ಲೋಕಸಭಾ ಚುನಾವಣೆ | 2ನೇ ಹಂತದ 14 ಕ್ಷೇತ್ರಗಳಿಗೆ ನಾಳೆ(ಎ.12) ಅಧಿಸೂಚನೆ ಪ್ರಕಟ

Update: 2024-04-11 14:19 GMT

ಬೆಂಗಳೂರು : ಮೊದಲ ಹಂತದ 14 ಕ್ಷೇತ್ರಗಳಲ್ಲಿ ಘಟಾನುಘಟಿ ಅಭ್ಯರ್ಥಿಗಳ ಪರ ರಾಜಕೀಯ ಮುಖಂಡರು ಮತದಾರರ ಮನಗೆಲ್ಲಲು ಬೆವರು ಹರಿಸುತ್ತಿದ್ದಾರೆ. ಈ ಮಧ್ಯೆ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ(ಎ.12) ಅಧಿಸೂಚನೆ ಹೊರಬೀಳಲಿದ್ದು, ನಾಳೆಯಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ನಾಮಪತ್ರ ಸಲ್ಲಿಸಲು ಎ.19 ಕಡೆಯ ದಿನವಾಗಿದ್ದು, ನಾಮಪತ್ರ ಪರಿಶೀಲನೆ ಎ.20ರಂದು ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಎ. 22ರಂದು ಕೊನೆಯ ದಿನವಾಗಿದೆ. ಇದೇ ವೇಳೆ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಯಲಿದ್ದು, ಮೇ 7ರಂದು ಮತದಾನ ನಡೆಯಲಿದೆ.

ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ(ಎಸ್‍ಸಿ ಮೀಸಲು ಕ್ಷೇತ್ರ), ಕಲಬುರಗಿ(ಎಸ್‍ಸಿ), ರಾಯಚೂರು(ಎಸ್‍ಟಿ), ಬೀದರ್, ಕೊಪ್ಪಳ, ಬಳ್ಳಾರಿ(ಎಸ್‍ಟಿ), ಹಾವೇರಿ, ಧಾರವಾಡ, ಉತ್ತರಕನ್ನಡ ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಈ ಮೇಲ್ಕಂಡ ಕ್ಷೇತ್ರಗಳಲ್ಲಿ ಒಟ್ಟು 2,88,08,182 ಮತದಾರರಿದ್ದಾರೆ. ಆ ಪೈಕಿ 1,44,17,530-ಪುರುಷರು, 1,43,87,585-ಮಹಿಳೆಯರು, 3,067-ತೃತೀಯ ಲಿಂಗಿಗಳು, 11,160-ಸೇವಾ ಮತದಾರರು, 5,99,444 -ಯುವ ಮತದಾರರು, 2,76,042-ದಿವ್ಯಾಂಗ ಮತದಾರರು, 3,40,856 ಮಂದಿ ಎಂಬತ್ತೈದು ವರ್ಷ ಮೇಲ್ಪಟ್ಟವರು ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ.

ಮೇ 7ರಂದು ನಡೆಯಲಿರುವ ಚುನಾವಣಾ ಅಖಾಡದಲ್ಲಿ ರಾಜಕೀಯ ಘಟಾನುಘಟಿ ನಾಯಕರಿದ್ದಾರೆ. ರಾಜ್ಯದ ಗಮನ ಸೆಳೆದಿರುವ ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ, ಬಿ.ವೈ. ವಿಜಯೇಂದ್ರ, ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ನಟ ಶಿವರಾಜ್‍ಕುಮಾರ್ ಪತ್ನಿ ಗೀತಾ ಶಿವರಾಜ್‍ಕುಮಾರ್ ಕಣದಲ್ಲಿದ್ದಾರೆ.

ದಾವಣಗೆರೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್, ಗಾಯತ್ರಿ ಸಿದ್ದೇಶ್ವರ್, ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮಲು, ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬೀದರ್ ನಲ್ಲಿ ಕೇಂದ್ರ ಸಚಿವ ಭಗವಂತ್ ಖೂಬಾ ಅವರ ವಿರುದ್ಧ ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಕಣದಲ್ಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರ ಅಳಿಯ ರಾಧಾಕೃಷ್ಣ ಕಲಬುರಗಿ ಕ್ಷೇತ್ರದಲ್ಲಿ, ಸಚಿವರಾದ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕ ಜಾರಕಿಹೊಳಿ ಚಿಕ್ಕೋಡಿಯಿಂದ, ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಬೆಳಗಾವಿಯಿಂದ‌, ಪಕ್ಷೇತರ ಅಭ್ಯರ್ಥಿಯಾಗಿ ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಅಖಾಡಕ್ಕಳಿದಿದ್ದು, ತೀವ್ರ ಕುತೂಹಲ ಸೃಷ್ಟಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News