ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟು ಕೊಡಲು ಬಿಎಸ್ ಯಡಿಯೂರಪ್ಪ ಇಂಗಿತ
ಬೆಂಗಳೂರು: ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟಕ್ಕೆ ಕಗ್ಗಂಟಾಗಿದೆ. ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸ್ಪರ್ಧೆಯಿಂದ ಹಿಂದೆ ಸರಿಯಲು ಒಪ್ಪದಿರುವುದು ಮೈತ್ರಿ ಮುಖಂಡರಿಗೆ ತೀವ್ರ ತಲೆನೋವು ತಂದಿದೆ.
ಈ ಮಧ್ಯೆ ನಗರದಲ್ಲಿ ಮಾತನಾಡಿದ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ‘ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪರ ನಿಲ್ಲುವುದು ಬೇಡ. ಈ ಉಪಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಡೋಣ’ ಎಂದು ಕಾರ್ಯಕರ್ತರು ಹಾಗೂ ಮುಖಂಡರಿಗೆ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.
ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಸೇರಿ ಮೂರು ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯನ್ನು ಬಿಜೆಪಿ ಮತ್ತು ಜೆಡಿಎಸ್ ಪ್ರತಿಷ್ಠೆಯಾಗಿ ತೆಗೆದುಕೊಂಡು ಹೋರಾಟ ಮಾಡೋಣ, ಒಗ್ಗಟ್ಟಿನಿಂದ ಕೆಲಸ ಮಾಡಿ ಎಲ್ಲ ಕ್ಷೇತ್ರಗಳನ್ನೂ ನಮ್ಮದಾಗಿಸಿಕೊಳ್ಳೋಣ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಮಧ್ಯೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು, ಚನ್ನಪಟ್ಟಣದಿಂದ ಯೋಗೇಶ್ವರ್ ಅವರಿಗೆ ಟಿಕೆಟ್ ನೀಡಬೇಕು, ಜೆಡಿಎಸ್‍ಗೆ ಬಿಟ್ಟುಕೊಡುವುದು ಬೇಡ ಎಂದು ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾಗೆ ಮನವಿ ಮಾಡಿದ್ದರು.
ಇದೀಗ ಚುನಾವಣಾ ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆ ಯಡಿಯೂರಪ್ಪ, ‘ಆರ್.ಅಶೋಕ್ ಮತ್ತು ಬಸವರಾಜ ಬೊಮ್ಮಾಯಿ ಅವರನ್ನು ಪ್ರತ್ಯೇಕವಾಗಿ ಕರೆಸಿಕೊಂಡು, ‘ಬಿಜೆಪಿ ಮತ್ತು ಜೆಡಿಎಸ್ ಒಂದುಗೂಡಬೇಕು. ಹೀಗಾಗಿ ಜೆಡಿಎಸ್ ಪ್ರತಿನಿಧಿಸುತ್ತಿದ್ದ ಚನ್ನಪಟ್ಟಣ ಕ್ಷೇತ್ರದಲ್ಲಿ ನಮ್ಮ ಹಸ್ತಕ್ಷೇಪ ಬೇಡ’ ಎಂದು ಸಲಹೆ ನೀಡಿದ್ದಾರೆಂದು ಹೇಳಲಾಗಿದೆ.
ಬಿಎಸ್‍ವೈ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ‘ಯಡಿಯೂರಪ್ಪ ನಮ್ಮ ಹಿರಿಯ ನಾಯಕರು, ಸಹಜವಾಗಿ ಭೇಟಿ ಮಾಡುತ್ತೇವೆ. ಉಪ ಚುನಾವಣೆ ಬಗ್ಗೆ ಬಂದು ಮಾತನಾಡು ಎಂದಿದ್ದರು, ಮಾತಾಡಿದ್ದೇನೆ, ಶಿಗ್ಗಾಂವಿ ಕ್ಷೇತ್ರದ ಬಗ್ಗೆಯೂ ಚರ್ಚೆ ನಡೆಯಿತು ಎಂದರು.
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಮ್ಮ ಕುಟುಂಬದಿಂದ ಅಭ್ಯರ್ಥಿ ಹಾಕುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ, ಎನ್‍ಡಿಎ ಕೂಟವೇ ನನ್ನ ಕುಟುಂಬ, ಮೈತ್ರಿಕೂಟದಿಂದಲೇ ಒಬ್ಬರು ಅಭ್ಯರ್ಥಿ ಆಗುತ್ತಾರೆ. ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಸೇರಿ ನಿರ್ಧಾರ ಮಾಡುತ್ತೇವೆ. ಚನ್ನಪಟ್ಟಣದಲ್ಲಿ ಎನ್‍ಡಿಎ ಅಭ್ಯರ್ಥಿ ಗೆಲ್ಲಬೇಕು ಅಷ್ಟೇ ನನ್ನ ಅಭಿಪ್ರಾಯ’
-ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ