ಸ್ಥಳೀಯ ಮಟ್ಟದಲ್ಲಿ ಬಿಜೆಪಿ- ಜೆಡಿಎಸ್‌ ಕಾರ್ಯಕರ್ತರ ಪಕ್ಷ ಸೇರ್ಪಡೆಗೆ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

Update: 2024-03-15 09:11 GMT

ಬೆಂಗಳೂರು: “ಎರಡೂ ಪಕ್ಷಗಳ ಸಾಕಷ್ಟು ಜನ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರಲು ಉತ್ಸುಕರಾಗಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಪಕ್ಷ ಸೇರ್ಪಡೆಗೆ ಸೂಚನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸ ಮತ್ತು ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು.

“ಸುಮಾರು 5- 6 ಕ್ಷೇತ್ರಗಳಲ್ಲಿ ನಮಗೂ ಮತ್ತು ಜೆಡಿಎಸ್‌ ಪಕ್ಷಕ್ಕೂ ನೇರಾ- ನೇರ ಸ್ಪರ್ಧೆ ಇತ್ತು. ಆದರೆ ಈಗ ದಳ ಎಲ್ಲಿದೆ? ಎರಡೂ ಪಕ್ಷಗಳ ನಾಯಕರುಗಳು ನಮ್ಮ ವಿರುದ್ಧ ಹೋರಾಟ ಮಾಡಿದವರು. ಅವರೂ ಸಹ ಮುಂದಿನ ರಾಜಕೀಯ ಭವಿಷ್ಯವನ್ನು ನೋಡುತ್ತಾರಲ್ಲವೇ?" ಎಂದರು.

"ದೇವೆಗೌಡ ಮತ್ತು ಕುಮಾರಸ್ವಾಮಿ ಅವರ ಕುಟುಂಬವೇ ಬಿಜೆಪಿ ಸೇರುತ್ತಿದೆ. ಹೀಗಾದರೆ ನಮ್ಮ ಗತಿ ಏನು ಎಂದು ಜೆಡಿಎಸ್‌ ಪಕ್ಷ ಕಾರ್ಯಕರ್ತರು ನಮ್ಮ ಪಕ್ಷದ ನಾಯಕರನ್ನು ಸಂಪರ್ಕ ಮಾಡುತ್ತಿದ್ದಾರೆ. ನಾನು ಸಹ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ನಾಯಕ. ನಮ್ಮ ಚುನಾವಣಾ ಅಭ್ಯರ್ಥಿಯ ಘೋಷಣೆಯೂ ಆಗಿದೆ. ನಾವು ಸಹ ತಯಾರಿ ಮಾಡಿಕೊಳ್ಳಬೇಕಲ್ಲವೇ? ಮುಂದೇನು ಮಾಡುವುದು ನಾವು ಸಹ ಚರ್ಚೆ ಮಾಡುತ್ತಿದ್ದೇವೆ” ಎಂದು ವ್ಯಂಗ್ಯವಾಡಿದರು.

ಡಿ.ಕೆ.ಸುರೇಶ್ ಅವರಿಗೆ ನಾವು ತಕ್ಕಪಾಠ ಕಲಿಸುತ್ತೇವೆ ಎಂದು ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ “ಮೊದಲು ಅವರ ಪಕ್ಷದ ಪರಿಸ್ಥಿತಿ ಬಗ್ಗೆ ಮಾತನಾಡಲಿ. ದಳ ಇದೆಯೋ? ಇಲ್ಲವೋ? ಎಂಬುದರ ಬಗ್ಗೆ ಮೊದಲು ಹೇಳಲಿ. ಆನಂತರ ಪ್ರಬಲ ಅಭ್ಯರ್ಥಿ ಬಗ್ಗೆ ಮಾತನಾಡಲಿ” ಎಂದರು.

ನ್ಯಾಯಾಲಯದ ಆದೇಶದಂತೆ ನಾವು ನಡೆದುಕೊಳ್ಳಬೇಕು

 “ಜಾಗ ವಿವಾದದ ಪ್ರಕರಣ ಸುಪ್ರೀಂ ಕೋರ್ಟಿನಲ್ಲಿತ್ತು. ಇತ್ತೀಚಿನ ಬೆಳವಣಿಗೆಯ ಬಗ್ಗೆ ನನಗೂ ಹೆಚ್ಚಿನ ಮಾಹಿತಿ ಇಲ್ಲ. ಕುಮಾರಸ್ವಾಮಿ ಅವರು ಸಿಎಂ ಆಗಿದ್ದ ವೇಳೆ ತೀರ್ಮಾನವಾಗಿದ್ದ ವಿಚಾರವಿದು. ನ್ಯಾಯಲಯದ ಆದೇಶದಂತೆ ನಾವು ನಡೆದುಕೊಳ್ಳಬೇಕು. ಅಧಿಕಾರಿಗಳು ಖುದ್ದಾಗಿ ನ್ಯಾಯಲಯಕ್ಕೆ ಹಾಜರಾಗಬೇಕು ಎಂದು ಕೋರ್ಟ್ ಆದೇಶ ನೀಡಿತ್ತು. ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ನಿಮಗೆ ಉತ್ತರಿಸುತ್ತೇನೆ” ಎಂದು ತಿಳಿಸಿದರು.

ಸಿಎಎಯನ್ನು ಕರ್ನಾಟಕದಲ್ಲಿ ಜಾರಿಗೊಳಿಸುತ್ತೀರಾ ಎಂದು ಕೇಳಿದಾಗ “ಇದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಸಿಎಂ ಮತ್ತು ಇತರೆ ನಾಯಕರ ಬಳಿ ಚರ್ಚೆ ಮಾಡಿದ ನಂತರ ಮಾತನಾಡುತ್ತೇನೆ” ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News