ಬೆಳಗಾವಿ ವಿಚಾರದಲ್ಲಿ ಹೇಳಿಕೆ ನೀಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಕರೆದು ಸಿಎಂ ಬುದ್ದಿ ಹೇಳಲಿ: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ‘ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿಯು ಮಹಾರಾಷ್ಟ್ರಕ್ಕೆ ಸೇರಿತ್ತು’ ಎಂಬ ಹೇಳಿಕೆ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕರೆದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುದ್ದಿ ಹೇಳಲಿ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ಸೋಮವಾರ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇದು ಎಂದೋ ಮುಗಿದು ಹೋಗಿರುವ ವಿಷಯ. ಅದನ್ನು ಮತ್ತೆ ಮತ್ತೆ ಕೆಣಕುವ ಅಗತ್ಯ ಏನಿದೆ? ಬಹುಶಃ ಅವರಿಗೆ ಮಹಾರಾಷ್ಟ್ರದ ವ್ಯಾಮೋಹದಿಂದ ಹೊರಬರಲು ಸಾಧ್ಯವಿಲ್ಲ. ನೆರೆ ರಾಜ್ಯದ ಮೇಲೆ ಅವರಿಗೆ ವ್ಯಾಮೋಹ ಜಾಸ್ತಿ ಅಂತ ಕಾಣುತ್ತದೆ ಎಂದು ಕಿಡಿಕಾರಿದರು.
ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಸಚಿವರೇ ಇಂತಹ ಅನಗತ್ಯ, ವಿವಾದಾಸ್ಪದ ವಿಷಯಗಳನ್ನು ಮಾತಾಡಿದರೆ ನೀವೇ ನೀರು ಎರೆದ ಹಾಗೆ ಅಲ್ಲವಾ?. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಸಿಎಂ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಯವರೇ ಹೇಳಿದ್ದಾರೆ ಎಂದು ಟೀಕಿಸಿದರು.