ವಿಧಾನ ಪರಿಷತ್ ಚುನಾವಣೆ | ಅರ್ಹ ಮತದಾರರಿಗೆ ಸಾಂದರ್ಭಿಕ ರಜೆ ಘೋಷಣೆ

Update: 2024-06-01 11:47 GMT

ಬೆಂಗಳೂರು: ವಿಧಾನಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯನ್ನು ಜೂ.3ರಂದು ನಡೆಸಲು ಘೋಷಿಸಲಾಗಿದ್ದು, ಅರ್ಹ ಮತದಾರರಿಗೆ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದು ಸರಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ವಿಧಾನಪರಿಷತ್ ಮತ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸರಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರಕಾರದ ಕಾರ್ಖಾನೆಗಳು.

ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ, ಎಲ್ಲ ವ್ಯಾವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರೆ ಎಸ್ಟಾಬ್ಲಿಷ್ಮೆಂಟ್ ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಪದವೀಧರರು ಹಾಗೂ ಶಿಕ್ಷಕರು ಮತ ಚಲಾಯಿಸಲು ಅನುಕೂಲವಾಗುವಂತೆ ಜೂ.3 ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ.

ಕಂಟ್ರೋಲ್ ರೂಂ ಸ್ಥಾಪನೆ: ಬೆಂಗಳೂರು ಪದವೀಧರರ ಕ್ಷೇತ್ರದ ವ್ಯಾಪ್ತಿಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳು ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ (ಹರಿಹರ, ದಾವಣಗೆರೆ ಮತ್ತು ಜಗಳೂರು ತಾಲ್ಲೂಕುಗಳು ಮಾತ್ರ) ಜಿಲ್ಲೆಗಳಲ್ಲಿ ಮತದಾರರಿಗೆ ಅನುಕೂಲವಾಗುವಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿ, ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗಳಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ.

ಚುನಾವಣಾಧಿಕಾರಿಗಳ ಕಚೇರಿ ಸಹಾಯವಾಣಿ ಸಂಖ್ಯೆ: 080-22109665, ಬೆಂಗಳೂರು ಪದವೀಧರರ ಕ್ಷೇತ್ರ ಸಹಾಯವಾಣಿ ಸಂಖ್ಯೆ: ಬೆಂಗಳೂರು ನಗರ ಜಿಲ್ಲೆ- 080 2221 1106, ಬಿಬಿಎಂಪಿ ಪೂರ್ವ(ಉತ್ತರ)- 94806 85702, ಬಿಬಿಎಂಪಿ ದಕ್ಷಿಣ- 080 2656 6362, ಬಿಬಿಎಂಪಿ ಕೇಂದ್ರ- 1950, ಬೆಂಗಳೂರು ಗ್ರಾಮಾಂತರ- 080 29002025, ರಾಮನಗರ- 080 2727 5946.

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ ಸಹಾಯವಾಣಿ ಸಂಖ್ಯೆ: ದಾವಣಗೆರೆ-1800 4250380, ಚಿತ್ರದುರ್ಗ-08194-1950, ತುಮಕೂರು-08162-273595, ಚಿಕ್ಕಬಳ್ಳಾಪುರ- 08156-277071, ಕೋಲಾರ- 08152-243507 ಗೆ ಸಾರ್ವಜನಿಕರು ತಮ್ಮ ದೂರುಗಳನ್ನು ನೀಡಬಹುದಾಗಿದೆ.

ಜೂ.1 ಅಪರಾಹ್ನ 4 ಗಂಟೆಯಿಂದ ಚುನಾವಣಾ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು, ನಂತರದಲ್ಲಿ ಯಾವುದೇ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಬಹಿರಂಗ ಪ್ರಚಾರ ಕೈಗೊಳ್ಳುವುದನ್ನು ನಿಷೇಧಿಸಲಾಗಿದೆ ಹಾಗೂ ಮತದಾನ ಪ್ರಕ್ರಿಯೆ ಮಕ್ತಾಯಗೊಳ್ಳುವವರೆಗೂ ಚುನಾವಣಾ ಕ್ಷೇತ್ರ ವ್ಯಾಪ್ತಿಯಲ್ಲಿ ಶುಷ್ಕ ದಿನ (ಡ್ರೈ ಡೇ)ವನ್ನು ಘೋಷಿಸಲಾಗಿದೆ.

ಈ ಅವಧಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದ್ದು, ಎಲ್ಲ ಮದ್ಯದ ಅಂಗಡಿಗಳು ಮುಚ್ಚಲ್ಪಡುತ್ತವೆ ಎಂದು ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News