ವಿಧಾನ ಪರಿಷತ್ ಚುನಾವಣೆ : ಬಿಜೆಪಿ ಪ್ರಭಾರಿಗಳ ನೇಮಕ
ಬೆಂಗಳೂರು : ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಪ್ರಭಾರಿ ಹಾಗೂ ಸಹ ಪ್ರಭಾರಿಗಳನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.
ಈಶಾನ್ಯ ಪದವೀಧರರ ಕ್ಷೇತ್ರ(ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ)ಕ್ಕೆ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ನೈಋತ್ಯ ಪದವೀಧರರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ(ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆ, ಹೊನ್ನಾಳಿ, ಚನ್ನಗಿರಿ ವಿಧಾನಸಭಾ ಕ್ಷೇತ್ರಗಳು)ಕ್ಕೆ ಶಾಸಕ ವಿ.ಸುನೀಲ್ ಕುಮಾರ್ ರನ್ನು ಪ್ರಭಾರಿ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಡಿ.ಎಸ್.ಅರುಣ್ ಅವರನ್ನು ಸಹ ಪ್ರಭಾರಿಯಾಗಿ ನೇಮಕ ಮಾಡಲಾಗಿದೆ.
ಬೆಂಗಳೂರು ಪದವೀಧರ ಕ್ಷೇತ್ರ(ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ)ಕ್ಕೆ ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥನಾರಾಯಣ, ಆಗ್ನೇಯ ಶಿಕ್ಷಕರ ಕ್ಷೇತ್ರ(ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳು, ಹರಿಹರ, ಜಗಳೂರು, ದಾವಣಗೆರೆ ವಿಧಾನಸಭಾ ಕ್ಷೇತ್ರ)ಕ್ಕೆ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ರನ್ನು ಪ್ರಭಾರಿಯಾಗಿ ನೇಮಕ ಮಾಡಲಾಗಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರ(ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳು)ಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ ಅವರನ್ನು ಪ್ರಭಾರಿಯಾಗಿ ನೇಮಕ ಮಾಡಲಾಗಿದೆ.