುತ್ತಿದೆ ಈ ಸರಕಾರʼ ಎಂದು ಅಸಮಾಧಾನ ಹೊರಹಾಕಿದರು.

ಚಾಮುಂಡೇಶ್ವರಿ ಪುಣ್ಯಕ್ಷೇತ್ರ ಅರಸರ ಉಸ್ತುವಾರಿಕೆಯಲ್ಲಿಯೇ ಇತ್ತು. ಆ ಕ್ಷೇತ್ರದ ಅಭಿವೃದ್ಧಿಗೆ ಒಡೆಯರ್ ಸಾಕಷ್ಟು ಕೆಲಸ ಮಾಡಿದ್ದಾರೆ. ರಾಜ್ಯದ ಅಭಿವೃದ್ಧಿಗೆ, ನೀರಾವರಿ, ಶಿಕ್ಷಣ, ಕೈಗಾರಿಕಾಭಿವೃದ್ಧಿಗೆ ಮಹಾರಾಜರು ಅನನ್ಯ ಕೊಡುಗೆ ನೀಡಿದ್ದಾರೆ. ಅಂತಹ ಕುಟುಂಬಕ್ಕೆ ಇನ್ನಿಲ್ಲದ ಕಿರುಕುಳ ಕೊಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಚಾಮುಂಡೇಶ್ವರಿ ಕ್ಷೇತ್ರದ ಉಸ್ತುವಾರಿಯನ್ನು ರಾಜಮನೆತನ ಬಹಳ ಉತ್ತಮವಾಗಿ ನಿರ್ವಹಣೆ ಮಾಡುತ್ತಿತ್ತು. ತಾಯಿಯ ಸನ್ನಿಧಾನದಲ್ಲಿ ನಡೆಯುತ್ತಿದ್ದ ಕೈಂಕರ್ಯಗಳನ್ನು ಶ್ರದ್ಧಾ ಭಕ್ತಿಗಳಿಂದ ನೋಡಿಕೊಳ್ಳುತ್ತಿತ್ತು. ಅಂತಹ ಕುಟುಂಬಕ್ಕೆ ಧಕ್ಕಿದ್ದ ದೇವರ ಸೇವೆ ಅವಕಾಶವನ್ನು ಸಿದ್ದರಾಮಯ್ಯ ಸರಕಾರ ಕಿತ್ತುಕೊಂಡಿದೆ ಎಂದು ಅವರು ಆರೋಪ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News