ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಇಲ್ಲಿನ ಗಂಗೇನಹಳ್ಳಿಯ ಬಡಾವಣೆಯ ಜಮೀನು ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಲೋಕಾಯುಕ್ತ ಅಧಿಕಾರಿಗಳ ಮುಂದೆ ಶುಕ್ರವಾರ ವಿಚಾರಣೆಗೆ ಹಾಜರಾಗಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಬೆಂಗಳೂರಿನ ಮಠದಹಳ್ಳಿಯ ಗಂಗೇನಹಳ್ಳಿ ಬಡಾವಣೆಯಲ್ಲಿನ 7/1ಬಿ, ಸಿ ಹಾಗೂ ಡಿ ಸರ್ವೆ ನಂಬರ್‍ನಲ್ಲಿ 1.11 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿರುವುದಾಗಿ ಆರೋಪಿಸಿದ್ದರು. ಈ ಸಂಬಂಧ 9 ವರ್ಷಗಳ ಹಿಂದೆ ಲೋಕಾಯುಕ್ತ ಪೊಲೀಸರು ದಾಖಲಿಸಿಕೊಂಡಿದ್ದ ಪ್ರಕರಣವನ್ನು ಚುರುಕುಗೊಳಿಸಲಾಗಿದೆ.
ಈ ಹಿನ್ನೆಲೆ ಪ್ರಕರಣದ ಕಡತವನ್ನು ಕೈಗೆತ್ತಿಕೊಂಡ ಲೋಕಾಯುಕ್ತ ಪೊಲೀಸರು ಇತ್ತೀಚೆಗೆ ಬಿ.ಎಸ್.ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿದ್ದರು. ಇದೀಗ ಎಚ್.ಡಿ.ಕುಮಾರಸ್ವಾಮಿ ಅವರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ನಾನು ಸ್ವಇಚ್ಛೆಯಿಂದ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿದ್ದೇನೆ. ನನಗೆ ಯಾವ ನೋಟಿಸ್ ಕೂಡ ಬಂದಿಲ್ಲ" ಎಂದು ಹೇಳಿದ್ದಾರೆ.