ಕುಮಾರಸ್ವಾಮಿ ಆದಾಯ ತೆರಿಗೆ ಇಲಾಖೆ ಪ್ರತಿನಿಧಿಯೇನೂ ಅಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Update: 2023-10-14 10:19 GMT

ಬೆಂಗಳೂರು: ಐಟಿ ದಾಳಿ ವಿಚಾರವಾಗಿ ನನ್ನ ಹೆಸರು ತಳುಕು ಹಾಕಿ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇನೂ ಅಲ್ಲ. ಆದರೂ ಮಾತನಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

 ಐಟಿ ದಾಳಿ ಸಂಬಂಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಡುತ್ತಿರುವ ಆರೋಪದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಶನಿವಾರ ಉತ್ತರಿಸಿದ್ದು ಹೀಗೆ:

“ಯಾರು ಏನು ಆರೋಪ ಮಾಡುತ್ತಾರೋ ಮಾಡಲಿ. ಆದಾಯ ಇಲಾಖೆ ಅಧಿಕಾರಿಗಳ ದಾಳಿ, ತನಿಖೆ ಮುಗಿದ ನಂತರ ತಮ್ಮ ಹೇಳಿಕೆಯನ್ನು ಪ್ರಕಟಿಸಲಿ. ನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ. ನನ್ನ ವಿರುದ್ಧ ಆರೋಪ ಮಾಡುತ್ತಿರುವ ಕುಮಾರಸ್ವಾಮಿ ಆಗಲಿ, ಬಿಜೆಪಿ ನಾಯಕರಾಗಲಿ ಆದಾಯ ಇಲಾಖೆ ಪ್ರತಿನಿಧಿಗಳೇನೂ ಅಲ್ಲ. ನಾನು ತಿಹಾರ್ ಜೈಲಿಗೆ ಹೋಗುತ್ತೇನೆ ಎಂದು ಕುಮಾರಸ್ವಾಮಿ ಅವರು ಈಗಾಗಲೇ ಹೇಳಿದ್ದಾರೆ. ಆ ಮೂಲಕ ತಾವು ಏನು ಮಾಡಲು ಹೊರಟಿದ್ದೇನೆ ಎಂಬುದನ್ನು ಹೇಳಿದ್ದಾರೆ” ಎಂದರು.

ಇನ್ನು ಮುಂದೆ ರಾಜ್ಯದಲ್ಲಿ ನಡೆಯಲಿರುವ ಐಟಿ ದಾಳಿಗಳು ಕುಮಾರಸ್ವಾಮಿ ಹಾಗೂ ಬಿಜೆಪಿ ಪ್ರೇರಿತ ದಾಳಿಯಾಗಲಿವೆಯೇ ಎಂದು ಕೇಳಿದಾಗ, “ಈ ವಿಚಾರವಾಗಿ ನಾನು ಈಗ ಏನನ್ನೂ ಹೇಳುವುದಿಲ್ಲ. ಈ ಹಿಂದೆ ಯಡಿಯೂರಪ್ಪ ಅವರ ಕಾಲದಲ್ಲಿ ಏನಾಯ್ತು? ಆಗ ಅವರಿಗೆ ಏನು ಸಿಕ್ಕಿದೆ? ಎಲ್ಲವೂ ದಾಖಲೆಗಳಲ್ಲಿ ಇವೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಖಲೆ ಬಿಡುಗಡೆ ಮಾಡಿದ ನಂತರ ಮಾತನಾಡೋಣ” ಎಂದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News