ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಬಿ.ಎಸ್. ಯಡಿಯೂರಪ್ಪ
ಬೆಂಗಳೂರು: ಇಲ್ಲಿನ ಗಂಗಾನಗರದ ಬಡಾವಣೆಯಲ್ಲಿನ 1.11 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಆರೋಪ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರ ನೋಟಿಸ್ ಮೇರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ವಿಚಾರಣೆಗೆ ಹಾಜರಾಗಿದ್ದಾರೆ.
2007 ಮತ್ತು 2010ರ ನಡುವೆ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಮತ್ತು ಬಿ.ಎಸ್. ಯಡಿಯೂರಪ್ಪ ಅವರು ಗಂಗಾನಗರದ ಬಳಿಯ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿ, ಕುಮಾರಸ್ವಾಮಿಯವರ ಸಂಬಂಧಿಯ ಹೆಸರಿಗೆ ನೋಂದಣಿ ಮಾಡಿದ್ದರು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಪ್ರಾರಂಭಿಸಿದ್ದ ಅಕ್ರಮ ಡಿನೋಟಿಫಿಕೇಷನ್ ಪ್ರಕ್ರಿಯೆಯನ್ನು ಯಡಿಯೂರಪ್ಪ ಅವಧಿಯಲ್ಲಿ ಮುಕ್ತಾಯಗೊಳಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ.
ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರ ತನಿಖೆ ಚುರುಕುಗೊಂಡಿದೆ.
ಶನಿವಾರ ಮಧ್ಯಾಹ್ನ ಲೋಕಾಯುಕ್ತ ತನಿಖಾಧಿಕಾರಿಗಳ ಮುಂದೆ ಹಾಜರಾದ ಬಿ.ಎಸ್.ಯಡಿಯೂರಪ್ಪ, ಸುಮಾರು 1 ಗಂಟೆಗಳ ಕಾಲ ವಿಚಾರಣೆ ಎದುರಿಸಿದರು. ತನಿಖೆಗೆ ಅಗತ್ಯವಾದರೆ ಮತ್ತೆ ಕರೆದು ವಿಚಾರಣೆ ಕರೆಯಲಾಗುವುದು. ಅಲ್ಲದೆ, ಅಕ್ರಮ ಡಿನೋಟಿಫಿಕೇಷನ್‍ಗೆ ಸಂಬಂಧಿಸಿದಂತೆ ಆರೋಪ ಕೇಳಿಬಂದ ಎಲ್ಲರಿಗೂ ನೋಟಿಸ್ ನೀಡಿ, ವಿಚಾರಣೆ ನಡೆಸಲಾಗುವುದು ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.