ನೀಟ್ ಬದಲು ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಅವಕಾಶ ನೀಡಲಿ : ಡಿಸಿಎಂ ಡಿ.ಕೆ.ಶಿವಕುಮಾರ್

Update: 2024-06-15 13:35 GMT

Photo : x/@DKShivakumar

ಬೆಂಗಳೂರು: “ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಅವಕಾಶ ಮಾಡಿಕೊಡುವುದು ಉತ್ತಮ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ನೀಟ್ ಅಕ್ರಮ ಗಂಭೀರ ಅಪರಾಧವಾಗಿದ್ದು, ಇದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿದೆ. ಹೀಗಾಗಿ ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಅವಕಾಶ ನೀಡಲಿ ಎಂದು ಕೇಂದ್ರವನ್ನು ಮನವಿ ಮಾಡುತ್ತೇನೆ. ರಾಜ್ಯಗಳು ನಡೆಸುವ ಪರೀಕ್ಷೆಯಲ್ಲಿ ದೇಶದ ಎಲ್ಲಾ ರಾಜ್ಯಗಳ ವಿದ್ಯಾರ್ಥಿಗಳು ಭಾಗವಹಿಸಲಿ. ಅವರಿಗಾಗಿ ಮೀಸಲಾತಿಯನ್ನೂ ನೀಡಬಹುದು" ಎಂದು ಹೇಳಿದರು.

"ಈ ಪರೀಕ್ಷೆಯಿಂದ ನಮ್ಮ ರಾಜ್ಯದ ಮಕ್ಕಳಿಗೆ ದೊಡ್ಡ ಅನ್ಯಾಯವಾಗುತ್ತಿವೆ. ನಾವು ಕಾಲೇಜುಗಳನ್ನು ಕಟ್ಟಿದ್ದೇವೆ. ನೀಟ್ ಪರೀಕ್ಷೆಯಿಂದ ಉತ್ತರ ಭಾರತದ ರಾಜ್ಯಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿದೆ. ಹೀಗಾಗಿ ನಮ್ಮ ಮಕ್ಕಳಿಗೆ ತಾರತಮ್ಯವಾಗುತ್ತಿದೆ. ನಮ್ಮ ಮಕ್ಕಳಿಗೆ ನ್ಯಾಯ ಒದಗಿಸಲು ಒಗ್ಗಟ್ಟಿನಿಂದ ಹೋರಾಟ ಮಾಡಬೇಕು. ಇನ್ನು ನೀಟ್ ಅಕ್ರಮದ ಬಗ್ಗೆ ನಾನು ವೈದ್ಯಕೀಯ ಶಿಕ್ಷಣ ಸಚಿವರ ಜತೆ ಚರ್ಚೆ ಮಾಡಿದ್ದೇನೆ. ಈ ವಿಚಾರವಾಗಿ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಈ ವಿಚಾರವಾಗಿ ಉನ್ನತ ಮಟ್ಟದ ತನಿಖೆಯಾಗಿ ಶಿಸ್ತು ಕ್ರಮ ಕೈಗೊಳ್ಳಬೇಕು” ಎಂದರು.

ಪಾಲಿಕೆ ಚುನಾವಣೆಗೆ ಪಕ್ಷದ ಸಂಘಟನೆ ಬಗ್ಗೆ ಚರ್ಚೆ:

ಬೆಂಗಳೂರು ನಗರದ ಬ್ಲಾಕ್ ನಾಯಕರ ಜತೆ ಪಾಲಿಕೆ ಚುನಾವಣೆ ಸಿದ್ಧತೆ ಬಗ್ಗೆ ಸಭೆ ಮಾಡಿದ್ದೇವೆ. ಖಾಲಿ ಇರುವ ಪದಾಧಿಕಾರಿಗಳ ಹುದ್ದೆ ತುಂಬಲು, ನಿಷ್ಕ್ರಿಯರಾಗಿರುವ ಪದಾಧಿಕಾರಿಗಳ ಜಾಗಕ್ಕೆ ಬೇರೆಯವರನ್ನು ನೇಮಿಸುವಂತೆ ಸೂಚನೆ ನೀಡಿದ್ದು, ಒಂದು ತಿಂಗಳ ಕಾಲಾವಕಾಶ ನೀಡಿದ್ದೇವೆ. ಪಾಲಿಕೆ ಚುನಾವಣೆ ಶೀಘ್ರವೇ ಪ್ರಕಟವಾಗಲಿದ್ದು, ಅಷ್ಟರ ಹೊತ್ತಿಗೆ ಪಕ್ಷವನ್ನು ಸಜ್ಜುಗೊಳಿಸಬೇಕು. ಬೆಂಗಳೂರು ನಗರದಲ್ಲಿ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ನಾವು ಸೋತಿರಬಹುದು, ಆದರೆ ಪಾಲಿಕೆ ಚುನಾವಣೆಯಲ್ಲಿ ನಾವು ಚೇತರಿಸಿಕೊಳ್ಳುವ ವಿಶ್ವಾಸ ನನಗಿದೆ ಎಂದರು.

ಯಡಿಯೂರಪ್ಪ ಅವರ ಪ್ರಕರಣದಲ್ಲಿ ದ್ವೇಷ ರಾಜಕಾರಣ ನಡೆಯುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಇದು ಕಾನೂನಿನ ಪ್ರಕ್ರಿಯೆ. ಬಿಜೆಪಿ ನಾಯಕರು ನಮ್ಮ ಹೆಸರು ಯಾಕೆ ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿದಿಲ್ಲ. ಇದರಲ್ಲಿ ನಮ್ಮ ಹಸ್ತಕ್ಷೇಪವಿಲ್ಲ ಎಂದು ಅವರಿಗೂ ಗೊತ್ತಿದೆ. ಆದರೂ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಕಾನೂನು ಪ್ರಕ್ರಿಯೆ ನಡೆಯುತ್ತಿದ್ದು ಈ ವಿಚಾರವಾಗಿ ನಾವು ಮಾತನಾಡುವುದು ಸರಿಯಲ್ಲ” ಎಂದರು.

ಪ್ರತಿದಿನ ಕುಡಿಯುವ ನೀರಿನ ಪರೀಕ್ಷೆ ಕಡ್ಡಾಯ :

 “ಪ್ರತಿದಿನ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಪರೀಕ್ಷೆ ನಡೆಸಿ ಜನರಿಗೆ ನೀಡಲಾಗುತ್ತಿದೆ. ಕಾವೇರಿ, ಬೋರ್ ವೆಲ್ ನೀರನ್ನು ಸಹ ಪರೀಕ್ಷೆಗೆ ಒಳಪಡಿಸುತ್ತಿದ್ದು. ದಿನದ ವರದಿ ನನಗೂ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದು. ಪ್ರತಿದಿನವೂ ವರದಿ ನೀಡುತ್ತಿದ್ದಾರೆ" ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News