ಲೋಕಾಯುಕ್ತ ನ್ಯಾ. ಬಿ.ಎಸ್.ಪಾಟೀಲ್ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ: ಎಚ್. ಎಂ ವೆಂಕಟೇಶ್ ಆರೋಪ
ಬೆಂಗಳೂರು: 'ಜನಧಿಕಾರ ಸಂಘರ್ಷ ಪರಿಷತ್ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ಮತ್ತು ಅವರ ಪತ್ನಿ ಶೋಭಾ ಪಾಟೀಲ್, ಮಗ ಸೂರಜ್ ಪಾಟೀಲ್ ಮೇಲೆ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದು, ಆದರೆ ಯಾವುದೇ ಮಾಹಿತಿಯನ್ನು ಒದಗಿಸದೇ ಪ್ರಕರಣವನ್ನೇ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ' ಎಂದು ಸಾಮಾಜಿಕ ಹೋರಾಟಗಾರ ಎಚ್. ಎಂ ವೆಂಕಟೇಶ್ ಆರೋಪಿಸಿದ್ದಾರೆ.
''ಇದರಿಂದ ರಾಜ್ಯದ ನಾಗರೀಕರಿಗೆ ತಪ್ಪು ಸಂದೇಶ ಹೋಗುತ್ತಿದ್ದು ಲೋಕಾಯುಕ್ತ ಸಂಸ್ಥೆಯ ಮೇಲೆ ಜನರು ಇಟ್ಟಿರುವ ಇರುವ ವಿಶ್ವಾಸ, ನಂಬಿಕೆ, ಗೌರವ, ಘನತೆಗೆ ದ್ರೋಹ ಎಸಗುತ್ತಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಲೋಕಾಯುಕ್ತ ಸಂಸ್ಥೆಯ ಬಗ್ಗೆ ಈಗ ಜನರು ಎಚ್ಚೆತ್ತುಕೊಳ್ಳುವ ಸಂದರ್ಭ ಒದಗಿ ಬಂದಿದೆ'' ಎಂದು ವೆಂಕಟೇಶ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ದೂರಿನ ಮೇಲೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಕೋರಿ ಮಾಹಿತಿ ಅಧಿನಿಯಮದಡಿ, ಮೇ 8ರಂದ ಜನಾಧಿಕಾರ ಸಂಘರ್ಷ ಪರಿಷತ್ ಪರವಾಗಿ ಎಚ್ ಎಂ ವೆಂಕಟೇಶ್ ಅವರು ಲೋಕಾಯುಕ್ತ ಎಡಿಜಿಪಿ ಮತ್ತು ಐಜಿಗೆ ಅರ್ಜಿ ಸಲ್ಲಿಸಿದ್ದರು.
ಆದರೆ, ''ತಾವು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸಲು ಸಂಬಂಧಿಸಿದ ಶಾಖೆಗೆ ಕೋರಲಾಗಿತ್ತು, ಯಾವುದೇ ಮಾಹಿತಿಯನ್ನು ಸಲ್ಲಿಸಿರುವುದಿಲ್ಲ'' ಎಂದು ಲೋಕಾಯುಕ್ತ ಎಡಿಜಿಪಿ ಮತ್ತು ಐಜಿಯವರು ಹಿಂಬರಹ ನೀಡಿದ್ದಾರೆ.