ಅನರ್ಹರಿಗೆ ಜಮೀನು ಮಂಜೂರು ಪ್ರಕರಣ: ಮಾಲೂರು ಶಾಸಕನ ವಿರುದ್ಧ ತನಿಖೆಗೆ ಆದೇಶ

Update: 2023-10-01 12:11 GMT

ಬೆಂಗಳೂರು, ಅ.1: ಸರಕಾರಿ ಭೂಮಿಯನ್ನು ಮೃತರೂ ಸೇರಿದಂತೆ ಅನರ್ಹರಿಗೆ ಮಂಜೂರು ಮಾಡಿದ್ದ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ವಿರುದ್ಧ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ.

2019ರಲ್ಲಿ ಮಾಲೂರು ತಾಲೂಕು ಭೂ ಮಂಜೂರಾತಿ ಸಮಿತಿಗೆ ಶಾಸಕ ನಂಜೇಗೌಡ ಅಧ್ಯಕ್ಷರಾಗಿದ್ದರು. ಆ ವೇಳೆ, ಅವರು ಕೋಟ್ಯಂತರ ರೂ. ಮೌಲ್ಯದ ಸುಮಾರು 80 ಎಕರೆ ಸರಕಾರಿ ಭೂಮಿಯನ್ನು ಮರಣ ಹೊಂದಿದ್ದವರೂ ಸೇರಿದಂತೆ ಅನರ್ಹರಿಗೆ ಮಂಜೂರು ಮಾಡಿದ್ದಾರೆಂದು ಆರೋಪಿಸಲಾಗಿತ್ತು. ಕೋಲಾರದ ಕೆ.ಸಿ.ರಾಜಣ್ಣ ಎಂಬುವವರು ಶಾಸಕರ ವಿರುದ್ಧ ಮಾಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತಮ್ಮ ವಿರುದ್ಧದ ಆರೋಪ ಸುಳ್ಳು ಎಂದಿದ್ದ ಶಾಸಕ, ಪ್ರಕರಣವನ್ನು ರದ್ದುಗೊಳಿಸಬೇಕೆಂದು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. ತನಿಖೆಗೆ ಅನುಮತಿ ನೀಡಿದೆ.

2004ರಲ್ಲಿ ಮೃತಪಟ್ಟಿದ್ದ ನಾರಾಯಣಪ್ಪ ಎಂಬುವರಿಗೆ 2019ರಲ್ಲಿ 1.39 ಎಕರೆ ಭೂಮಿ ಮಂಜೂರು ಮಾಡಲಾಗಿದೆ. ಅಲ್ಲದೆ, ಕಳೆದ 50 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದಾರೆ ಎಂಬ ನೆಪವೊಡ್ಡಿ 40 ವರ್ಷದ ಆನಂದಗೌಡ ಎಂಬ ವ್ಯಕ್ತಿಗೆ ಜಮೀನು ಮಂಜೂರು ಮಾಡಲಾಗಿದೆ ಎಂದು ಕೆ.ಸಿ.ರಾಜಣ್ಣ ದೂರಿನಲ್ಲಿ ವಿವರಿಸಿದ್ದರು.

ಇಂತಹ ಹಲವಾರು ಅಂಶಗಳನ್ನು ಪರಿಶೀಲಿಸಿದರೆ ಸಮಿತಿಯ ಅಧ್ಯಕ್ಷರಾಗಿದ್ದ ಶಾಸಕ ನಂಜೇಗೌಡ ಸರಕಾರಿ ಭೂಮಿಯನ್ನು ಕಬಳಿಸಿದ್ದಾರೆ. ಜೊತೆಗೆ ಕಚೇರಿಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ ಎಂದು ನ್ಯಾಯಪೀಠ ಆದೇಶದಲ್ಲಿ ಉಲ್ಲೇಖಿಸಿದೆ.

ಪ್ರಕರಣದಲ್ಲಿ ಈಗಾಗಲೇ ತಹಶೀಲ್ದಾರ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಇದೀಗ, ವಿಶೇಷ ನ್ಯಾಯಾಲಯದ ಆದೇಶದಂತೆ ಶಾಸಕರ ವಿರುದ್ಧ ಮತ್ತೊಂದು ಎಫ್‍ಐಆರ್ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News